ಸೋಮವಾರ, ಜನವರಿ 25, 2021
27 °C
ಪದವಿಯ 1, 2ನೇ ವರ್ಷದ ಭೌತಿಕ ತರಗತಿ ಆರಂಭಿಸಲು ಮನವಿ

ಅತಿಥಿ ಉಪನ್ಯಾಸಕರ ನೇಮಕಾತಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬೋಧನೆ ಮಾಡಲು ಪ್ರಸಕ್ತ ಶೈಕ್ಷಣಿಕ ಸಾಲಿಗೆ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಂಡು ಸೇವಾ ಭದ್ರತೆಯನ್ನು ನೀಡಬೇಕು ಎಂದು ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ಎಚ್‌. ಕೊಟ್ರೇಶ್‌ ಒತ್ತಾಯಿಸಿದರು.

‘ಕೋವಿಡ್‌ ಕಾರಣಕ್ಕೆ ಒಂಬತ್ತು ತಿಂಗಳುಗಳಿಂದ ಮನೆಯಲ್ಲೇ ಇರುವುದರಿಂದ ಅತಿಥಿ ಉಪನ್ಯಾಸಕರು ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಹಲವರು ಬೀದಿ ವ್ಯಾಪಾರಿಗಳಾಗಿ ಜೀವನ ಸಾಗಿಸುವಂತಹ ಸ್ಥಿತಿ ನಿರ್ಮಾಣಗೊಂಡಿದೆ. ಉನ್ನತ ಶಿಕ್ಷಣ ಸಚಿವ ಅಶ್ವತ್‌ನಾರಾಯಣ ಅವರಿಗೆ ನಮ್ಮ ಸಮಸ್ಯೆ ಮನವರಿಕೆ ಮಾಡಿಕೊಟ್ಟಿದ್ದರಿಂದ 2019–20ನೇ ಶೈಕ್ಷಣಿಕ ಸಾಲಿನಲ್ಲಿ ಸೇವೆ ಸಲ್ಲಿಸಿದ ಅತಿಥಿ ಉಪನ್ಯಾಸಕರನ್ನೇ ನವೆಂಬರ್‌ 17ರಿಂದ ಮುಂದುವರಿಸಿ ನೇಮಕಾತಿ ಮಾಡಿಕೊಳ್ಳುವಂತೆ ಅವರು ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದರು. ಆದರೆ, ಅಧಿಕಾರಿಗಳು ಇನ್ನೂ ನೇಮಕ ಮಾಡಿಕೊಂಡಿಲ್ಲ’ ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 14,447 ಅತಿಥಿ ಉಪನ್ಯಾಸಕರು ಸೇವೆ ಸಲ್ಲಿಸುತ್ತಿದ್ದಾರೆ. ಹಲವರು ಮೂರು ದಶಕಗಳ ಕಾಲ ಸೇವೆ ಸಲ್ಲಿಸಿದ್ದರೂ ಇಎಸ್‌ಐ, ಪಿಎಫ್‌, ರಜಾ ಸೌಲಭ್ಯಗಳು ಸಿಗುತ್ತಿಲ್ಲ. ಗೌರವಧನವೂ ಸಕಾಲಕ್ಕೆ ಬಿಡುಗಡೆಯಾಗುತ್ತಿಲ್ಲ. ಒಂದು ವರ್ಷದ ಅವಧಿಯಲ್ಲಿ 24 ಅತಿಥಿ ಉಪನ್ಯಾಸಕರು ಬಡತನದ ಒತ್ತಡದಿಂದ ಕಾಯಿಲೆಗೆ ಬಿದ್ದು ಸಾವನ್ನಪ್ಪಿದ್ದಾರೆ’ ಎಂದು ವಿಷಾದಿಸಿದರು.

ಶೇ 30ರಷ್ಟು ಮಾತ್ರ ಕಾಯಂ ಉಪನ್ಯಾಸಕರಿದ್ದಾರೆ. ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ನಿಯೋಜಿಸಿಕೊಳ್ಳದೇ ಇರುವುದರಿಂದ ಲಕ್ಷಾಂತರ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಬೇಕು ಎಂದು ಕೊಟ್ರೇಶ್‌ ಒತ್ತಾಯಿಸಿದರು.

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಹಾಗೂ ಕೋವಿಡ್‌ ಮಾರ್ಗಸೂಚಿ ಪ್ರಕಾರ ಪ್ರತಿ ತರಗತಿಗೆ 40ರಿಂದ 50 ವಿದ್ಯಾರ್ಥಿಗಳನ್ನು ಸೀಮಿತಗೊಳಿಸಬೇಕಾಗಿದೆ. ಇದರಿಂದ ಉದ್ಭವಿಸುವ ಹೆಚ್ಚುವರಿ ಕಾರ್ಯಭಾರಕ್ಕೆ ಹೊಸದಾಗಿ ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳದೇ ಈಗಾಗಲೇ ಕಾರ್ಯನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವನ್ನು ಹಂಚಿಕೆ ಮಾಡಬೇಕು ಎಂದು ಮನವಿ ಮಾಡಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಹಿಂದೆ ಜೆಒಸಿ ಉಪನ್ಯಾಸಕರ ಸೇವೆಯನ್ನು ಸಕ್ರಮಗೊಳಿಸಿರುವಂತೆಯೇ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸೇವೆಯನ್ನೂ ಕಾಯಂಗೊಳಿಸಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಡಾ.ಟಿ.ಜಿ. ಮಲ್ಲಿಕಾರ್ಜುನ, ‘ಹಲವು ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಪದವಿಯ 1 ಮತ್ತು 2ನೇ ವರ್ಷಕ್ಕೆ ಭೌತಿಕ ತರಗತಿಗಳನ್ನು ಆರಂಭಿಸಲಾಗಿದೆ. ಆದರೆ, ದಾವಣಗೆರೆ ವಿಶ್ವವಿದ್ಯಾಲಯ ಮಾತ್ರ ಇನ್ನೂ ಆರಂಭಿಸಿಲ್ಲ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ವಿಶ್ವವಿದ್ಯಾಲಯ ಕಾಳಜಿ ವಹಿಸುತ್ತಿಲ್ಲ. ಕಳೆದ ವರ್ಷ ಮಾಡಿದ ಪರೀಕ್ಷಾ ಕಾರ್ಯಕ್ಕೆ ಇನ್ನೂ ಹಣ ಬಿಡುಗಡೆ ಮಾಡಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪಿ.ವಿ.ಸಿದ್ಧಮ್ಮ, ‘ಅತಿಥಿ ಉಪನ್ಯಾಸಕರ ಪೈಕಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ತೊಂದರೆ ಅನುಭವಿಸುತ್ತಿದ್ದಾರೆ. ಹೆರಿಗೆ ಸಂದರ್ಭದ ಯಾವುದೇ ಸೌಲಭ್ಯಗಳೂ ಸಿಗುತ್ತಿಲ್ಲ’ ಎಂದು ಅಳಲು ತೋಡಿಕೊಂಡರು.

ಪದಾಧಿಕಾರಿಗಳಾದ ಡಾ.ಎಂ. ಪ್ರಭಾಕರ, ಸತೀಶ ಎ.ಆರ್‌., ಗಂಗಾಧರ, ಕೆ.ಎಂ. ಓಬಳೇಶ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.