ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘21ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ’

ಪೌರತ್ವ (ತಿದ್ದುಪಡಿ) ಕಾಯ್ದೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮ
Last Updated 18 ಡಿಸೆಂಬರ್ 2019, 15:23 IST
ಅಕ್ಷರ ಗಾತ್ರ

ದಾವಣಗೆರೆ: ಪೌರತ್ವ (ತಿದ್ದುಪಡಿ) ಕಾಯ್ದೆ ತಿದ್ದುಪಡಿ(ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ಆರ್‌ಸಿ) ಜಾರಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಡಿ.18ರ ರಾತ್ರಿ 8ರಿಂದ ಡಿ.21ರ ಮಧ್ಯರಾತ್ರಿ 12ರವರೆಗೆ ಜಿಲ್ಲೆಯಾದ್ಯಂತ 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಪೌರತ್ವ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದಕ್ಕಾಗಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಕರೆಯಲಾಗಿದ್ದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ತಾಲ್ಲೂಕುಗಳ ದಂಡಾಧಿಕಾರಿಗಳು ಸೇರಿ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಸೇರಿ ಎಲ್ಲ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ ಜಿಲ್ಲಾಧಿಕಾರಿ, ಎಲ್ಲ ಸಮುದಾಯದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಶಾಂತಿ ಪಾಲನೆ ಮಾಡಲಾಗುವುದು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ ಮಾತನಾಡಿ, ಸಿಎಎ ಹಾಗೂ ಎನ್‍ಆರ್‍ಸಿ ಜಾರಿ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಎಡಿಜಿಪಿಯವರು ಈ ತಕ್ಷಣದಿಂದಲೇ 144 ಸೆಕ್ಷನ್ ಜಾರಿಗೊಳಿಸುವಂತೆ ಸೂಚನೆ ನೀಡಿದ್ದು, ಶಾಂತಿ ಪಾಲನೆಗಾಗಿ ಪೊಲೀಸ್ ಇಲಾಖೆ, ಕೆಎಸ್‍ಆರ್‍ಟಿಸಿ, ಶಿಕ್ಷಣ, ಹೋಂಗಾಡ್ರ್ಸ್, ಬೆಸ್ಕಾಂ, ಅಗ್ನಿಶಾಮಕ ದಳ, ಅರಣ್ಯ ಸೇರಿ ಎಲ್ಲರೂ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಬೇಕು’ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಅಗತ್ಯವಾದ ಪೊಲೀಸ್ ಪಡೆ ಇದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಸೋಷಿಯಲ್ ಮೀಡಿಯಾ ಬಗ್ಗೆಯೂ ಕಟ್ಟೆಚ್ಚರ ವಹಿಸಲಾಗುವುದು. ಮುಂದಿನ ದಿನಗಳಲ್ಲಿ ಕ್ರಿಸ್‍ಮಸ್ ಹಾಗೂ ಹೊಸ ವರ್ಷಾಚರಣೆಯೂ ಇದ್ದು ಎಲ್ಲರೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಹಕರಿಸಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ನಜ್ಮಾ.ಜಿ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಎಎಸ್‍ಪಿ ಎಂ.ರಾಜೀವ್, ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ, ಡಿವೈಎಸ್‍ಪಿಗಳಾದ ಮಂಜುನಾಥ್ ಗಂಗಲ್, ನಾಗೇಶ್ ಐತಾಳ್, ತಹಶೀಲ್ದಾರ್‍ಗಳಾದ ಸಂತೋಷ್‍ಕುಮಾರ್, ತಿಮ್ಮಣ್ಣ ಹುಲ್ಮನಿ, ರಾಮಚಂದ್ರಪ್ಪ, ಆರ್‍ಟಿಓ ಎನ್.ಜೆ. ಬಣಕಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT