ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಡವರ ಜತೆ ಚೆಲ್ಲಾಟವಾಡಬೇಡಿ: ಅಧಿಕಾರಿಗಳಿಗೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೂಚನೆ

ಶಾಸಕರ ನೇತೃತ್ವದಲ್ಲಿ ಬಗರ್‌ಹುಕುಂ ಸಾಗುವಳಿ ಕುರಿತು ಅಧಿಕಾರಿಗಳ ಸಭೆ
Last Updated 11 ಆಗಸ್ಟ್ 2021, 2:47 IST
ಅಕ್ಷರ ಗಾತ್ರ

ಚನ್ನಗಿರಿ: ‘ವಿಧಾನಸಭಾ ಕ್ಷೇತ್ರ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಬಗರ್‌ಹುಕುಂ ಸಮಿತಿ ಶಿಫಾರಸು ಮಾಡಿದ್ದರೂ ಕಂದಾಯ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿತನದಿಂದಾಗಿ ಹಕ್ಕುಪತ್ರಗಳನ್ನು ನೀಡಿಲ್ಲ. ಇನ್ನು ಮುಂದೆ ಇಂತಹ ಲೋಪವೆಸಗುವ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಂದಾಯ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಾಯಕೊಂಡ ಹಾಗೂ ಚನ್ನಗಿರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡುವ ಸಂಬಂಧ ಮಂಗಳವಾರ ನಡೆದ ತಾಲ್ಲೂಕು ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಾರು ಹೆಚ್ಚು ಹಣ ಕೊಡುತ್ತಾರೋ ಅಂತಹವರಿಗೆ ಹೆಚ್ಚು ಭೂಮಿ ಹಾಗೂ ಕಡಿಮೆ ಹಣ ಕೊಟ್ಟವರಿಗೆ ಕಡಿಮೆ ಭೂಮಿಯನ್ನು ಹಂಚುವ ಕಾರ್ಯವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮಾಡಿಕೊಂಡು ಬಂದಿದ್ದಾರೆ. ನಿಜವಾಗಿ ಸಾಗುವಳಿ ಮಾಡಿರುವ ಜಮೀನು ಎಷ್ಟು ಎಂಬುದನ್ನು ಸ್ಥಳ ಪರಿಶೀಲನೆ ಮಾಡದೆ, ಎಲ್ಲಿಯೋ ಕುಳಿತು ಭೂಮಿಯನ್ನು ನೀಡಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇದೆಲ್ಲಾ ಇನ್ನು ಮುಂದೆ ನಡೆಯುವುದಿಲ್ಲ. ಬಡವರ ಜತೆ ಚೆಲ್ಲಾಟವಾಡುವುದನ್ನು ಕೈ ಬಿಡದಿದ್ದರೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಗುಡ್ಡಗಳ ಮೇಲಿನ ಸ್ಥಳಗಳಲ್ಲಿ ಹಿಟಾಚಿ ಯಂತ್ರಗಳನ್ನು ಬಳಸಿ, ಅಕ್ರಮವಾಗಿ ಉಳುಮೆ ಮಾಡಲು ಮುಂದಾಗಿರುವವರ ಬಗ್ಗೆ ಯಾವುದೇ ಕ್ರಮವನ್ನು ಕೈಗೊಳ್ಳುವಲ್ಲಿ ಕಂದಾಯ ಇಲಾಖೆ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ವಿಫಲರಾಗಿದ್ದಾರೆ. ಸೇವಾ ಮನೋಭಾವನೆ ಹಾಗೂ ಮಾನವೀಯತೆ ಹೊಂದಿ ಬಡವರಿಗೆ ಅನ್ಯಾಯವಾಗದ ರೀತಿಯಲ್ಲಿ ಜಮೀನು ಹಂಚಿಕೆ ಮಾಡಬೇಕು. ಅತಿವೃಷ್ಟಿಯಿಂದ ಮನೆಯ ಒಂದು ಗೋಡೆ ಬಿದ್ದು,ಪಕ್ಕದ ಗೋಡೆಗೂ ಅಪಾಯ ಇದ್ದರೂ ಭಾಗಶಃ ಹಾನಿ ಎಂದು ಗ್ರಾಮ ಲೆಕ್ಕಾಧಿಕಾರಿ ವರದಿಯನ್ನು ನೀಡುತ್ತಾರೆ. ಅದರ ಬದಲು ಆ ಫಲಾನುಭವಿ ಮನೆ ನಿರ್ಮಿಸಿಕೊಳ್ಳಲು ಸಹಾಯವಾಗುವಂತೆ ಪರಿಹಾರವನ್ನು ನೀಡಬೇಕು ಎಂದು ಸೂಚಿಸಿದರು.

ಮಾಯಕೊಂಡ ಶಾಸಕ ಪ್ರೊ.ಎನ್. ಲಿಂಗಣ್ಣ ಮಾತನಾಡಿ, ‘ಜನರ ಕಷ್ಟಸುಖಗಳನ್ನು ಬಗೆಹರಿಸುವ ಗುರುತರವಾದ ಹೊಣೆಗಾರಿಕೆ ಕಂದಾಯ ಇಲಾಖೆ ಅಧಿಕಾರಿಗಳ ಮೇಲಿದೆ. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಲು ಶೀಘ್ರ ಕ್ರಮ ಕೈಗೊಳ್ಳಬೇಕು’ ಎಂದರು.

ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಾಲ್ಲೂಕಿನ 4 ಹೋಬಳಿಗಳಿಂದ ಒಟ್ಟು 6,370 ಅರ್ಜಿಗಳು ಬಂದಿವೆ. ಮಾಯಕೊಂಡ ಕ್ಷೇತ್ರದಲ್ಲಿ 2,696 ಅರ್ಜಿಗಳು ಸ್ವೀಕೃತವಾಗಿವೆ. ಹಾಗೆಯೇ 50 ಹಾಗೂ 57 ನಮೂನೆಯಲ್ಲಿ ಅರ್ಜಿ ನೀಡಿದವರ ಸಂಖ್ಯೆ 1,073 ಆಗಿದ್ದು, ಮಾಯಕೊಂಡ ಕ್ಷೇತ್ರದಲ್ಲಿ 242 ಅರ್ಜಿಗಳು ಬಾಕಿ ಉಳಿದಿವೆ. ಈ ಎಲ್ಲ ಅರ್ಜಿಗಳನ್ನು ಹದಿನೈದು ಅಥವಾ 1 ತಿಂಗಳಲ್ಲಿ ಪರಿಶೀಲನೆ ನಡೆಸಿ, ಹಕ್ಕುಪತ್ರ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT