ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಗಾಲ | ಹೆಚ್ಚುವರಿಯಾಗಿ ಪ್ರತಿ ಜಿಲ್ಲೆಗೆ ₹2 ಕೋಟಿ: ಸಿದ್ದರಾಮಯ್ಯ

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೊ ಸಂವಾದದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ
Published 6 ಮಾರ್ಚ್ 2024, 7:04 IST
Last Updated 6 ಮಾರ್ಚ್ 2024, 7:04 IST
ಅಕ್ಷರ ಗಾತ್ರ

ದಾವಣಗೆರೆ: ಈ ಬಾರಿ ತೀವ್ರ ಬರಗಾಲ ಎದುರಾಗಿದ್ದು, ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಕ್ರಿಯಾಯೋಜನೆ ರೂಪಿಸಿ, ಸಮರ್ಪಕ ಕುಡಿಯುವ ನೀರು ಪೂರೈಕೆ ಮತ್ತು ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಕ್ರಮ ಕೈಗೊಂಡು ಜನರಿಗೆ ಉದ್ಯೋಗ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿ, ‘ಬರದಿಂದಾಗಿ ಮಾರ್ಚ್, ಏಪ್ರಿಲ್ ಹಾಗೂ ಮೇ ತಿಂಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗಲಿದೆ. ಕೆಲವು ಕಡೆಗಳಲ್ಲಿ ಪೂರ್ವ ಮುಂಗಾರು ಮಳೆಯನ್ನು  ನಿರೀಕ್ಷಿಸಿದ್ದು, ಆದರೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಸಿಇಒಗಳು ಪರಿಸ್ಥಿತಿಯನ್ನು ಅವಲೋಕಿಸಿ ಸೂಕ್ತ ಯೋಜನೆ ರೂಪಿಸಬೇಕು’ ಎಂದರು.

‘ಮಾಧ್ಯಮಗಳಲ್ಲಿ ಪ್ರಕಟವಾಗುವ ಜನರ ಸಮಸ್ಯೆಗಳ ಕುರಿತ ವರದಿಗಳನ್ನು ಪರಿಶೀಲಿಸಿ, ಅವುಗಳಿಗೆ ತಕ್ಷಣವೇ ಸ್ಪಂದಿಸಬೇಕು. ಕುಡಿಯುವ ನೀರಿಗೆ ತೊಂದರೆಯಾಗಬಾರದು. ಟ್ಯಾಂಕರ್, ಖಾಸಗಿ ಕೊಳವೆಬಾವಿ ಸೇರಿದಂತೆ ಯಾವುದೇ ಜಲಮೂಲಗಳಿಂದ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು. ನೀರು ಪೂರೈಕೆಗೆ ಅಗತ್ಯವಿರುವ ಅನುದಾನವನ್ನು ಸರ್ಕಾರ ಒದಗಿಸಲಿದೆ’ ಎಂದರು.

‘ಎಲ್ಲಾ ಜಿಲ್ಲಾಧಿಕಾರಿಗಳ ಪಿ.ಡಿ.ಖಾತೆಯಲ್ಲಿ ₹855 ಕೋಟಿ ಬರನಿರ್ವಹಣೆಯ ಅನುದಾನ ಲಭ್ಯವಿದ್ದು, ಇದರೊಂದಿಗೆ ಪ್ರತಿ ಜಿಲ್ಲೆಗೆ ₹ 2 ಕೋಟಿಯನ್ನು ಹೆಚ್ಚುವರಿಯಾಗಿ ಅನುದಾನ ಬಿಡುಗಡೆ ಮಾಡಲಾಗುವುದು’  ಎಂದರು.

ಮಾನವ ದಿನಗಳ ಹೆಚ್ಚಳಕ್ಕೆ ಮನವಿ:

‘ಬರಗಾಲ ಸಂದರ್ಭ ಉದ್ಯೋಗ ಖಾತರಿ ಮಾನವ ದಿನಗಳನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಉದ್ಯೋಗ ನೀಡುವ ಮೂಲಕ ವಲಸೆ ಹೋಗುವುದನ್ನು ತಪ್ಪಿಸಬಹುದು. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ರಜೆ ಮೇಲೆ ತೆರಳದೇ ಜನರ ಸಮಸ್ಯೆ ನಿವಾರಣೆಗೆ ಶ್ರಮಿಸಬೇಕು’ ಎಂದು ಸೂಚಿಸಿದರು.

ಜಿಲ್ಲೆಯಲ್ಲಿ 175 ಗ್ರಾಮಗಳನ್ನು ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಿ ಆ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಗಾಗಿ ಖಾಸಗಿ ಕೊಳವೆ ಬಾವಿಗಳನ್ನು ಗುರುತಿಸಲಾಗಿದೆ. ಇಲ್ಲಿಯವರೆಗೆ 21 ಕೊಳವೆ ಬಾವಿಗಳನ್ನು ಬಾಡಿಗೆ ಪಡೆದು ನೀರು ಪೂರೈಕೆ ಮಾಡಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಟ್ಯಾಂಕರ್‌ಗಳ ಮೂಲಕ  ಕುಡಿಯುವ ನೀರು ಪೂರೈಕೆ ಮಾಡಲು ಎಲ್ಲಾ ತಾಲ್ಲೂಕುಗಳಲ್ಲಿ ಟ್ಯಾಂಕರ್ ಸರಬರಾಜು ಮಾಡಲು ದರಪಟ್ಟಿ ನಿಗದಿಗೆ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿರುತ್ತದೆ. ಜಿಲ್ಲೆಯಲ್ಲಿ ಮುಂದಿನ 37 ವಾರಗಳಿಗೆ ಆಗುವಷ್ಟು ಮೇವು ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಬರಗಾಲದಿಂದ ಮೇವಿನ ಕೊರತೆಯಾಗದಂತೆ ಮೇವಿನ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ತಿಳಿಸಿದರು.

 ‘ಬರಪರಿಹಾರದ ಕಂಟ್ರೋಲ್ ರೂಂಗಳು 24X7 ಕೆಲಸ ನಿರ್ವಹಿಸಲು ಸಹಾಯವಾಣಿ ಎಲ್ಲಾ ತಾಲ್ಲೂಕುಗಳಲ್ಲಿ ಸ್ಥಾಪಿಸಲು ಸೂಚಿಸಿ ಈಗಾಗಲೇ ಜಿಲ್ಲಾ ಪಂಚಾಯಿತಿಯಿಂದ 08192-226655 ಸಹಾಯವಾಣಿ ಸ್ಥಾಪಿಸಿ ದಿನದ ಮೂರು ಪಾಳಿಯಲ್ಲಿ ಕೆಲಸ ಮಾಡಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ’ ಎಂದರು.

ಸಂವಾದದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಸುರೇಶ್ ಬಿ.ಇಟ್ನಾಳ್, ಹೆಚ್ಚುವರಿ ಜಿಲ್ಲಾಧಿಕಾರಿ ಸೈಯ್ಯದಾ ಆಫ್ರೀನ್ ಬಾನು ಎಸ್.ಬಳ್ಳಾರಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT