ಸೋಮವಾರ, ಜುಲೈ 26, 2021
21 °C
ಕೋವಿಡ್–19 ಹಿನ್ನೆಲೆ: ಮಕ್ಕಳು ಕಳವಳವಿಲ್ಲದೇ ಪರೀಕ್ಷೆ ಬರೆಯಲು ಸಕಲ ಸಿದ್ಧತೆ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಸರ್ವ ಸಿದ್ದತೆಗೆ ಡಿಸಿ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜೂನ್ 25ರಿಂದ ಜುಲೈ 3ರವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಾವಳಿಯಂತೆ ಅಂತರ, ಸ್ಯಾನಿಟೈಸಿಂಗ್, ಡಿಸ್‍ಇನ್‍ಫೆಕ್ಷನ್ ಸೇರಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ವಿದ್ಯಾರ್ಥಿಗಳು ಯಾವುದೇ ಅಭದ್ರತೆ, ಕಳವಳವಿಲ್ಲದೇ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಬುಧವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಈಗಾಗಲೇ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟವಾಗಿದ್ದು, ಕೋವಿಡ್ ಹಿನ್ನೆಲೆಯಲ್ಲಿ ಸವಾಲಿನ ಮತ್ತು ವಿಶೇಷ ಪರೀಕ್ಷೆಯಾಗಿದೆ. ಸರ್ಕಾರದ ಆದೇಶದಂತೆ ಪರೀಕ್ಷೆ ಎದುರಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗಿದ್ದು, ಇನ್ನೂ ಹೆಚ್ಚಿನ ಮುತುವರ್ಜಿ ವಹಿಸಿ ಪರೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.

ಪ್ರಸಕ್ತ ಸಾಲಿನಲ್ಲಿ ಒಟ್ಟು 21,683 ವಿದ್ಯಾರ್ಥಿಗಳು ಒಟ್ಟು 93 (79+14) ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳವರೆಗೆ ಬರಲು ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಬೇಕು. ಒಬ್ಬ ವಿದ್ಯಾರ್ಥಿಯೂ  ಸಾರಿಗೆಯಿಂದ ವಂಚಿತರಾಗಿ ಪರೀಕ್ಷೆ ಬರೆಯದಂತೆ ಸಂಬಂಧಿಸಿದ ಅಧಿಕಾರಿಗಳು ಕಾಳಜಿ ವಹಿಸಬೇಕು. ಕೆಎಸ್‍ಆರ್‍ಟಿಸಿಯವರು ವಿಶೇಷವಾಗಿ ಮಕ್ಕಳನ್ನು ಪರೀಕ್ಷೆಗಳಿಗೆ ತೆರಳಲು ಕಳಕಳಿಯಿಂದ ವ್ಯವಸ್ಥೆ ಮಾಡಬೇಕು’ ಎಂದರು.

ಪ್ರತಿ ಪರೀಕ್ಷೆಗಳ ಮುನ್ನ 7 ಬಾರಿ ಪ್ರತಿ ಕೊಠಡಿಗಳನ್ನು ಅಲ್ಲಿನ ಸ್ಥಳೀಯ ಸಂಸ್ಥೆಗಳು ಡಿಸ್‍ಇನ್‍ಫೆಕ್ಷನ್ ಮಾಡಲಿದ್ದು, ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸೂಕ್ತ ಯೋಜನೆ ಮಾಡಿಕೊಂಡು ಕೆಲಸ ನಿರ್ವಹಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ತಲಾ ಇಬ್ಬರು ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರನ್ನು (ಅಗತ್ಯ ಔಷಧಗಳೊಂದಿಗೆ) ನಿಯೋಜಿಸಲಾಗುವುದು. ಪ್ರತಿ ತಾಲ್ಲೂಕಿನ ತಹಶೀಲ್ದಾರರು ತಲಾ 5 ಸಾವಿರ ಮಾಸ್ಕ್‌ಗಳನ್ನು ನೀಡುವಂತೆ ಸಭೆಯಲ್ಲಿ ತಿಳಿಸಿದರು.

‘ಎಸ್‍ಒಪಿ ಪ್ರಕಾರ ಎಲ್ಲಾ ಪರೀಕ್ಷಾ ಕೇಂದ್ರಗಳ ಸಾಮಾನ್ಯ ಮತ್ತು ವಿಶೇಷ ಕೊಠಡಿಗಳಲ್ಲಿ ಅಂತರ ಕಾಯ್ದುಕೊಳ್ಳುವಂತೆ ಆಸನ ವ್ಯವಸ್ಥೆ ಮಾಡಲಾಗಿದೆ. ಮಾರ್ಗಗಳ ಮೂಲಕ ಪ್ರಶ್ನೆ ಪತ್ರಿಕೆ ವಿತರಣೆಗೆ ವಾಹನ ವ್ಯವಸ್ಥೆ ಮಾಡುವಂತೆ ಎಡಿಸಿಯವರಿಗೆ ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ನಿಷೇಧವಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ ಜೆರಾಕ್ಸ್ ಮತ್ತು ಸೈಬರ್ ಕೆಫೆ ಮುಚ್ಚಿಸಲು ಕ್ರಮ ವಹಿಸಲಾಗುವುದು. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಡಿಡಿಪಿಐ ಸಿ.ಆರ್.ಪರಮೇಶ್ವರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ನಿಯಮದಂತೆ ಎಲ್ಲ 93 ಪರೀಕ್ಷಾ ಕೇಂದ್ರಗಳಲ್ಲಿ ಅಡ್ಡ ಮತ್ತು ಉದ್ದವಾಗಿ ಮೂರು ಅಡಿ ಅಂತರದಲ್ಲಿ ಡೆಸ್ಕ್ ವ್ಯವಸ್ಥೆ ಮಾಡಲಾಗಿದೆ. ಒಂದು ಡೆಸ್ಕ್‌ನಲ್ಲಿ ಇಬ್ಬರು ವಿದ್ಯಾರ್ಥಿಗಳು ಕೂರುತ್ತಾರೆ. ನೀರಿನ ವ್ಯವಸ್ಥೆ ಮಾಡಿದ್ದರೂ ಮಕ್ಕಳು ಮನೆಯಿಂದ ಬಾಟಲಿಯಲ್ಲಿ ನೀರು ತಂದರೆ ಒಳಿತು ಎಂದು ತಿಳಿಸಲಾಗಿದೆ’ ಎಂದರು.

‘ಮಂಡಳಿಯಿಂದ 200 ಮಕ್ಕಳಿಗೆ ಒಂದರಂತೆ ಥರ್ಮಲ್ ಸ್ಕ್ಯಾನರ್‍ಗಳನ್ನು ನೀಡಿದ್ದು, 14 ಹೆಚ್ಚುವರಿ ಕೇಂದ್ರಗಳಿಗೆ ಥರ್ಮಲ್ ಸ್ಕ್ಯಾನರ್ ಅವಶ್ಯಕತೆ ಇದೆ. ನಗರದಲ್ಲಿ ಕಂಟೈನ್‍ಮೆಂಟ್ ಜೋನ್‍ನಿಂದ 90 ವಿದ್ಯಾರ್ಥಿಗಳನ್ನು ಗುರುತಿಸಿದ್ದು, ಇವರಿಗೆ ಎನ್–95 ಮಾಸ್ಕ್ ನೀಡಬೇಕಿದೆ’ ಎಂದರು.

ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿ ಇತ್ತೀಚೆಗೆ ಕೆಲವು ಕಂಟೈನ್‍ಮೆಂಟ್ ವಲಯಗಳನ್ನು ಡಿನೋಟಿಫೈ ಮಾಡಿದ್ದು, ಈ ಪಟ್ಟಿಯನ್ನು ಪರಿಷ್ಕರಿಸಬೇಕು. ಡಿಎಚ್‍ಒ ಅವರು ಎನ್–95 ಮಾಸ್ಕ್, ಥರ್ಮಲ್ ಸ್ಕ್ಯಾನರ್‍ಗಳು ಹಾಗೂ 1500 ಸ್ಯಾನಿಟೈಸರ್ ಬಾಟೆಲ್‌ಗಳನ್ನು ನೀಡುವಂತೆ ಸೂಚಿಸಿದರು.

ಸಭೆಯಲ್ಲಿ ಎಡಿಸಿ ಪೂಜಾರ ವೀರಮಲ್ಲಪ್ಪ, ಎಎಸ್‍ಪಿ ರಾಜೀವ್, ಜಿಲ್ಲಾ ನೋಡಲ್ ಅಧಿಕಾರಿ ವೀರಣ್ಣ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.