ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರವಧಿಯಲ್ಲಿ ನಡೆದಿರುವ ಹಗರಣಗಳನ್ನು ಮುಚ್ಚಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್, ಮತ್ತೊಬ್ಬರ ಮೇಲೆ ಗೂಬೆ ಕೂರಿಸಲು ಯತ್ನಿಸುತ್ತಿದೆ. ಕೋವಿಡ್ ಸಂದರ್ಭದಲ್ಲಿ ನಡೆದಿರುವ ಅವ್ಯವಹಾರವನ್ನು ಹೊರಹಾಕಿ ನೋಡೋಣ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಸವಾಲು ಹಾಕಿದರು.
‘ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ವಿರೋಧ ಪಕ್ಷದಲ್ಲಿತ್ತು. ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಆರೋಪಗಳನ್ನು ಮಾಡುತ್ತಿದ್ದಾರೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ತಪ್ಪು ಕಂಡುಬಂದರೆ ಕಾನೂನು ಪ್ರಕಾರ ಕ್ರಮಕೈಗೊಳ್ಳಿ’ ಎಂದು ಭಾನುವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
‘ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್, ಗ್ಯಾರಂಟಿ ಹೆಸರಿನಲ್ಲಿ ಅಭಿವೃದ್ಧಿ ಮರೆತಿದೆ. ಸರ್ಕಾರದ ಯೋಜನೆಗಳು ಸರಿಯಾಗಿ ಜನರನ್ನು ತಲುಪುತ್ತಿಲ್ಲ. ಹೀಗಾಗಿ, ವಾರಕ್ಕೊಂದು ವಿಚಾರವನ್ನು ಪ್ರಸ್ತಾಪಿಸಿ ಜನರ ಗಮನ ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ’ ಎಂದು ಆರೋಪಿಸಿದರು.
‘136 ಶಾಸಕರನ್ನು ಹೊಂದಿರುವ ರಾಜ್ಯ ಸರ್ಕಾರವನ್ನು ಅಭದ್ರಗೊಳಿಸಲು ಯಾರಿಂದಲೂ ಸಾಧ್ಯವಿಲ್ಲ. ಅಧಿಕಾರ ಹಿಡಿಯುವ ಆತುರ ಬಿಜೆಪಿಗೆ ಇಲ್ಲ. ಕಾಂಗ್ರೆಸ್ ಸರ್ಕಾರ ಪತನವಾಗುವವರೆಗೂ ಕಾಯುತ್ತೇವೆ’ ಎಂದು ಹೇಳಿದರು.