ಶನಿವಾರ, ಆಗಸ್ಟ್ 20, 2022
22 °C
ಎಪಿಎಂಸಿ, ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಲು ಒತ್ತಾಯ

ಬೆಂಗಳೂರಿನಲ್ಲಿ 21ರಿಂದ ರೈತರ ಅಹೋರಾತ್ರಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಮಾಡಿರುವ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಸೆ.21ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಿ ಅನಿರ್ದಿಷ್ಟಾವಧಿವರೆಗೆ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ‘ಸೆ.21ರಂದು ಬೆಳಿಗ್ಗೆ 11.15ಕ್ಕೆ ಬೆಂಗಳೂರಿನ ರೈಲು ನಿಲ್ದಾಣದಿಂದ ಮೆರವಣಿಗೆಯಲ್ಲಿ ತೆರಳಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು. ಧರಣಿಯಲ್ಲಿ ಪಾಲ್ಗೊಳ್ಳಲು ಒಂದು ಸಾವಿರಕ್ಕೂ ಹೆಚ್ಚು ರೈತರು ಜಿಲ್ಲೆಯಿಂದ ತೆರಳಲಿದ್ದಾರೆ. ರೈತರಿಗೆ ಹೋಗಲು ಈಗಾಗಲೇ 25 ವಾಹನಗಳನ್ನು ನಿಗದಿಪಡಿಸಿಕೊಳ್ಳಲಾಗಿದೆ’ ಎಂದು ತಿಳಿಸಿದರು.

ಎಪಿಎಂಸಿ ಕಾಯ್ದೆ ಹಾಗೂ ಭೂಸುಧಾರಣಾ ಕಾಯ್ದೆಯನ್ನು ತಿದ್ದುಪಡಿ ಮಾಡಿರುವುದರಿಂದ ರೈತರು ಬೀದಿ ಪಾಲಾಗಲಿದ್ದಾರೆ. ತಿದ್ದಪಡಿಯನ್ನು ಹಿಂದಕ್ಕೆ ಪಡೆಯುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದರು.

ಜಿಲ್ಲೆಯಲ್ಲಿ 1.25 ಲಕ್ಷ ಹೆಕ್ಟೇರ್‌ಗಳಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಕೊಯ್ಲಿಗೆ ಸಮೀಪಿಸುತ್ತಿದ್ದು, ಸುಮಾರು ಆರು ಲಕ್ಷ ಟನ್‌ ಮೆಕ್ಕೆಜೋಳ ಉತ್ಪಾದನೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಕೂಡಲೇ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ, ‘ಬಂಡವಾಳಶಾಹಿಗಳನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿದೆ. ಕಪ್ಪು ಹಣ ಇರುವವರು ಕೃಷಿ ಭೂಮಿ ಖರೀದಿಸಲಿದ್ದು, ರೈತರು ಭೂಮಿ ಕಳೆದುಕೊಂಡು ನಿರುದ್ಯೋಗಿಗಳಾಗಲಿದ್ದಾರೆ. ಶ್ರೀಮಂತರು ಖರೀದಿಸಿದ ಕೃಷಿ ಭೂಮಿ ಪಾಳಬಿದ್ದು, ದೇಶದ ಆರ್ಥಿಕತೆಯೂ ಕುಸಿಯಲಿದೆ’ ಎಂದು ಆತಂಕ ವ್ಯಕ್ತಪಡಿಸಿದರು.

ರೈತ ಸಂಘದ ಪದಾಧಿಕಾರಿಗಳಾದ ಹುಚ್ಚವ್ವನಹಳ್ಳಿ ಗಣೇಶ್‌, ಮಲ್ಲಶೆಟ್ಟಿಹಳ್ಳಿ ಮಂಜುನಾಥ, ಪ್ರಶಾಂತ್‌ ಮತ್ತೂರು, ದೊರೆಸ್ವಾಮಿ ಜಿ.ಎಂ, ಮಲ್ಲಶೆಟ್ಟಿಹಳ್ಳಿ ಕರಿಬಸಪ್ಪ ಹಾಜರಿದ್ದರು.

ರೈತರ ಮಕ್ಕಳಿಗೆ ಸೀಟು ಸಿಗಲಿ

‘ಕೃಷಿ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಬಿಎಸ್ಸಿ ಪದವಿ ಕಾಲೇಜಿಗೆ ಪ್ರವೇಶ ಪಡೆಯಲು ರೈತರ ಮಕ್ಕಳಿಗೆ ಶೇ 40ರಷ್ಟು ಮೀಸಲಾತಿ ಕಲ್ಪಿಸಲಾಗಿತ್ತು. ಕೊರೊನಾ ಕಾರಣ ನೀಡಿ ಈ ಬಾರಿ ರೈತರ ಮಕ್ಕಳಿಗೆ ಪ್ರಾಯೋಗಿಕ ಪರೀಕ್ಷೆ ನಡೆಸದೇ ಕೇವಲ ಪ್ರಮಾಣಪತ್ರದ ಆಧಾರದಲ್ಲಿ ಸೀಟು ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಪಟ್ಟಣದಲ್ಲಿರುವ ಕೃಷಿಯ ಅನುಭವ ಇಲ್ಲದವರ ಮಕ್ಕಳಿಗೂ ಪ್ರಮಾಣಪತ್ರದ ಆಧಾರದಿಂದ ಸೀಟು ಲಭಿಸಲಿದ್ದು, ನಿಜವಾದ ರೈತರ ಮಕ್ಕಳು ಅವಕಾಶದಿಂದ ವಂಚಿತರಾಗಲಿದ್ದಾರೆ. ಹೀಗಾಗಿ ಪ್ರಾಯೋಗಿಕ ಪರೀಕ್ಷೆ ಆಧಾರದ ಮೇಲೆಯೇ ಸೀಟು ಹಂಚಿಕೆ ಮಾಡಬೇಕು’ ಎಂದು ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ ಆಗ್ರಹಿಸಿದರು.

ಕಾಯ್ದೆಯ ತಿದ್ದುಪಡಿಯನ್ನು ಹಿಂದಕ್ಕೆ ಪಡೆಯದಿದ್ದರೆ ಜಿಲ್ಲೆಯ ಗ್ರಾಮಗಳನ್ನು ಪ್ರವೇಶಿಸದಂತೆ ಬಿಜೆಪಿ ಶಾಸಕರು, ಸಂಸದರಿಗೆ ರೈತರು ದಿಗ್ಬಂಧನ ಹಾಕಲಿದ್ದಾರೆ ಎಂದು ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿನ್ನಸಮುದ್ರ ಶೇಖರನಾಯ್ಕ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.