ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಡಿ.7ರಂದು ವಿಧಾನಸೌಧಕ್ಕೆ ಮುತ್ತಿಗೆ

ರೈತ ಸಂಘದ ರಾಜ್ಯ ಸಮಿತಿ ಸಭೆಯಲ್ಲಿ ನಿರ್ಧಾರ
Last Updated 20 ನವೆಂಬರ್ 2020, 14:25 IST
ಅಕ್ಷರ ಗಾತ್ರ

ದಾವಣಗೆರೆ:ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಹಾಗೂ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲು ಡಿಸೆಂಬರ್ 7ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ರೈತ ಸಂಘ ನಿರ್ಧರಿಸಿದೆ.

ಇಲ್ಲಿನಎಪಿಎಂಸಿ ಸಭಾಂಗಣದಲ್ಲಿರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಕೋಡಿಹಳ್ಳಿ ಚಂದ್ರಶೇಖರ್ ಬಣ) ರಾಜ್ಯ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸುವ ಜೊತೆಗೆ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ರೈತ ಉತ್ಪನ್ನಗಳ ಖರೀದಿ ಕೇಂದ್ರ ತೆರೆಯಬೇಕು. ಅದು ವರ್ಷದ ರಜಾ ದಿನಗಳನ್ನು ಹೊರೆತುಪಡಿಸಿ ಉಳಿದ ದಿನಗಳಲ್ಲಿ ತೆರೆಯಬೇಕು ಎಂದು ಒತ್ತಾಯಿಸಲಾಯಿತು.

ರೈತರ ವಿವಿಧ ಬೇಡಿಕೆಗಳ ಸಂಬಂಧ ಸರ್ಕಾರವನ್ನು ಎಚ್ಚರಿಸಲು ಬೆಂಗಳೂರಿನಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದ ಸಮಯದಲ್ಲಿ ಹೋರಾಟ ಹಮ್ಮಿಕೊಳ್ಳುವ ತೀರ್ಮಾನ ಕೈಗೊಳ್ಳಲಾಯಿತು.

ಪ್ರತಿಯೊಬ್ಬರೂ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಕೋಡಿಹಳ್ಳಿ ಚಂದ್ರಶೇಖರ್ ಕರೆ ನೀಡಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ನ.26, 27ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ರಾಜ್ಯ ಸಮಿತಿ ಸದಸ್ಯರು ಮಾತ್ರ ಭಾಗವಹಿಸುವುದು. ನ.26ರಂದು ಗ್ರಾಮೀಣ ಭಾಗದಲ್ಲಿ ಪ್ರತಿಭಟನೆ ಮಾಡುವ ನಿರ್ಧಾರ ಕೈಗೊಳ್ಳಲಾಯಿತು.

ರಾಗಿ, ಮೆಕ್ಕೆಜೋಳ, ಭತ್ತ ಸೇರಿ ಇತರೆ ಬೆಳೆಗಳಿಗೆ ಆವರ್ತ ನಿಧಿ ಸ್ಥಾಪಿಸಬೇಕು. ಬೆಂಬಲೆ ಬೆಲೆಯಲ್ಲಿ ಎಲ್ಲ ಬೆಳೆಗಳನ್ನು ಖರೀದಿಸಬೇಕು ಎಂದು ಒತ್ತಾಯಿಸಿದ ಕೋಡಿಹಳ್ಳಿ ಚಂದ್ರಶೇಖರ್‌, ‘ಯಾವುದೇ ಪಕ್ಷಗಳು ರೈತರನ್ನು ಉಳಿಸುವ ದಿಟ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ’ ಎಂದು ದೂರಿದರು.

‘ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ತೊಂದರೆ ಆಗಿದೆ ಎಂದು ಹೇಳುವ ಧೈರ್ಯ ರೈತ ನಾಯಕ ಎನಿಸಿಕೊಳ್ಳುವ ಯಡಿಯೂರಪ್ಪ ಅವರಿಗೆ ಇಲ್ಲ. ಬಗರ್‌ಹುಕುಂ ಸಾಗುವಳಿದಾರರ ಪರ ಹೋರಾಟ ನಡೆಸಿದ್ದ ಯಡಿಯೂರಪ್ಪ ಈಗ ಅದೇ ಸಾಗುವಳಿದಾರರನ್ನು ಒಕ್ಕಲೆಬ್ಬಿಸುತ್ತಿದ್ದಾರೆ’ ಎಂದು ಅವರು ಆರೋಪಿಸಿದರು.

ಸಭೆಯಲ್ಲಿ ಸಂಘದ ಗೌರವಾಧ್ಯಕ್ಷ ಎಚ್.ಕೆ. ಬಸವರಾಜಪ್ಪ, ಕಾರ್ಯಾಧ್ಯಕ್ಷರಾದ ಮಂಜುನಾಥ್‍ ಗೌಡ್ರು ಸೊರಬ, ಈಚಘಟ್ಟಸಿದ್ಧವೀರಪ್ಪ, ರಾಜ್ಯ ಉಪಾಧ್ಯಕ್ಷ ಹೊನ್ನೂರು ಮುನಿಯಪ್ಪ, ಜಿಲ್ಲಾಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಚಿನ್ನಸಮುದ್ರ ಶೇಖರ ನಾಯ್ಕ, ಸೇರಿ ರೈತ ಮುಖಂಡರು, ರೈತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT