ಮಂಗಳವಾರ, ಅಕ್ಟೋಬರ್ 22, 2019
21 °C
ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್‍ ಆಗ್ರಹ

ಸಿದ್ದರಾಮಯ್ಯಗೆ ವಿರೋಧ ಪಕ್ಷ ಸ್ಥಾನ ನೀಡಿ

Published:
Updated:

ದಾವಣಗೆರೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಹಾಗೂ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರೆಸಬೇಕು ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್‍ ಅವರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ‘ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಉತ್ತಮ ಆಡಳಿತವನ್ನು ನೀಡಿದ್ದಾರೆ. ಅನ್ನಭಾಗ್ಯ ಯೋಜನೆ ಮೂಲಕ ಬಡವರ ಪಾಲಿನ ಅನ್ನದಾತರಾಗಿದ್ದಾರೆ. ನುಡಿದಂತೆ ನಡೆದ ಪರಿಶುದ್ಧ ರಾಜಕಾರಣಿಯಾದ ಅವರು ಬಡವರ ರಾಯಭಾರಿಯಂತೆ ಆಡಳಿತ ನಡೆಸಿ ಸರ್ವರಿಗೂ ಸಮಪಾಲು ಸಮಬಾಳು ನೀಡಿದ್ದಾರೆ. ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ರಾಜ್ಯವನ್ನು ಅವರು ಮುನ್ನಡೆಸಿ ಮಾಸ್ ಲೀಡರ್ ಆಗಿದ್ದಾರೆ’ ಎಂದು ಶ್ಲಾಘಿಸಿದರು.

‘2009ರಲ್ಲಿ ವಿರೋಧ ಪಕ್ಷದ ನಾಯಕರಾಗಿ 2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಶ್ರಮಿಸಿದರು. 2013ರಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಚುನಾವಣಾ ಪೂರ್ವ ನೀಡಿದ 165 ಭರವಸೆಗಳನ್ನು ಸಂಪೂರ್ಣವಾಗಿ ಪೂರೈಸಿದರಲ್ಲದೆ ಹೆಚ್ಚುವರಿಯಾಗಿ ಇಂದಿರಾ ಕ್ಯಾಂಟಿನ್, ಬಾಲಕಿಯರಿಗೆ ಎಲ್.ಕೆ.ಜಿ.ಯಿಂದ ಪಿ.ಜಿಯವರೆಗೆ ಉಚಿತ ವಿದ್ಯಾಭ್ಯಾಸ ಸೇರಿ ಅನೇಕ ಜನಪ್ರಿಯ ಕಾರ್ಯಗಳನ್ನು ಜಾರಿಗೊಳಿಸಿದ್ದಾರೆ’ ಎಂದರು.

ಬಿಜೆಪಿ ವಿರುದ್ಧ ರಾಜ್ಯದಲ್ಲಿ ಪಕ್ಷವನ್ನು ಕಟ್ಟಲು ಸಿದ್ದರಾಮಯ್ಯನವರು ಸಮರ್ಥ ನಾಯಕರಾಗಿದ್ದು, ಇವರನ್ನೇ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.

ದಿನೇಶ್ ಗುಂಡೂರಾವ್‍ ಅವರು 5 ಬಾರಿ ಶಾಸಕರಾಗಿ, ಸಚಿವರಾಗಿ, ರಾಜ್ಯ ಯುವಕ ಕಾಂಗ್ರೆಸ್ ಅಧ್ಯಕ್ಷ, ಬೆಂಗಳೂರು ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಸಮರ್ಥವಾಗಿ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸುತ್ತಿದ್ದಾರೆ. ಅವರ ನಾಯಕತ್ವದಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದಿದ್ದಾರೆ. ಆದ್ದರಿಂದ ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮುಂದುವರೆಸಬೇಕು ಎಂದು ಮನವಿ ಮಾಡಿದರು.

‘ರಾಜೀನಾಮೆ ನೀಡಿ ರಾಜ್ಯದ ಘನತೆ ಕಾಪಾಡಿ’

ರಾಜ್ಯದ 22 ಜಿಲ್ಲೆಗಳ ನೂರಾರು ತಾಲ್ಲೂಕುಗಳು ನೆರೆ ಹಾವಳಿಗೆ ತುತ್ತಾಗಿದ್ದು, ₹1 ಲಕ್ಷ ಕೋಟಿಗೂ ಹೆಚ್ಚು ನಷ್ಟವಾಗಿದೆ. ಆದ್ದರಿಂದ ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ ಅವರು, 25 ಸಂಸದರು, ನಾಲ್ವರು ಸಚಿವರು ರಾಜ್ಯವನ್ನು ಕೇಂದ್ರದಲ್ಲಿ ಪ್ರತಿನಿಧಿಸುತ್ತಿದ್ದು, ಇವರು ಮೋದಿಯ ಮುಂದೆ ಬಾಯಿ ಬಿಚ್ಚುತ್ತಿಲ್ಲ. ಇದರಿಂದ ರಾಜ್ಯಕ್ಕೆ ಅನ್ಯಾಯವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡಿ ಕೇಂದ್ರದ ಘನತೆಯನ್ನು ಕಾಪಾಡಬೇಕು’ ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಅಲ್ಲಾವಲಿ ಘಾಜಿಖಾನ್, ಆಟೊ ತಿಮ್ಮಣ್ಣ, ಕೆ.ವಿ. ಚಂದ್ರಶೇಖರ್, ಡಿ. ಶಿವಕುಮಾರ್, ತಿರುಮಾಲಪ್ಪ, ಬೆಂಡಿಗೆರೆ ಗುರುಸಿದ್ದಪ್ಪ, ಮಹೇಶ್ ಹಾಜರಿದ್ದರು.
 

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)