ಬುಧವಾರ, ಅಕ್ಟೋಬರ್ 28, 2020
28 °C
ಆರೋಗ್ಯ ಕಿಟ್ ವಿತರಣಾ ಸಮಾರಂಭದಲ್ಲಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ‌ ಸಂಸದ ಆರ್. ಧ್ರುವನಾರಾಯಣ

ದಾವಣಗೆರೆ: ರಾಜ್ಯದಲ್ಲಿ ‘ಆರೋಗ್ಯ ಹಸ್ತ’ಕ್ಕೆ ಉತ್ತಮ ಪ್ರತಿಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ರಾಜ್ಯದಲ್ಲಿ ’ಆರೋಗ್ಯ ಹಸ್ತ’ಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಯಾವೊಂದು ಪಕ್ಷಗಳು ಈ ತರಹದ ಕಾರ್ಯಕ್ರಮ ಮಾಡಿಲ್ಲ. ಇತರೆ ರಾಜ್ಯಗಳಲ್ಲೂ ಇದನ್ನು ಜಾರಿಗೆ ತರಲು ಕಾಂಗ್ರೆಸ್ ವರಿಷ್ಠರು ವರದಿ ಕೇಳಿದ್ದಾರೆ ಎಂದು ಕೆಪಿಸಿಸಿ ಆರೋಗ್ಯ ಹಸ್ತ ಸಮಿತಿ ಅಧ್ಯಕ್ಷ, ಮಾಜಿ ಸಂಸದ ಧ್ರುವನಾರಾಯಣ ಹೇಳಿದರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ  ಆರೋಗ್ಯ ಹಸ್ತ ತರಬೇತಿ ಹಾಗೂ ಆರೋಗ್ಯ ಕಿಟ್ ವಿತರಣಾ ಕಾರ್ಯಕ್ರಮವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿ, ‘ಕಾಂಗ್ರೆಸ್ ವರಿಷ್ಠರಾದ ರಾಹುಲ್‌ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರು ರಾಜ್ಯದಿಂದ ವರದಿ ತರಿಸಿಕೊಂಡಿದ್ದಾರೆ. ಅಲ್ಲದೇ ಹರಿಯಾಣದ ಕಾಂಗ್ರೆಸ್ ಮುಖಂಡ ರಣದೀಪ್‌ಸಿಂಗ್ ಸುರ್ಜಿವಾಲ ಅವರೂ ತಮ್ಮ ರಾಜ್ಯದಲ್ಲಿ ಈ ಕಾರ್ಯಕ್ರಮ ಮಾಡಲು ಮುಂದಾಗಿದ್ದಾರೆ’ ಎಂದು ತಿಳಿಸಿದರು.

‘ರಾಜ್ಯ ಕೊರೊನಾ ನಿಯಂತ್ರಿಸಲು ವಿಫಲವಾಗಿದೆ. ಆರೋಗ್ಯ ಸಚಿವರು ಯಾರೆಂಬ ಗೊಂದಲ ಶುರುವಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಹೆಸರಿನಲ್ಲಿ ದಂಧೆ ನಡೆಯುತ್ತಿದೆ. ವೆಂಟಿಲೇಟರ್, ಆಕ್ಸಿಜನ್ ಸಮಸ್ಯೆಯಾಗಿದೆ. ಈ ನಿಟ್ಟಿನಲ್ಲಿ ಜನರಿಗೆ ಸ್ಪಂದಿಸುವ ದೃಷ್ಟಿಯಿಂದ ಈ ಕಾರ್ಯಕ್ರಮ ಆರಂಭಿಸಲಾಗಿದೆ. ಕೋವಿಡ್ ವಾರಿಯರ್‌ಳಿಗೆ ಕೆಪಿಸಿಸಿಯಿಂದ ₹2 ಲಕ್ಷಗಳ ವಿಮೆ ಮಾಡಿಸಿದ್ದು, ಐಡಿ ಕಾರ್ಡ್ ಜೊತೆಗೆ ಪ್ರಮಾಣಪತ್ರವನ್ನು ನೀಡಲಾಗುವುದು‘ ಎಂದು ಹೇಳಿದರು.

ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಮಾತನಾಡಿ, ‘ಪ್ರಧಾನಿ ನರೇಂದ್ರ ಮೋದಿ ಅವರು ಬರೀ ಸುಳ್ಳುಗಳನ್ನು ಹೇಳುತ್ತಿದ್ದಾರೆಯೇ ಹೊರತು ಯಾವುದೇ ಕಾರ್ಯಕ್ರಮ ಮಾಡಿಲ್ಲ. ಕಳೆದ ಚುನಾವಣೆಯಲ್ಲಿ ಮೂರು ಬಾಂಬ್ ಹಾಕಿ 300 ಸೀಟ್ ಗೆದ್ದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿದ್ದ ವೇಳೆ 160 ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳನ್ನು ಜನರಿಗೆ ತಿಳಿಸಬೇಕು’ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ಅಧ್ಯಕ್ಷತೆ ವಹಿಸಿದ್ದರು. ಡಾ. ಉಮೇಶ್ ಬಾಬು ಆರೋಗ್ಯ ತಪಾಸಣೆ ಬಗ್ಗೆ ಮಾಹಿತಿ ನೀಡಿದರು. ಹರಿಹರ ಶಾಸಕ ಎಸ್‌. ರಾಮಪ್ಪ, ಮಾಜಿ ಶಾಸಕರಾದ ಎಚ್.ಪಿ. ರಾಜೇಶ್, ಅಬ್ದುಲ್ ಜಬ್ಬಾರ್, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಎಸ್. ಬಸವಂತಪ್ಪ, ಕೆ.ಎಚ್.ಓಬಳಪ್ಪ, ಮಾಜಿ ಅಧ್ಯಕ್ಷ ಡಾ. ವೈ.ರಾಮಪ್ಪ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಕೆಪಿಸಿಸಿ ಎಸ್.ಟಿ. ವಿಭಾಗದ ಅಧ್ಯಕ್ಷ ಪಾಲಯ್ಯ, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ದೇವರಮನಿ ಶಿವಕುಮಾರ್, ಚಮನ್ ಸಾಬ್, ಗಡಿಗುಡಾಳ್ ಮಂಜುನಾಥ್, ಕಿಸಾನ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಬಾತಿ ಶಿವಕುಮಾರ್, ನಿಖಿಲ್ ಕೊಂಡಜ್ಜಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.