ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಸರ್ಕಾರಿ ನೌಕರರ ಕ್ರೀಡಾಕೂಟಕ್ಕೆ ಚಾಲನೆ

ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡೆಯಿಂದ ಪುನಶ್ಚೇತನ: ಡಿಸಿ
Last Updated 6 ಫೆಬ್ರುವರಿ 2021, 2:48 IST
ಅಕ್ಷರ ಗಾತ್ರ

ದಾವಣಗೆರೆ: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಶುಕ್ರವಾರ ಚಾಲನೆ ದೊರೆಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಸಹಯೋಗದಲ್ಲಿ ನಡೆದ ಈ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಗುಂಡು ಎಸೆಯುವ ಮೂಲಕ ಚಾಲನೆ ನೀಡಿದರು.

ಮಹಾಂತೇಶ ಬೀಳಗಿ ಮಾತನಾಡಿ, ‘ವರ್ಷಪೂರ್ತಿ ಒತ್ತಡದಿಂದ ಕೆಲಸ ಮಾಡುವ ನೌಕರರಿಗೆ ಕ್ರೀಡಾಕೂಟ ಪುನಶ್ಚೇತನ ಕಾರ್ಯಕ್ರಮದಂತೆ ಇದ್ದು, ಕ್ರೀಡೆಗಳಲ್ಲಿ ಗೆಲ್ಲುವುದು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯ. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿಯೂ ಪಾಲ್ಗೊಳ್ಳಬೇಕು. ದಿನನಿತ್ಯದ ಕರ್ತವ್ಯದಿಂದ ಹೆಚ್ಚಿನ ಒತ್ತಡಕ್ಕೆ ಒಳಗಾಗುವುದು ಸಹಜ. ಎಲ್ಲರೂ ಕೂಡಿ ಆಟ ಆಡಿ, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡರೆ ಮನಸ್ಸು ಪುನಶ್ಚೇತನಗೊಳ್ಳುತ್ತದೆ’ ಎಂದರು.

ಕಾರ್ಯಕ್ರಮದ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ,‘ಇಂದಿನ ಮಕ್ಕಳಲ್ಲಿ ಕ್ರೀಡೆಗಳ ಬಗ್ಗೆ ಜ್ಞಾನದ ಕೊರತೆ ಇದ್ದು, ಅವರು ಆಟ ಆಡುವುದೂ ಕಡಿಮೆ ಆಗಿದೆ. ಸದಾ ಓದು, ಕಂಪ್ಯೂಟರ್, ಮೊಬೈಲ್ ಮುಂದೆ ಯಾಂತ್ರೀಕೃತವಾಗಿರುತ್ತಾರೆ. ಅವರಿಗೂ ಪೋಷಕರು ಕ್ರೀಡೆಯಲ್ಲಿ ತೊಡಗುವಂತೆ ಪ್ರೇರೇಪಿಸಿ ತಾವೂ ಆಡಬೇಕು’ ಎಂದರು.

ಮೇಯರ್ ಬಿ.ಜಿ.ಅಜಯಕುಮಾರ್, ‘ಕಾರ್ಯಾಂಗ ಉತ್ತಮವಾಗಿದ್ದರೆ ಆಡಳಿತ ಸುಗಮವಾಗಿ ನಡೆಯುತ್ತದೆ. ಕಾರ್ಯಾಂಗವನ್ನು ಪ್ರತಿನಿಧಿಸುವ ಸರ್ಕಾರಿ ನೌಕರರು ಚಟುವಟಿಕೆಯಿಂದ ಇದ್ದರೆ ಒಂದೆರಡು ತಾಸು ಹೆಚ್ಚು ಕೆಲಸ ಮಾಡುತ್ತಾರೆ. ಈ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳು ಅವಶ್ಯಕ. ಎಲ್ಲರೂ ಹೀಗೆಯೇ ಉತ್ಸಾಹದಿಂದ ಪಾಲ್ಗೊಂಡು ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಳ್ಳಬೇಕು’ ಎಂದರು.

ತಹಶೀಲ್ದಾರ್ ಬಿ.ಎನ್.ಗಿರೀಶ್ ಮಾತನಾಡಿ, ‘ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ ನೌಕರರು ಇಲ್ಲಿ ಸೇರಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ. ಹೀಗೆ ಒಟ್ಟಿಗೆ ಸೇರುವುದೇ ಹಬ್ಬವಾಗಿದ್ದು, ಎಲ್ಲರೂ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಾಲಾಕ್ಷಿ ಪ್ರಾಸ್ತಾವಿಕವಾಗಿ ಮಾತನಾಡಿ, ‘ಕೊರೊನಾ ಸಂದರ್ಭದಲ್ಲೂ ಒತ್ತಡದಿಂದ ಕರ್ತವ್ಯ ನಿರ್ವಹಿಸಿದ್ದ ಸರ್ಕಾರಿ ನೌಕರರಿಗೆ ಈ ಕ್ರೀಡಾಕೂಟ ಶಕ್ತಿವರ್ಧಕವಿದ್ದಂತೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT