ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಲು ಆಗ್ರಹ

ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ
Last Updated 31 ಜುಲೈ 2021, 6:46 IST
ಅಕ್ಷರ ಗಾತ್ರ

ದಾವಣಗೆರೆ: ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್‌ಒ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಜಯದೇವ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

‘ವಿದ್ಯಾರ್ಥಿಗಳು ಒಂದು ತಿಂಗಳಿನಿಂದ ನಡೆಸಿದ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸುವಂತೆ ಆದೇಶಿಸಿದ್ದು, ಆ ಮೂಲಕ ಬೇಡಿಕೆಗೆ ಸ್ಪಂದಿಸಿರುವುದು ಸ್ವಾಗತಾರ್ಹ. ಆದರೆ, ಅಂತಿಮ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಸಮಸ್ಯೆ ಇನ್ನೂ ಪರಿಹಾರವಾಗಿಲ್ಲ. ರಾಜ್ಯ ಸರ್ಕಾರ ಕೂಡಲೇ ಸಮಸ್ಯೆ ಪರಿಹರಿಸಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

‘ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಸೆಪ್ಟಂಬರ್‌ನ 3ನೇ ವಾರದೊಳಗಾಗಿ ವಿದ್ಯಾರ್ಥಿಗಳು ಎರಡು ಸೆಮಿಸ್ಟರ್ ಪರೀಕ್ಷೆ ಎದುರಿಸಬೇಕಾಗುತ್ತದೆ. ಹಾಗಾಗಿ ದಾವಣಗೆರೆ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ದಾವಣಗೆರೆ ವಿಶ್ವವಿದ್ಯಾಲಯ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಮಾರ್ಗಸೂಚಿಯಂತೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಒಂದೇ ಸೆಮಿಸ್ಟರ್ ಪರೀಕ್ಷೆ ನಡೆಸಬೇಕು’ ಎಂದು ಒತ್ತಾಯಿಸಿದರು.

‘ಸೆಪ್ಟಂಬರ್ ನಂತರ ಕೆಲವು ತಿಂಗಳ ತನಕ ವಿದ್ಯಾರ್ಥಿಗಳಿಗೆ ಸಾವಕಾಶವಾಗಿ ಓದಲು ಸಮಯ ನೀಡಿ ನಂತರ ಪರೀಕ್ಷೆ ನಡೆಸಬೇಕು. ಹಾಗಾದಾಗ ವಿದ್ಯಾರ್ಥಿಗಳು ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಅನುಕೂಲವಾಗುತ್ತದೆ. ಬೇರೆ ವಿಶ್ವವಿದ್ಯಾಲಯಗಳು ರಾಜ್ಯ ಸರ್ಕಾರದ ಆದೇಶದ ಆನ್ವಯ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಒಂದೇ ಪರೀಕ್ಷೆ ನಡೆಸಲು ತೀರ್ಮಾನಿಸಿದೆ. ಅದರ ಅನುಸಾರ ದಾವಣಗೆರೆ ವಿಶ್ವವಿದ್ಯಾಲಯವೂ ಅಧಿಸೂಚನೆ ಹೊರಡಿಸಬೇಕು’ ಎಂದು ಒತ್ತಾಯಿಸಿದರು.

ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಕಿರಣ್, ಕಾರ್ಯದರ್ಶಿ ಎನ್. ಪೂಜಾ, ಚೇತನ್, ಕಾವ್ಯಾ, ಭಾರತಿ, ಪುಷ್ಪಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT