ಕಡರನಾಯ್ಕನಹಳ್ಳಿ: ಡೆಂಗಿ ಬಗ್ಗೆ ಜನಸಾಮಾನ್ಯರಿಗೆ ತಿಳಿವಳಿಕೆ ಅಗತ್ಯವಾಗಿದ್ದು, ಮನೆಯ ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಜತೆಗೆ ಲಾರ್ವಾ ನಾಶಕ ದ್ರಾವಣವನ್ನು ಸಿಂಪಡಿಸಿ ಡೆಂಗಿ ತಡೆಗಟ್ಟಬಹುದು ಎಂದು ತಾಲ್ಲೂಕು ವೈದ್ಯಾಧಿಕಾರಿ ಅಬ್ದುಲ್ ಖಾದರ್ ತಿಳಿಸಿದರು.
ಡೆಂಗಿ ಪ್ರಕರಣ ವರದಿಯಾಗಿದ್ದ ಸಮೀಪದ ಉಕ್ಕಡಗಾತ್ರಿ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ವೇಳೆ ಅವರು ಮಾತನಾಡಿದರು.
‘ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ. ಲಾರ್ವಾ ಇವೆ ಎಂಬ ಶಂಕೆ ಬಂದಲ್ಲಿ ಆರೋಗ್ಯ ಇಲಾಖೆಗೆ ಮಾಹಿತಿ ನೀಡಿ. ಆರೋಗ್ಯ ಇಲಾಖೆಯಿಂದ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುತ್ತದೆ’ ಎಂದು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ನವೀನ್ ತಿಳಿಸಿದರು.
ಆರೋಗ್ಯ ಇಲಾಖೆಯಿಂದ ಗ್ರಾಮದಲ್ಲಿ ಪರಿಶೀಲನೆ ಮಾಡಲಾಯಿತು. ಲಾರ್ವಾಗಳು ಕಂಡುಬಂದಿಲ್ಲ ಎಂದು ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ. ಉಮ್ಮಣ್ಣ ತಿಳಿಸಿದರು.
ಆರೋಗ್ಯ ಶಿಕ್ಷಣಾಧಿಕಾರಿ ನಾಗರಾಜ್, ಆರೋಗ್ಯ ನಿರೀಕ್ಷಣಾಧಿಕಾರಿ ಶಿವಶಂಕರ್, ಸಂತೋಷ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.