ಬೆಂಗಳೂರು: ಅಕ್ರಮ ಅಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ. ರೇಣುಕಾ
ಚಾರ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್‌ಐಆರ್ ಮತ್ತು ದಾವಣಗೆರೆಯ ವಿಶೇಷ ಲೋಕಾ
ಯುಕ್ತ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಪಡಿಸಲು ಹೈಕೋರ್ಟ್ ನಿರಾಕರಿಸಿದೆ.
‘ನನ್ನ ವಿರುದ್ಧದ ಎಫ್‌ಐಆರ್ ಮತ್ತು ಲೋಕಾಯುಕ್ತ ಕೋರ್ಟ್ ವಿಚಾರಣೆ ರದ್ದುಪಡಿಸಬೇಕು’ ಎಂದು ಕೋರಿ ರೇಣುಕಾಚಾರ್ಯ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.
ಪ್ರಕರಣವೇನು?: ಅಕ್ರಮ ಆಸ್ತಿ ಗಳಿಕೆ ಆರೋಪ ಹೊರಿಸಿ ಗುರುಪಾದಯ್ಯ ಮಠದ್ ಎಂಬುವರು ರೇಣುಕಾಚಾರ್ಯ ಮತ್ತು ಅವರ ಸಹೋದರರ ವಿರುದ್ಧ ದಾವಣಗೆರೆ ಲೋಕಾಯುಕ್ತ ನ್ಯಾಯಾಲಯಕ್ಕೆ 2015ರ ಏಪ್ರಿಲ್ 28ರಂದು ಖಾಸಗಿ ದೂರು ಸಲ್ಲಿಸಿದ್ದರು.
ಈ ದೂರಿನ ಅನ್ವಯ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನ್ಯಾಯಾಲಯವು, ದಾವಣಗೆರೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಗೆ ಆದೇಶಿಸಿತ್ತು.
ಲೋಕಾಯುಕ್ತ ಪೊಲೀಸರು ರೇಣುಕಾಚಾರ್ಯ ವಿರುದ್ಧ 2015ರ ಮೇ 5ರಂದು ಎಫ್‌ಐಆರ್ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ರೇಣುಕಾಚಾರ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ್ದ ಲೋಕಾಯುಕ್ತ ಪರ ವಕೀಲ ಬಿ.ಎಸ್. ಪ್ರಸಾದ್, ‘ತನಿಖೆಗೆ ಸಕ್ಷಮ ಪ್ರಾಧಿಕಾರವಾದ ವಿಧಾನ ಸಭಾಧ್ಯಕ್ಷರು ಅನುಮತಿ ಕೋರಲಾಗಿದೆ. ಅವರು ಅನುಮತಿ ನೀಡಿದ ನಂತರ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ಹಾಗಾಗಿ, ಈ ಹಂತದಲ್ಲಿ ಎಫ್‌ಐಆರ್ ರದ್ದುಪಡಿಸಬಾರದು’ ಎಂದು ಕೋರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.