ಮಾವಿನಹೊಳೆ (ಚನ್ನಗಿರಿ): ‘ಲೋಕಸಭೆಗೆ ಸ್ಪರ್ಧಿಸುವ ಅಭ್ಯರ್ಥಿಯನ್ನು ಹೈಕಮಾಂಡ್ ಘೋಷಿಸುತ್ತದೆ. ಈವರೆಗೆ ಯಾರನ್ನೂ ಅಭ್ಯರ್ಥಿ ಎಂದು ಘೋಷಣೆ ಮಾಡಿಲ್ಲ. ಪಕ್ಷ ಅಧಿಕೃತ ಅಭ್ಯರ್ಥಿಯನ್ನು ಘೋಷಣೆ ಮಾಡಿದ ನಂತರ ಚುನಾವಣಾ ಪ್ರಚಾರ ಕಾರ್ಯ ಮಾಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ತಿಳಿಸಿದರು.
ತಾಲ್ಲೂಕಿನ ಮಾವಿನಹೊಳೆ ಗ್ರಾಮದ ಮಹಾರುದ್ರಸ್ವಾಮಿ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
‘ಈ ಕ್ಷೇತ್ರದ ಶಾಸಕ ಕಾಂಗ್ರೆಸ್ ಪಕ್ಷದಲ್ಲಿ ಇದ್ದಾರೋ ಅಥವಾ ಬೇರೆ ಪಕ್ಷದಲ್ಲಿ ಇದ್ದಾರೋ ಗೊತ್ತಿಲ್ಲ? ವಿನಯ ಕುಮಾರ್ ಅವರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಶಾಸಕರು ತಾವು ಹೋದ ಕಡೆಯೆಲ್ಲಾ ಹೇಳುತ್ತಾ ಓಡಾಡುತ್ತಿದ್ದಾರೆ. ಇದು ತಪ್ಪು. ಶಾಸಕರಾಗಲಿ ಅಥವಾ ಬೇರೆ ಯಾರೇ ಆಗಲೀ ತಿಳಿದು ಮಾತನಾಡಬೇಕು. ಅದು ಬಿಟ್ಟು ತಮಗೆ ತೋಚಿದ್ದನ್ನು ಹೇಳಿಕೊಂಡು ಹೋದರೇ ಜನರು ಗೊಂದಲಕ್ಕೆ ಒಳಗಾಗುತ್ತಾರೆ. ಅಭ್ಯರ್ಥಿಯನ್ನು ಹೈಕಮಾಂಡ್ ನಿರ್ಧಾರ ಮಾಡಲಿದೆ’ ಎಂದರು.
ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪ್ರತಿ ವರ್ಷದ ಕಾರ್ತಿಕ ಮಾಸದಲ್ಲಿ ಶಾಮನೂರು ಕುಟುಂಬ ಮಹಾರುದ್ರಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೀಪೋತ್ಸವದಲ್ಲಿ ಪಾಲ್ಗೊಳ್ಳುತ್ತದೆ. ಈ ಬಾರಿ ಶಾಸಕ ಶಾಮನೂರು ಶಿವಶಂಕರಪ್ಪ, ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಎಳ್ಳು ಗಂಟುಗಳ ದೀಪಗಳನ್ನು ಹಚ್ಚಿ ಮಹಾರುದ್ರಸ್ವಾಮಿಯ ದರ್ಶನ ಪಡೆದರು.