ಹೊನ್ನಾಳಿ (ದಾವಣಗೆರೆ): ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿರುವ ಕ್ರಮ ವಿರೋಧಿಸಿ ಮಂಗಳವಾರ ಹೊನ್ನಾಳಿ ಬಂದ್ ನಡೆಸಲಾಗಿದೆ.
ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಅಹಿಂದ ಒಕ್ಕೂಟದ ಕಾರ್ಯಕರ್ತರು ಕರೆನೀಡಿದ ಬಂದ್ ಗೆ ಸಾರ್ವಜನಿಕರಿಂದ ಬೆಂಬಲ ವ್ಯಕ್ತವಾಗಿದೆ. ಪಟ್ಟಣದಲ್ಲಿ ಅಂಗಡಿಗಳು ಬಾಗಿಲು ಮುಚ್ಚಿದ್ದು, ಸಾರಿಗೆ ಸಂಚಾರ ಸ್ಥಗಿತಗೊಂಡಿದೆ. ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚಾರಿಸಿದ ಸಿದ್ದರಾಮಯ್ಯ ಅಭಿಮಾನಿಗಳು ಬಂದ್ ಬೆಂಬಲ ಕೋರಿದರು. ಬೆಳಿಗ್ಗೆಯಿಂದಲೇ ಅಂಗಡಿಗಳು ಬಾಗಿಲು ತೆರೆದಿಲ್ಲ. ಆಟೊ, ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಕೆಎಸ್ಆರ್ ಟಿಸಿ ಹಾಗೂ ಖಾಸಗಿ ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೊ ಎನ್ನುತ್ತಿವೆ.
ಸಿದ್ದರಾಮಯ್ಯ ವಿರುದ್ಧ ಸೇಡಿನ ರಾಜಕಾರಣ ಮಾಡಲಾಗುತ್ತಿದೆ ಎಂದು ಆರೋಪಿಸಿ ಪ್ರತಿಭಟನಕಾರರು ಪಟ್ಟಣದಲ್ಲಿ ಮೆರವಣಿಗೆ ನಡೆಸಲು ಸಜ್ಜಾಗಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ನಡೆಸುತ್ತಿರುವ ಪಾದಯಾತ್ರೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಸಭೆ ಸೇರಿ ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆಯಲ್ಲಿ ಸಾಗಲಿದ್ದಾರೆ.