ಮಂಗಳವಾರ, ಮೇ 24, 2022
31 °C
ಅಭಿಯಾನದ ತಯಾರಿ ಸಭೆ

ಫೆಬ್ರುವರಿ, ಮಾರ್ಚ್‌ನಲ್ಲಿ ಇಂದ್ರಧನುಷ್‌ ಅಭಿಯಾನ: ಜಿ.ಪಂ. ಸಿಇಒ ಪದ್ಮ ಬಸವಂತಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಸಾರ್ವತ್ರಿಕ ಲಸಿಕೆ ಕಾರ್ಯಕ್ರಮದಲ್ಲಿ ಬಿಟ್ಟು ಹೋದ ಮಕ್ಕಳು ಮತ್ತು ಗರ್ಭಿಣಿಯರನ್ನು ಗುರುತಿಸಿ ಲಸಿಕೆ ಹಾಕಿಸುವ ತೀವ್ರಗೊಂಡ ಇಂದ್ರಧನುಷ್ ಲಸಿಕಾ ಅಭಿಯಾನವನ್ನು ಫೆಬ್ರುವರಿ ಮತ್ತು ಮಾರ್ಚ್‌ ತಿಂಗಳುಗಳ 8, 9, 10 ಮತ್ತು 12ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ ತಿಳಿಸಿದರು.

ಅಭಿಯಾನದ ತಯಾರಿ ಬಗ್ಗೆ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಡೆದ ಇಂಟೆನ್ಸಿಫೈಡ್ ಮಿಷನ್ 3.0 ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದಾವಣಗೆರೆ ಮತ್ತು ಹರಿಹರ ನಗರ ಪ್ರದೇಶದಲ್ಲಿ ಮುಖ್ಯವಾಗಿ ವಲಸೆ ಪ್ರದೇಶಗಳು, ಕೊಳಚೆ ಪ್ರದೇಶಗಳಲ್ಲಿ ಸಾರ್ವತ್ರಿಕ ಲಸಿಕೆಯಿಂದ ಬಿಟ್ಟು ಹೋದ ಗರ್ಭಿಣಿಯರನ್ನು ಮತ್ತು 2 ವರ್ಷದೊಳಗಿನ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಬೇಕು ಎಂದು ಸೂಚಿಸಿದರು.

ಆರ್‌ಸಿಎಚ್‌ ಅಧಿಕಾರಿ ಡಾ.ಮೀನಾಕ್ಷಿ, ‘ಇಂಟೆನ್ಸಿಫೈಡ್ ಮಿಷನ್ 3.0 ಕಾರ್ಯಕ್ರಮದಲ್ಲಿ ರಾಜ್ಯದ 13 ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಅದರಲ್ಲಿ ದಾವಣಗೆರೆಯೂ ಒಂದು. ಡಿಟಿಪಿ, ಮೀಸಲ್ಸ್, ಟಿಟಿ, ಬಿಸಿಜಿ, ರುಬೆಲ್ಲಾ ಸೇರಿ ಸಾರ್ವತ್ರಿಕೆ ಲಸಿಕೆಗಳನ್ನು ನೀಡಲಾಗುವುದು’ ಎಂದು ಮಾಹಿತಿ ನೀಡಿದರು.

ಕೋವಿಡ್ ಕಾರಣ ದೇಶದಾದ್ಯಂತ ಲಸಿಕೆ ನೀಡುವ ಪ್ರಮಾಣದಲ್ಲಿ ಶೇ 26ರಷ್ಟು ಇಳಿಕೆ ಕಂಡು ಬಂದಿತ್ತು. ಇದನ್ನು ಸರಿದೂಗಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅದಕ್ಕೆ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕನಿಷ್ಠ ಶೇ 90ರಷ್ಟು ಲಸಿಕೆ ಗುರಿ ತಲುಪಬೇಕು. ಅದಕ್ಕಾಗಿ ಜನರು ಸಹಕಾರ ನೀಡಬೇಕು. ಅಧಿಕಾರಿಗಳು ಅಂಥ ಸ್ಥಳಗಳಿಗೆ ಭೇಟಿ ನೀಡಿ ಬಿಟ್ಟುಹೋದವರನ್ನು ಗುರುತಿಸಬೇಕು ಎಂದರು.

ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ನಗರಾಭಿವೃದ್ದಿ ಕೋಶ, ಯುವಜನ ಸಬಲೀಕರಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಮಕ್ಕಳು ಮತ್ತು ಮಹಿಳೆಯರಲ್ಲಿ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ, ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಅಧೀಕ್ಷಕ ಡಾ. ಜಯಪ್ರಕಾಶ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಎಚ್‌. ವಿಜಯಕುಮಾರ್, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ನಟರಾಜ್, ದಾವಣಗೆರೆ ಮತ್ತು ಹರಿಹರ ತಾಲ್ಲೂಕು ವೈದ್ಯಾಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು