ಭಾನುವಾರ, ಏಪ್ರಿಲ್ 2, 2023
33 °C

ಸಾವರ್ಕರ್ ಹೆಸರು ಹೇಳುವ ಯೋಗ್ಯತೆ ಸಿದ್ದರಾಮಯ್ಯಗೆ ಇಲ್ಲ: ಕೆ.ಎಸ್. ಈಶ್ವರಪ್ಪ ಕಿಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ‘ವೀರ ಸಾವರ್ಕರ್ ಅವರ ಹೆಸರು ಬಳಸುವುದಕ್ಕೂ ಸಿದ್ದರಾಮಯ್ಯಗೆ ಯೋಗ್ಯತೆ ಇಲ್ಲ. ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸುವ ಸಲುವಾಗಿ ಸಾವರ್ಕರ್ ಬಗ್ಗೆ ಇಲ್ಲ,ಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತು ಇತಿಹಾಸ ಗೊತ್ತಿಲ್ಲದೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹುಚ್ಚುಚ್ಚು ಹೇಳಿಕೆ ನೀಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷದವರು ಬೇರೆ ಬೇರೆ ಕಾರಣಕ್ಕಾಗಿ ಜೈಲಿಗೆ ಹೋಗಿ ಬಂದಿದ್ದಾರೆ. ಕನಿಷ್ಠ ಪಕ್ಷ ಸಿದ್ದರಾಮಯ್ಯ ಅಂಡಮಾನ್ ಜೈಲನ್ನಾದರೂ ನೋಡಿಕೊಂಡು ಬರಬೇಕು. ಏಕೆಂದರೆ ಸಾವರ್ಕರ್ ಅವರನ್ನು ಬ್ರಿಟಿಷರು ಅಂಡಮಾನ್ ಜೈಲಿನಲ್ಲಿ ಬಂಧಿಸಿಟ್ಟಿದ್ದರು. ಸೋನಿಯಾ ಗಾಂಧಿಯನ್ನು ಮೆಚ್ಚಿಸಿದರೆ ಮತ್ತೆ ಏನಾದರೊಂದು ಹುದ್ದೆ ಗಿಟ್ಟಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಇದ್ದಂತಿದೆ’ ಎಂದು ಕುಟುಕಿದರು.

‘ಸಿದ್ದರಾಮಯ್ಯ ಹೇಗಾದರೂ ಸರಿ ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕೆಂದು ಹಗಲುಗನಸು ಕಾಣುತ್ತಿದ್ದಾರೆ. ಸ್ವರ್ಗದಲ್ಲಿರುವ ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ಬಂದು ಹೇಳಿದರೂ ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ’ ಎಂದು ಲೇವಡಿ ಮಾಡಿದರು.

‘ಕುತಂತ್ರ ರಾಜಕಾರಣದ ಮೂಲಕ ಸಿದ್ದರಾಮಯ್ಯ ಇಂದು ವಿರೋಧ ಪಕ್ಷದ ನಾಯಕರಾಗಿದ್ದಾರೆ. ತಾವೊಬ್ಬ ವಿರೋಧ ಪಕ್ಷದ ನಾಯಕ ಎಂದು ತೋರಿಸಿಕೊಳ್ಳುವ ಸಲುವಾಗಿ ದಿನಕ್ಕೊಂದು ಈ ರೀತಿ ಬೇಡವಾದ ಹೇಳಿಕೆ ನೀಡುತ್ತಿದ್ದಾರೆ’ ಎಂದು ಸಿದ್ದರಾಮಯ್ಯನವರ ಹೇಳಿಕೆಗಳಿಗೆ ತಿರುಗೇಟು ನೀಡಿದರು.

‘ದೇಶದ ಲಕ್ಷಾಂತರ ಯುವಕರಿಗೆ ಸಾವರ್ಕರ್ ಸ್ಫೂರ್ತಿಯಾಗಿದ್ದರು. ಅಂತಹ ವ್ಯಕ್ತಿಗೆ ಪ್ರಶಸ್ತಿ ನೀಡುವ ಒತ್ತಾಯ ಕೇಳಿ ಬಂದಿದೆ. ಇದಕ್ಕೆ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಹಾಗಾದರೆ ದೇಶ ವಿಭಜನೆ ಮಾಡಿದ ಜಿನ್ನಾ ಅವರಿಗೆ ಭಾರತ ರತ್ನ ನೀಡಬೇಕಿತ್ತಾ’ ಎಂದು ಪ್ರಶ್ನಿಸಿದರು.

‘ತುಮಕೂರು ಸಿದ್ಧಗಂಗಾ ಮಠದ ಲಿಂಗೈಕ್ಯ ಶಿವಕುಮಾರ ಸ್ವಾಮೀಜಿಗಳಿಗೂ ಇಂದಲ್ಲ ನಾಳೆ ಭಾರತ ರತ್ನ ಪ್ರಶಸ್ತಿ ಸಿಕ್ಕೆ ಸಿಗುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು