ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರ್ಗೆ, ದೇವೇಗೌಡ ಸೋಲು ಖಚಿತ: ಬಿಎಸ್‌ವೈ ಭವಿಷ್ಯ

Last Updated 5 ಏಪ್ರಿಲ್ 2019, 14:53 IST
ಅಕ್ಷರ ಗಾತ್ರ

ಹೊನ್ನಾಳಿ: ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ. ದೇವೇಗೌಡ ಸೋಲು ಹಾಗೂ ಸುಮಲತಾ ಗೆಲುವು ಖಚಿತ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭವಿಷ್ಯ ನುಡಿದರು.

ಕಾಂಗ್ರೆಸ್‍ನ ಹಾಗೂ ಜೆಡಿಎಸ್‍ನ ಹಲವಾರು ಪ್ರಬಲ ಅಭ್ಯರ್ಥಿಗಳನ್ನು ಈ ಚುನಾವಣೆಯಲ್ಲಿ ಮತದಾರರು ಮನೆಗೆ ಕಳುಹಿಸಲಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮಾಡಿಕೊಂಡಿರುವ ಅಪವಿತ್ರ ಮೈತ್ರಿಗೆ ಮತದಾರರು ತಕ್ಕಪಾಠ ಕಲಿಸಲಿದ್ದಾರೆ ಎಂದು ಪಟ್ಟಣದ ಹೆಲಿ ಪ್ಯಾಡ್‍ನಲ್ಲಿ ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

ಖರ್ಗೆ ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಲಿದ್ದಾರೆ ಎಂಬುದು ಕಲಬುರ್ಗಿ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ ದಿನವೇ ಗೊತ್ತಾಗಿದೆ. ತುಮಕೂರಿನಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಕೂಡ ಸೋಲುತ್ತಾರೆ. ಜತೆಗೆ ಅವರ ಮೊಮ್ಮಕ್ಕಳನ್ನು ಸಹ ಸೋಲಿಸುವುದರ ಮೂಲಕ ಕುಟುಂಬ ರಾಜಕಾರಣಕ್ಕೆ ಮತದಾರರು ತೆರೆ ಎಳೆಯಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ಹಾಗೂ ದಾವಣಗೆರೆಯ ಬಿಜೆಪಿ ಅಭ್ಯರ್ಥಿಗಳು ಲಕ್ಷಕ್ಕೂ ಅಧಿಕ ಮತಗಳಿಂದ ಜಯಗಳಿಸಲಿದ್ದಾರೆ. ರಾಜ್ಯದಲ್ಲಿ 22 ಸ್ಥಾನಗಳು, ರಾಷ್ಟ್ರದಲ್ಲಿ 350ಕ್ಕೂ ಹೆಚ್ಚು ಸ್ಥಾನಗಳನ್ನು ಬಿಜೆಪಿ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಂಗಳೂರು ದಕ್ಷಿಣದ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರ ಕೈವಾಡದ ಬಗೆಗಿನ ಸುದ್ದಿಗಾರ ಪ್ರಶ್ನೆಗೆ, ‘ವರಿಷ್ಠರಿಗೆ ತೇಜಸ್ವಿನಿ ಅನಂತಕುಮಾರ್ ಅವರ ಹೆಸರು ಮಾತ್ರ ಸೂಚಿಸಿ ಕಳುಹಿಸಲಾಗಿತ್ತು. ಆದರೆ ಕೊನೆ ಗಳಿಗೆಯಲ್ಲಿ ವರಿಷ್ಠರು ತೀರ್ಮಾನ ತೆಗೆದುಕೊಂಡು ತೇಜಸ್ವಿ ಸೂರ್ಯ ಅವರನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ತೇಜಸ್ವಿನಿ ಕೂಡ ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ’ ಎಂದರು.

ಶಾಸಕ ಎಂ.ಪಿ. ರೇಣುಕಾಚಾರ್ಯ, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ಡಿ.ಜಿ. ರಾಜಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಶಿವಾನಂದ್, ಬಿಜೆಪಿ ಮುಖಂಡರಾದ ಶಾಂತರಾಜ್‍ ಪಾಟೀಲ್, ಎಚ್.ಬಿ. ಮೋಹನ್, ಕೆ.ವಿ. ಚನ್ನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT