ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಸಗಿ ಆಸ್ಪತ್ರೆಗಳು ಬೆಡ್‌ ವಿವರ ಪ್ರಕಟಿಸಲಿ

ಕೊರೊನಾ ಪ್ರಕರಣ ಇಳಿಮುಖಗೊಳಿಸಲು ವಾರದ ಗಡುವು ನೀಡಿದ ಸಚಿವ ಬೈರತಿ ಬಸವರಾಜ
Last Updated 8 ಮೇ 2021, 3:27 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿರುವ ಬೆಡ್‍ಗಳು, ವೆಂಟಿಲೇಟರ್, ಐಸಿಯು ಹಾಗೂ ಖಾಲಿ ಬೆಡ್‍ಗಳ ವಿವರವಿರುವ ಪಟ್ಟಿಯನ್ನು ಆಸ್ಪತ್ರೆಗಳ ಮುಂದೆ ಪ್ರದರ್ಶಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್–19 ನಿಯಂತ್ರಣ ಕುರಿತು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.

‘ಕೋವಿಡ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಬೆಡ್‍ಗಳ ಬಗ್ಗೆ ಮಾಹಿತಿ ದೊರೆಯುತ್ತಿಲ್ಲ. ಇದರಿಂದಾಗಿ ರೋಗಿಗಳ ಕಡೆಯವರು ಆಸ್ಪತ್ರೆಯಿಂದ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ‘ಇಲ್ಲಿ ಬೆಡ್ ಖಾಲಿ ಇಲ್ಲ’ ಎಂದುಕಾವಲುಗಾರರೇ ರೋಗಿಗಳನ್ನು ಸಾಗ ಹಾಕುತ್ತಿದ್ದಾರೆ. ಹೀಗಾಗಿ ಆಸ್ಪತ್ರೆಯ ನಿಖರ ಮಾಹಿತಿ ಸಾರ್ವಜನಿಕರಿಗೆ ದೊರೆಯುವಂತೆ ಮಾಡಬೇಕು’ ಎಂದು ಹೇಳಿದರು.

‘ಆಸ್ಪತ್ರೆಗಳ ಪ್ರವೇಶ ದ್ವಾರದಲ್ಲಿ ಹೆಲ್ಪ್‌ಡೆಸ್ಕ್ ಪ್ರಾರಂಭಿಸಬೇಕು. ನೋಡಲ್ ಅಧಿಕಾರಿಗಳು ಆಸ್ಪತ್ರೆವಾರು ಬೆಡ್‍ಗಳ ಭರ್ತಿ ಹಾಗೂ ಲಭ್ಯತೆ ಕುರಿತ ವಿವರಗಳನ್ನು ನೀಡಬೇಕು. 9 ಖಾಸಗಿ ಆಸ್ಪತ್ರೆಗಳಿಗೆ ಒಬ್ಬೊಬ್ಬ ಪಿಎಸ್‌ಐಗಳನ್ನು ನಿಯೋಜಿಸಬೇಕು. ಜಿಲ್ಲೆಯಲ್ಲಿ ಆಸ್ಪತ್ರೆಗಳಿಗೆ ಆಮ್ಲಜನಕ ಹಾಗೂ ರೆಮ್‍ಡಿಸಿವಿರ್ ಔಷಧ ಸಮರ್ಪಕ ಪೂರೈಕೆ ಹಾಗೂ ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಇದರಲ್ಲಿ ಲೋಪವಾದರೆ ಡಿಸಿ, ಎಸ್‌ಪಿ, ಡಿಎಚ್ಒ ಹಾಗೂ ಸಿಇಒ ಅವರನ್ನು ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ’ ಎಂದು ಸಚಿವರು ಎಚ್ಚರಿಸಿದರು.

‘ಶನಿವಾರ ಖಾಸಗಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಬೆಡ್‌ ಕಾಯ್ದಿರಿಸಿರುವುದು ಹಾಗೂ ಚಿಕಿತ್ಸೆಯ ಬಗ್ಗೆ ಪರಿಶೀಲಿಸುತ್ತೇನೆ. ಲೋಪ ಕಂಡು ಬಂದರೆ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ ಮಾಡಿಸುತ್ತೇನೆ’ ಎಂದು ಎಚ್ಚರಿಸಿದರು.

‘ಜಿಲ್ಲೆಯಲ್ಲಿ ವಾರದೊಳಗೆ ಸೋಂಕು ನಿಯಂತ್ರಣಕ್ಕೆ ಬರಬೇಕು. ಅಧಿಕಾರಿಗಳು ತೀವ್ರ ನಿಗಾವಹಿಸಿ ಸೋಂಕು ಇಳಿಮುಖವಾಗಲು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.

‘ಜಿಲ್ಲೆಯಲ್ಲಿ 2,534 ಸಕ್ರಿಯ ಪ್ರಕರಣಗಳಿದ್ದು, ನಿಯಂತ್ರಣಕ್ಕೆ ತರಲು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಇನ್ನಷ್ಟು ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು. ತಾಲ್ಲೂಕುಗಳಲ್ಲಿ ತಹಶೀಲ್ದಾರರು ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಹೇಳಿದರು.

‘ಹೋಂ ಐಸೋಲೇಷನ್‌ನಲ್ಲಿ ಇರುವವರು ಮನೆಯ ಹೊರಗೆ ಬಂದು ರೋಗ ಹರಡಲು ಕಾರಣರಾಗುತ್ತಾರೆ. ಆದ್ದರಿಂದ ಅವರನ್ನುಕೋವಿಡ್ ಕೇರ್ ಸೆಂಟರ್‌ಗಳಿಗೆ ಕರೆ ತರಬೇಕು.ಉತ್ತಮ ಊಟೋಪಹಾರ, ವೈದ್ಯಕೀಯ ಸೌಲಭ್ಯ ಕಲ್ಪಿಸುವ ಮೂಲಕ ರೋಗಿಗಳಲ್ಲಿ ಆತ್ಮವಿಶ್ವಾಸ ಮೂಡಿಸಬೇಕು. ಆಗ ಮಾತ್ರ ಕೋವಿಡ್ ಸೆಂಟರ್‌ಗೆ ಬರುತ್ತಾರೆ’ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಹೇಳಿದರು.

ಲಾಕ್‍ಡೌನ್‌ಗೆ ಸಹಮತ: ಕೋವಿಡ್ ಸೋಂಕು ನಿಯಂತ್ರಿಸಲು ಸರ್ಕಾರ ಜಾರಿಗೊಳಿಸಿದ್ದ ಜನತಾ ಕರ್ಫ್ಯೂ ಪರಿಣಾಮಕಾರಿಯಾಗಿಲ್ಲ. ಇದರಿಂದಾಗಿ ಜಿಲ್ಲೆಯಲ್ಲಿ ಲಾಕ್‌ಡೌನ್ ಅನಿವಾರ್ಯ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹಾಗೂ ಜಿಲ್ಲೆಯ ಶಾಸಕರು ಹೇಳಿದರು.

‘ಹಳ್ಳಿಗಳಲ್ಲಿ ಜೂಜು ಅಡ್ಡೆಗಳು ಪ್ರಾರಂಭವಾಗಿವೆ. ಜನರ ಪ್ರಾಣದ ಹಿತದೃಷ್ಟಿಯಿಂದ ಕೋವಿಡ್ ಸರಪಳಿಯನ್ನು ತುಂಡರಿಸುವುದು ಅಗತ್ಯವಾಗಿದ್ದು, 31ರ ವರೆಗೆ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‍ಡೌನ್ ಮಾಡಬೇಕು’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಮನವಿ ಮಾಡಿದರು. ಇದಕ್ಕೆ ಶಾಸಕರಾದ ರೇಣುಕಾಚಾರ್ಯ, ಮಾಡಾಳ್ ವಿರೂಪಾಕ್ಷಪ್ಪ, ಎಸ್.ಎ. ರವೀಂದ್ರನಾಥ್ ಅವರೂ ಬೆಂಬಲ ಸೂಚಿಸಿದರು.

ಶಾಸಕ ಪ್ರೊ.ಲಿಂಗಣ್ಣ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಹಾನಗರ ಪಾಲಿಕೆ ಮೇಯರ್ ಎಸ್.ಟಿ. ವೀರೇಶ್, ಆಯುಕ್ತ ವಿಶ್ವನಾಥ ಮುದಜ್ಜಿ, ಡಿಎಚ್‍ಒ ಡಾ.ನಾಗರಾಜ್, ಜಿಲ್ಲಾ ಸರ್ಜನ್ ಡಾ.ಜಯಪ್ರಕಾಶ್ ಹಾಜರಿದ್ದರು. ಸರ್ವೇಕ್ಷಣಾ ಅಧಿಕಾರಿ ಡಾ.ರಾಘವನ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT