ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ: ಮಾರ್ಚ್ 9ರಂದು ಲೋಕ ಅದಾಲತ್

5,000 ಪ್ರಕರಣಗಳ ಇತ್ಯರ್ಥದ ಗುರಿ: ರಾಜೇಶ್ವರಿ ಎನ್.ಹೆಗಡೆ
Published 8 ಫೆಬ್ರುವರಿ 2024, 15:57 IST
Last Updated 8 ಫೆಬ್ರುವರಿ 2024, 15:57 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಮಾರ್ಚ್ 9ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ಜ.31ರವರೆಗೆ ಜಿಲ್ಲೆಯಲ್ಲಿ ಬಾಕಿ ಇರುವ 38,500 ಪ್ರಕರಣಗಳಲ್ಲಿ 5ಸಾವಿರದಿಂದ 6000 ಸಾವಿರ  ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಇದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

‘ಈ ವರ್ಷದ ಮೊದಲ ಲೋಕ ಅದಾಲತ್ ಇದಾಗಿದ್ದು, ಕಳೆದ ವರ್ಷ ಜುಲೈನಿಂದ ಡಿಸೆಂಬರ್‌ವರೆಗೆ ನಡೆದ ಮೂರು ಲೋಕ ಅದಾಲತ್‌ಗಳಲ್ಲಿ 15,300 ಪ್ರಕರಣಗಳು ಹಾಗೂ ₹ 4.93 ಲಕ್ಷ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಲೋಕ ಅದಾಲತ್‌ನಿಂದ ಶೀಘ್ರಗತಿಯಾಗಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳುವುದರ ಜೊತೆಗೆ ಕಕ್ಷಿದಾರರಲ್ಲಿ ಉತ್ತಮ ಬಾಂಧವ್ಯ ಬೆಳೆಯುತ್ತದೆ. ಕಡಿಮೆ ಖರ್ಚಿನಲ್ಲಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಬಹುದು. ಅಲ್ಲದೇ ಮೇಲ್ಮನವಿಗೂ ಅವಕಾಶವಿರುವುದಿಲ್ಲ’ ಎಂದು ಹೇಳಿದರು.

‘ನಗರ ಪ್ರದೇಶಗಳಲ್ಲಿ ಮಹಾನಗರ ಪಾಲಿಕೆಯ ಕಸ ಸಾಗಿಸುವ ವಾಹನ, ಗ್ರಾಮ ಪಂಚಾಯಿತಿಗಳಲ್ಲಿ ಹಾಗೂ ಕಾನೂನು ಸ್ವಯಂಸೇವಕರ ಮೂಲಕ ಈಗಾಗಲೇ ಪ್ರಚಾರ ಕೈಗೊಳ್ಳಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಈಗಾಗಲೇ ಕರಪತ್ರಗಳನ್ನು ಅಂಟಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ’ ಎಂದು ಹೇಳಿದರು.

‘ಲೋಕ ಅದಾಲತ್‍ನಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಹಾಗೂ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಕ್ರಮಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ಸಾಲ, ಎಂ.ಎಂ.ಡಿ.ಆರ್ (ಅಕ್ರಮ ಮರಳು ಸಾಗಣೆ) ಕಾಯ್ದೆಯಡಿಯ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು’ ಎಂದು ತಿಳಿಸಿದರು. 

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ.ಮ.ಕರೆಣ್ಣವರ ಮಾತನಾಡಿ,‘ಕೊರೊನಾ ಸಮಯದಲ್ಲಿ ವ್ಯವಹಾರದಲ್ಲಿ ನಷ್ಟ ಹೊಂದಿರುವ ಕೆಲವು ಗ್ರಾಹಕರಿಗೆ ಬಿಎಸ್‌ಎನ್‌ಎಲ್‌ನಿಂದ ದುಬಾರಿ ಬಿಲ್ ಬಂದಿತ್ತು. ರಾಜಿಯ ಮೂಲಕ ವಿನಾಯಿತಿ ನೀಡಿ ಈಗಾಗಲೇ 60ಕ್ಕೂ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. 200–300 ಪ್ರಕರಣಗಳನ್ನು ಮುಂದಿನ ಲೋಕ ಅದಾಲತ್‌ನಲ್ಲಿ ಇತ್ಯರ್ಥಪಡಿಸಲಾಗುವುದು’ ಎಂದು ಹೇಳಿದರು.

ಮಾಹಿತಿಗೆ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂ.ಸ:08192-296364, ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಹರಿಹರ– 08192-296885, ಹೊನ್ನಾಳಿ 08188-251732, ಚನ್ನಗಿರಿ 08189-229195 ಮತ್ತು ಜಗಳೂರು 08196-227600 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದರು.

ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ  ಎಲ್.ಎಚ್‌. ಅರುಣಕುಮಾರ್, ಕಾರ್ಯದರ್ಶಿ ಎಸ್‌.ಬಸವರಾಜ್, ಜಂಟಿ ಕಾರ್ಯದರ್ಶಿ ಮಂಜುನಾಥ ಇದ್ದರು.                      

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT