ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ | ಪ್ರಭಾ ಮಲ್ಲಿಕಾರ್ಜುನ್‌ ಗೆಲುವಿಗೆ ‘ಕೈ’ ಪಣ

ಸಭೆಯಲ್ಲಿ ಕಾಂಗ್ರೆಸ್‌ ಶಾಸಕರು, ಮುಖಂಡರು ಭಾಗಿ; ಚುನಾವಣಾ ಸಿದ್ಧತೆ ಬಗ್ಗೆ ಸುದೀರ್ಘ ಚರ್ಚೆ
Published 26 ಮಾರ್ಚ್ 2024, 16:17 IST
Last Updated 26 ಮಾರ್ಚ್ 2024, 16:17 IST
ಅಕ್ಷರ ಗಾತ್ರ

ದಾವಣಗೆರೆ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ಅವರ ಗೆಲುವಿಗೆ ಪಣ ತೊಡುವುದಾಗಿ ಪಕ್ಷದ ಶಾಸಕರು, ಮುಖಂಡರು, ಕಾರ್ಯಕರ್ತರು ಒಕ್ಕೊರಲಿನಿಂದ ಘೋಷಿಸಿದರು.

ನಗರದ ಬಂಟರ ಭವನದಲ್ಲಿ ಮಂಗಳವಾರ ನಡೆದ ‘ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರ ಪರ ಪಕ್ಷದ ಜಿಲ್ಲಾ, ಬ್ಲಾಕ್‌ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮುಖಂಡರ ಸಭೆ’ಯಲ್ಲಿ ಚುನಾವಣೆ ಎದುರಿಸಲು ಅಗತ್ಯ ಸಿದ್ಧತೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.

ಸಭೆಯಲ್ಲಿ ಭಾಗವಹಿಸಿದ್ದ ಪಕ್ಷದ ಶಾಸಕರು, ಮಾಜಿ ಶಾಸಕರು ಹಾಗೂ ಮುಖಂಡರು ಪ್ರಭಾ ಮಲ್ಲಿಕಾರ್ಜುನ್‌ ಅವರನ್ನು ಗೆಲ್ಲಿಸುವ ಹೊಣೆ ಹೊತ್ತರು. ಈ ಸಭೆಯ ಮೂಲಕ ಕಾಂಗ್ರೆಸ್‌ ನಾಯಕರು ಅಧಿಕೃತವಾಗಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದರು. ಎಲ್ಲರೂ ಗೆಲುವಿನ ಮಂತ್ರವನ್ನೇ ಪಠಿಸಿದರು. 5 ಗ್ಯಾರಂಟಿ ಯೋಜನೆಗಳನ್ನು ಮುಂದಿಟ್ಟುಕೊಂಡೇ ಚುನಾವಣೆ ಎದುರಿಸಲು ನಿರ್ಧರಿಸಿದರು.

‘ಪ್ರಭಾ ಮಲ್ಲಿಕಾರ್ಜುನ್‌ ಅವರು ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕೆಲಸ ಮಾಡಿದ್ದಾರೆ. ಎಸ್‌.ಎಸ್‌.ಕೇರ್‌ ಟ್ರಸ್ಟ್‌ ಮೂಲಕ ಜನರ ಕಷ್ಟ ದೂರ ಮಾಡುವ ಕೆಲಸ ಮಾಡಿದ್ದಾರೆ. ಅವರನ್ನು ಗೆಲ್ಲಿಸುವುದರಿಂದ ಬಡಜನರಿಗೆ ಹೆಚ್ಚಿನ ಅನುಕೂಲ ಆಗಲಿದೆ’ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದರು.

‘ಶಾಮನೂರು ಕುಟುಂಬ ಸೇರಿ 25 ವರ್ಷಗಳಾಗಿವೆ. ಕುಟುಂಬದ ಪರ ಹಲವು ಬಾರಿ ಮತಯಾಚನೆ ನಡೆಸಿದ್ದೇನೆ. ಸಂಸದೆಯಾಗಿ ಆಯ್ಕೆಯಾದರೆ, ಸ್ಥಳೀಯ ಹಾಗೂ ರಾಜ್ಯದ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಿ, ಪರಿಹಾರ ಕಂಡುಕೊಳ್ಳುವ ಯತ್ನ ನಡೆಸುತ್ತೇನೆ’ ಎಂದು ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್‌ ತಿಳಿಸಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಬಿ.ಮಂಜಪ್ಪ, ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ್‌, ಮಾಯಕೊಂಡ ಶಾಸಕ ಕೆ.ಎಸ್‌.ಬಸವಂತಪ್ಪ, ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್, ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ, ಮಾಜಿ ಶಾಸಕರಾದ ವಡ್ನಾಳ್ ರಾಜಣ್ಣ, ಎಸ್‌.ರಾಮಪ್ಪ ಅವರು  ತಮ್ಮ ತಮ್ಮ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿ, ಹೆಚ್ಚಿನ ಮತಗಳ ಮುನ್ನಡೆಯಿಂದ ಪ್ರಭಾ ಅವರ ಗೆಲುವಿಗೆ ಶ್ರಮಿಸುವುದಾಗಿ ತಿಳಿಸಿದರು. 

ಮುಖಂಡರಾದ ಅರಸೀಕೆರೆ ಕೊಟ್ರೇಶ್‌, ನಂದಿಗಾವಿ ಶ್ರೀನಿವಾಸ್‌, ಹೊದಿಗೆರೆ ರಮೇಶ್‌, ಮೇಯರ್ ವಿನಾಯಕ ಪೈಲ್ವಾನ್‌, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ದಿನೇಶ್‌ ಕೆ.ಶೆಟ್ಟಿ, ಕೆಪಿಸಿಸಿ ವಕ್ತಾರ ಡಿ.ಬಸವರಾಜ್, ಎ.ನಾಗರಾಜ್‌, ಚಮನ್‌ಸಾಬ್‌ ಸೇರಿದಂತೆ ಪಾಲಿಕೆ ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT