ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆ: 'ಪಂಚಮಸಾಲಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ'

ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ
Published 1 ಫೆಬ್ರುವರಿ 2024, 5:59 IST
Last Updated 1 ಫೆಬ್ರುವರಿ 2024, 5:59 IST
ಅಕ್ಷರ ಗಾತ್ರ

ಹರಿಹರ: ‘ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಂಚಮಸಾಲಿ ಸಮುದಾಯದವರಿಗೆ ರಾಜಕೀಯ ಪಕ್ಷಗಳು ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು’ ಎಂದು ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.

‘ವೀರಶೈವ ಲಿಂಗಾಯತರ ಸಮುದಾಯದ ಒಳ ಪಂಗಡಗಳಲ್ಲಿ ಪಂಚಮಸಾಲಿ ಸಮುದಾಯ ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದರೂ ನ್ಯಾಯಯುತ ರಾಜಕೀಯ ಪ್ರಾತಿನಿಧ್ಯದಿಂದ ವಂಚಿತರಾಗಿದ್ದೇವೆ. ದಾವಣಗೆರೆ, ಹಾವೇರಿ, ಬೆಳಗಾವಿ, ಧಾರವಾಡ, ಬಾಗಲಕೋಟೆ, ಕೊಪ್ಪಳ ಸೇರಿದಂತೆ ರಾಜ್ಯದ ಇತರೆ ಕ್ಷೇತ್ರಗಳಲ್ಲಿ ಪಂಚಮಸಾಲಿ ಸಮುದಾಯದವರೇ ನಿರ್ಣಾಯಕ ಮತದಾರರಾಗಿದ್ದಾರೆ. ಈ ಕ್ಷೇತ್ರಗಳಲ್ಲಿ ನಮ್ಮ ಸಮುದಾಯದ ನಾಯಕರಿಗೆ ಟಿಕೆಟ್ ನೀಡಬೇಕು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು. 

ರಾಜಕೀಯ ಪಕ್ಷಗಳು ಟಿಕೆಟ್ ನೀಡಲು ಮುಂದೆ ಬಂದರೆ ನೀವು ಸಿದ್ಧರಿದ್ದೀರಾ ಎಂಬ ಪ್ರಶ್ನೆಗೆ, ‘ಅಂತಹ ಸಂದರ್ಭ ಬಂದಾಗ ನೋಡೋಣ’ ಎಂದು ಸ್ವಾಮೀಜಿ ಪ್ರತಿಕ್ರಿಯಿಸಿದರು.

‘ನಮ್ಮ ಸಮುದಾಯದವರನ್ನು ಎಲ್ಲಾ ರಾಜಕೀಯ ಪಕ್ಷಗಳೂ ಬಳಸಿಕೊಂಡಿವೆ. ಲಾಭವನ್ನು ಪಡೆದು ಅಧಿಕಾರವನ್ನು ಅನುಭವಿಸುತ್ತಾ, ನಮ್ಮನ್ನು ಕಡೆಗಣಿಸಿವೆ’ ಎಂದು ಗುರುಪೀಠದ ಆಡಳಿತಾಧಿಕಾರಿ ರಾಜ್‌ಕುಮಾರ್ ಆರೋಪಿಸಿದರು.

‘ಲಿಂಗಾಯತ ಸಮುದಾಯದಲ್ಲಿ ಶೇ 5ರಷ್ಟು ಇರುವವರು, ಇಂದು ಅಧಿಕಾರವನ್ನು ಅನುಭವಿಸುತ್ತಿದ್ದಾರೆ. ಇತ್ತಿಚಿನ ದಿನಗಳಲ್ಲಿ 4 ಜನ ಮುಖ್ಯಮಂತ್ರಿ ಹಾಗೂ ಹಲವರು ಉಪ ಮುಖ್ಯಮಂತ್ರಿ ಆದರೂ ಆದರೂ ನಮ್ಮ ಸಮುದಾಯಕ್ಕೆ ಅವಕಾಶ ನೀಡಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ರಾಜ್ಯ ವೀರಶೈವ ಪಂಚಮಸಾಲಿ ಸಂಘ ಹಾಗೂ ಪಂಚಮಸಾಲಿ ಗುರುಪೀಠದ ತೀರ್ಮಾನದಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನಮ್ಮ ಸಮುದಾಯದವರಿಗೆ ಹೆಚ್ಚಿನ ಅವಕಾಶ ನೀಡುವಂತೆ ರಾಷ್ಟ್ರೀಯ ಪಕ್ಷಗಳಿಗೆ ಹಕ್ಕೊತ್ತಾಯ ಮಂಡಿಸಲಾಗುವುದು’  ಎಂದರು.

‘ಸಮುದಾಯದ ಇಂತಹ ಮುಖಂಡರಿಗೆ ಟಿಕೆಟ್ ನೀಡಬೇಕು ಎಂದು ನಾವು ಬಯಸುವುದಿಲ್ಲ, ಪಂಚಮಸಾಲಿ ಸಮುದಾಯದವರಿಗೆ ಯಾವ ಕ್ಷೇತ್ರದಲ್ಲಿ, ಯಾವ ಮುಖಂಡರಿಗೆ ಟಿಕೆಟ್ ನೀಡಿದರೆ ಉತ್ತಮ ಎಂದು ಆಯ್ಕೆ ಮಾಡುವ ಜವಾಬ್ದಾರಿ ರಾಜಕೀಯ ಪಕ್ಷಗಳಿಗಿದೆ. ಕನಿಷ್ಠ 5 ಕ್ಷೇತ್ರಗಳಲ್ಲಿ ಸಮುದಾಯದವರಿಗೆ ಟಿಕೆಟ್ ನೀಡಬೇಕು ಎನ್ನುವುದು ನಮ್ಮ ಒತ್ತಾಯ’ ಎಂದು ಹೇಳಿದರು.

‌ಗುರುಪೀಠದ ಪ್ರಧಾನ ಧರ್ಮದರ್ಶಿ ಬಿ.ಸಿ. ಉಮಾಪತಿ, ಧರ್ಮದರ್ಶಿಗಳಾದ ಬಾವಿ ಬೆಟ್ಟಪ್ಪ, ಜ್ಯೋತಿ ಪ್ರಕಾಶ್, ನಾಗರಾಜ್, ಚಂದ್ರಶೇಖರ್ ಪೂಜಾರ್, ರಾಜ್ಯ ಪಂಚಮಸಾಲಿ ಸಮಾಜದ ಅಧ್ಯಕ್ಷ ಜಿ.ಪಿ. ಪಾಟೀಲ್, ವಕೀಲ ಪ್ರಕಾಶ್ ಪಾಟೀಲ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT