ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಸಂಸ್ಥೆ ತಂಬಾಕು ಮುಕ್ತವಾಗಿಸಿ

ಕಾಲೇಜು ಮುಖ್ಯಸ್ಥರಿಗೆ ಎಡಿಸಿ ಪೂಜಾರ್ ವೀರಮಲ್ಲಪ್ಪ ಸಲಹೆ
Last Updated 18 ಡಿಸೆಂಬರ್ 2020, 2:21 IST
ಅಕ್ಷರ ಗಾತ್ರ

ದಾವಣಗೆರೆ:ತಂಬಾಕು ನಿಯಂತ್ರಣ ಕಾಯ್ದೆ (ಕೋಟ್ಪಾ) ಅನ್ವಯ ಶೈಕ್ಷಣಿಕ ಸಂಸ್ಥೆಗಳನ್ನು ತಂಬಾಕು ಮುಕ್ತವನ್ನಾಗಿಸುವುದು ಆಯಾ ಕಾಲೇಜಿನ ಮುಖ್ಯಸ್ಥರ ಹೊಣೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಕಚೇರಿ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಆಶ್ರಯದಲ್ಲಿ ಗುರುವಾರ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರಿಗೆ ಏರ್ಪಡಿಸಿದ್ದ ಒಂದು ದಿನದ ತರಬೇತಿ ಕಾರ್ಯಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಕೋಟ್ಪಾ ಕಾಯ್ದೆಯನ್ವಯ ಯಾವುದೇ ಶೈಕ್ಷಣಿಕ ಸಂಸ್ಥೆಯ 100 ಮೀ. ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ. ಇದರ ಬಗ್ಗೆ ಎಲ್ಲ ಶೈಕ್ಷಣಿಕ ಸಂಸ್ಥೆಗಳು ಮಾಹಿತಿ ಹೊಂದಿರಬೇಕು. ಒಂದು ವೇಳೆ ಯಾವುದೇ ಬಗೆಯ ತಂಬಾಕು ಉತ್ಪನ್ನ ಮಾರಾಟವಾಗುತ್ತಿದ್ದರೆ ಕೂಡಲೇ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಗಮನಕ್ಕೆ ತರಬೇಕು. ತಂಬಾಕು ಉತ್ಪನ್ನಗಳು ಅಥವಾ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸಮಾಜಕ್ಕೆ ಅರಿವು ಮೂಡಿಸುವುದು ನಮ್ಮ ನಿಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹೇಳಿದರು.

‘ಕೋಟ್ಪಾ ಕಾಯ್ದೆ ಅಡಿಯಲ್ಲಿ ದಾವಣಗೆರೆ ಜಿಲ್ಲೆಯನ್ನು ಉನ್ನತ ಅನುಷ್ಠಾನ ಜಿಲ್ಲೆಯನ್ನಾಗಿ ಘೋಷಿಸಲಿದ್ದೇವೆ. ತಂಬಾಕು ಮುಕ್ತ ಶೈಕ್ಷಣಿಕ ಸಂಸ್ಥೆಯನ್ನಾಗಿ ಘೋಷಿಸುವುದು ಎಲ್ಲ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರ ಜವಾಬ್ದಾರಿ’ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ನಾಗರಾಜಪ್ಪ, ‘ಜಿಲ್ಲೆಯಲ್ಲಿ ಕೋಟ್ಪಾ ಕಾಯ್ದೆಯನ್ನು ಶೇ 100 ಕ್ಕೆ 100 ರಷ್ಟು ಅನುಷ್ಠಾನಗೊಳಿಸಬೇಕಿದೆ. ಹಿರಿಯ ಉಪನ್ಯಾಸಕರು ಮತ್ತು ಮಕ್ಕಳನ್ನೊಳಗೊಂಡ ಒಂದು ಕಾಲೇಜು ತಂಬಾಕು ನಿಯಂತ್ರಣ ಸಮಿತಿ ರಚಿಸಿ, ಪ್ರತಿ ತಿಂಗಳ ಮೊದಲನೇ ಶನಿವಾರ ವಿದ್ಯಾರ್ಥಿಗಳಿಂದ ದುಷ್ಟರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯೂ ತಂಬಾಕು ಮುಕ್ತರನ್ನಾಗಿ ಮಾಡುವುದು ನಿಮ್ಮೆಲ್ಲರ ಜವಾಬ್ದಾರಿಯಾಗಿದೆ’ ಎಂದು ಹೇಳಿದರು.

‌ದಂತ ವೈದ್ಯ ಡಾ. ತಿಪ್ಪೇಸ್ವಾಮಿ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ ನೀಡಿದರು.

ರಾಜ್ಯ ತಂಬಾಕು ನಿಯಂತ್ರಣ ಘಟಕದ ವಿಭಾಗೀಯ ಸಂಯೋಜಕ ಮಹಾಂತೇಶ್ ಉಳಾಗಡ್ಡಿ, ಕೋಟ್ಪಾ ಕಾಯ್ದೆ ಬಗ್ಗೆ ಮಾಹಿತಿ ನೀಡಿದರು. ಸತೀಶ್ ಕಲಹಾಳ, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಕಾರ್ಯ ಚಟುವಟಿಕೆ ಬಗ್ಗೆ ತಿಳಿಸಿದರು. ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT