ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಯಕೊಂಡದ ‘ಗ್ರಾಮ ಒನ್‌’ ಕೇಂದ್ರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಮಧ್ಯವರ್ತಿಗಳ ಹಾವಳಿಗೆ ಕಡಿವಾಣ
Last Updated 26 ಜನವರಿ 2022, 14:31 IST
ಅಕ್ಷರ ಗಾತ್ರ

ದಾವಣಗೆರೆ: ‘ಗ್ರಾಮ ಒನ್‌ ಕೇಂದ್ರ ಸರ್ಕಾರದ ಮಹತ್ವಾಂಕ್ಷಿ ಯೋಜನೆಗಳಲ್ಲಿ ಒಂದಾಗಿದೆ. ತಹಶೀಲ್ದಾರರು, ಉಪವಿಭಾಗಾಧಿಕಾರಿಗಳು ಹೆಚ್ಚು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಯೋಜನೆ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ನೇತೃತ್ವ ವಹಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ತಾಲ್ಲೂಕಿನ ಮಾಯಕೊಂಡ ಗ್ರಾಮದ ‘ಗ್ರಾಮ ಒನ್’ ಕೇಂದ್ರಕ್ಕೆ ವರ್ಚುವಲ್‌ ಮೂಲಕ ಬುಧವಾರ ಚಾಲನೆ ನೀಡಿದ ಅವರು, ‘ಗ್ರಾಮ ಒನ್‌ ಕೇಂದ್ರಗಳಲ್ಲಿ 100ಕ್ಕೂ ಹೆಚ್ಚು ಸೇವೆಗಳು ಒಂದೇ ಸೂರಿನಡಿ ದೊರೆಯುತ್ತಿದ್ದು, ಮಧ್ಯವರ್ತಿಗಳ ಹಾವಳಿ ಇಲ್ಲದೇ ಯೋಜನೆಗಳ ಪ್ರಯೋಜನ ಸಾರ್ವಜನಿಕರಿಗೆ ಸಿಗುತ್ತಿದೆ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ ಮಾತನಾಡಿ, ‘ಗ್ರಾಮ ಒನ್‌ ಕೇಂದ್ರಂತಹ ಕ್ರಾಂತಿಕಾರಿ ಸೌಲಭ್ಯವನ್ನು ನೀಡಿರುವುದರಿಂದ ಗ್ರಾಮೀಣ ಜನರ ಜೀವನ ಹಸನಾಗಿದೆ. ಈಗಾಗಲೇ ಜಿಲ್ಲೆಯಲ್ಲಿ 201 ಗ್ರಾಮ ಒನ್ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 2.70 ಲಕ್ಷ ಅರ್ಜಿಗಳು ವಿಲೇವಾರಿಯಾಗಿದ್ದು, ಸಾರ್ವಜನಿಕರು ಪ್ರಯೋಜನ ಪಡೆದುಕೊಂಡಿದ್ದಾರೆ. ಇನ್ನೂ 60 ಕೇಂದ್ರಗಳನ್ನು ಆರಂಭಿಸಲು ಆದೇಶಿಸಲಾಗಿದೆ’ ಎಂದು ಹೇಳಿದರು.

‘ದಾವಣಗೆರೆ ನಗರಕ್ಕೆ ಹೋಗಿ ಬರಲು ಗ್ರಾಮಸ್ಥರಿಗೆ ₹ 200ರಿಂದ ₹300 ಖರ್ಚಾಗುತ್ತಿತ್ತು. ಈ ಸೌಲಭ್ಯದಿಂದ ಹಣ ಹಾಗೂ ಸಮಯ ಎರಡೂ ಉಳಿತಾಯವಾಗಿದೆ. ಎಲ್ಲಾ ದಾಖಲೆಗಳು ಗ್ರಾಮ ಒನ್ ಕೇಂದ್ರದಲ್ಲಿ ಸಿಗುವುದರಿಂದ ಜನರಲ್ಲಿ ಸಮಾಧಾನ ತಂದಿದೆ’ ಎಂದರು.

ಮಾಯಕೊಂಡ ಕ್ಷೇತ್ರದ ಶಾಸಕ ಪ್ರೊ.ಲಿಂಗಣ್ಣ ಮಾತನಾಡಿ, ‘ನನ್ನ ಕ್ಷೇತ್ರದಲ್ಲಿ ಗ್ರಾಮ ಒನ್ ಕೇಂದ್ರವನ್ನು ಮುಖ್ಯಮಂತ್ರಿ ಉದ್ಘಾಟಿಸುತ್ತಿರುವುದು ಬಹಳ ಖುಷಿಯ ವಿಚಾರ. ಗ್ರಾಮ ಒನ್ ಕೇಂದ್ರದಿಂದ ಜನರಿಗೆ ಹೆಚ್ಚು ಅನುಕೂಲವಾಗಲಿ’ ಎಂದು ಹೇಳಿದರು.

ಸಿ.ಎಂ.ಗೆ ಮನವಿ: ಮುಖ್ಯಮಂತ್ರಿ ಜೊತೆಗೆ ಮಾತನಾಡಿದಶ್ಯಾಗಲೆ ಗ್ರಾಮದ ವಿಧವೆ ಅನುಷಾ, ‘ನಾನು ಈಗಾಗಲೇ ಈ ಕೇಂದ್ರದ ಮೂಲಕ 5 ಯೋಜನೆಗಳಲ್ಲಿ ಪ್ರಯೋಜನ ಪಡೆದಿದ್ದೇನೆ. ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದೇನೆ. ಅತ್ತೆ–ಮಾವ ನನ್ನನ್ನು ಮನೆಯಿಂದ ಹೊರ ಹಾಕಿದ್ದು, ಜೀವನ ಕಟ್ಟಿಕೊಳ್ಳಲು ಅಂಗನವಾಡಿ ಕಾರ್ಯಕರ್ತೆ ಹುದ್ದೆಯನ್ನು ನೀಡಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಮಹಿಳೆ ವಿಧವೆಯಾಗಿದ್ದರೆ ಅಂಥವರಿಗೆ ಪ್ರಾಶಸ್ತ್ಯ ಕೊಡಬೇಕು. ಈ ಬಗ್ಗೆ ಕ್ರಮ ಕೈಗೊಳ್ಳಿ’ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು.

ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಣಬೇರು ಜೀವನಮೂರ್ತಿ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಡಾ. ವಿಜಯಮಹಾಂತೇಶ ದಾನಮ್ಮನವರ್, ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ತಹಶೀಲ್ದಾರ್ ಗಿರೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT