ದಾವಣಗೆರೆ: ಮಹಾತ್ಮ ಗಾಂಧೀಜಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಅನುಷ್ಠಾನದ ನೆಪದಲ್ಲಿ ಅರಣ್ಯ ಇಲಾಖೆ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿದೆ. ಇಂಗು ಗುಂಡಿ ಹಾಗೂ ಅರಣ್ಯೀಕರಣದ ಹೆಸರಿನಲ್ಲಿ ಹಗಲು ದರೋಡೆ ಮಾಡಲಾಗಿದೆ ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ದಾವನಗೆರೆ ತಾಲ್ಲೂಕು ಪಂಚಾಯಿತಿಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಹೆಬ್ಬಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಟ್ಟದಲ್ಲಿ ಹಾಕಿರುವ ಹತ್ತು ಸಾವಿರ ಸಸಿಗಳ ಕುರುಹು ತೋರಿಸುವಂತೆ ಸವಾಲು ಹಾಕಿದರು.
‘ತಾಲ್ಲೂಕಿನ ಆನಗೋಡು, ಗುಡಾಳು, ಹುಲಿಕಟ್ಟೆ, ನರೇನಹಳ್ಳಿ ಹಾಗೂ ಹೆಬ್ಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಅರಣ್ಯ ಇಲಾಖೆ ನಡೆಸಿದ ಬಹುತೇಕ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ. ಇಂಗು ಗುಂಡಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಹೊಡೆಯಲಾಗಿದೆ. ಬಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯೀಕರಣದ ನೆಪದಲ್ಲಿ ಮೋಸ ಮಾಡಲಾಗಿದೆ. ನೆಟ್ಟಿರುವ ಸಸಿ, ಪುಸ್ತಕದ ದಾಖಲೆ ಮತ್ತು ವಾಸ್ತವ ಸ್ಥಿತಿಗೆ ತಾಳೆಯಾಗುತ್ತಿಲ್ಲ’ ಎಂದು ಅಸಮಾಧಾನ ಹೊರಹಾಕಿದರು.
‘ಅರಣ್ಯ ಪ್ರದೇಶದಲ್ಲಿ ಪ್ರತಿ ಇಂಗುಗುಂಡಿ ನಿರ್ಮಾಣಕ್ಕೆ ₹ 10 ಲಕ್ಷ ವೆಚ್ಚ ಮಾಡಲಾಗಿದೆ. ಮೂರು ವರ್ಷಗಳಲ್ಲಿ ಇಂತಹ ಹತ್ತಾರು ಇಂಗು ಗುಂಡಿ ನಿರ್ಮಿಸಿರುವ ಬಗ್ಗೆ ದಾಖಲೆ ಸೃಷ್ಟಿಸಲಾಗಿದೆ. ಗುಡ್ಡಗಾಡು ಪ್ರದೇಶದಲ್ಲಿರುವ ಇಂತಹ ಕಾಮಗಾರಿ ಯಾರ ಕಣ್ಣಿಗೂ ಬೀಳುವುದಿಲ್ಲ ಎಂಬ ನಿರ್ಲಜ್ಜ ನಡವಳಿಕೆ ಬೇಸರ ಮೂಡಿಸಿದೆ. ಉನ್ನತ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಸಾಧ್ಯತೆ ಇದೆ’ ಎಂದು ಹೇಳಿದರು.
ನೋಟಿಸ್ ನೀಡಲು ಸೂಚನೆ
ಆರು ತಿಂಗಳ ಹಿಂದೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅನುಪಾಲನಾ ವರದಿ ಸಲ್ಲಿಸಲು ನಿರ್ಲಕ್ಷ್ಯ ತೋರಿದ ಹಾಗೂ ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಲು ಶಾಸಕ ಕೆ.ಎಸ್.ಬಸವಂತಪ್ಪ ಸೂಚನೆ ನೀಡಿದರು.
ಉತ್ತರ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಸಭೆಗೆ ಹಾಜರಾಗದಿರುವ ಬಗ್ಗೆ ಶಾಸಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಅನುಪಾಲನಾ ವರದಿ ಸಲ್ಲಿಸದ ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ವಿರುದ್ಧ ಹರಿಹಾಯ್ದರು. ನೋಟಿಸ್ ಜಾರಿ ಮಾಡುವಂತೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಭೋವಿ ಅವರಿಗೆ ತಾಕೀತು ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.