ಶುಕ್ರವಾರ, ಮಾರ್ಚ್ 31, 2023
26 °C
ಸಿ.ಜಿ.ಆಸ್ಪತ್ರೆಯಲ್ಲಿ ಸ್ಥಳ ಪರಿಶೀಲಿಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಸರ್ಕಾರಿ–ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಇಲ್ಲಿನ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಾಣ ಮಾಡುವ ಸಂಬಂಧ ಶನಿವಾರ ಸ್ಥಳ ಪರಿಶೀಲನೆಗೂ ಮುನ್ನ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

‘ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವುದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ನಿಲುವು. ದಾವಣಗೆರೆ ಸೇರಿ 9 ಜಿಲ್ಲೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸುವುದು ದೃಢ ನಿಶ್ಚಯವಾಗಿದೆ’ ಎಂದು ಹೇಳಿದರು.

‘ಚಿಗಟೇರಿ ಆಸ್ಪತ್ರೆ ಕಟ್ಟಡ ತುಂಬಾ ಹಳೆಯದಾಗಿದ್ದು, 1000 ಹಾಸಿಗೆ ಸಾಮರ್ಥ್ಯದ ಇದಕ್ಕೆ ಅನುಗುಣವಾಗಿ ತಜ್ಞ ವೈದ್ಯರು, ಶುಶ್ರೂಷಕರು, ಗ್ರೂಪ್-ಡಿ ಸಿಬ್ಬಂದಿ ಇಲ್ಲ. ವೈದ್ಯಕೀಯ ಕಾಲೇಜು ಸ್ಥಾಪನೆ ಸಂಬಂಧ ಈಗಾಗಲೇ ಅಧಿಕಾರಿಗಳು ಭೂಮಿ ಮುಂತಾದವುಗಳ ಬಗ್ಗೆ ವಿವರ ನೀಡಿದ್ದು, ಸಾಧ್ಯಾಸಾಧ್ಯತೆಗಳ ಬಗ್ಗೆ ವರದಿ ಸಲ್ಲಿಸಲು ಉನ್ನತ ಮಟ್ಟದ ಅಧಿಕಾರಿಗಳ ತಂಡವನ್ನು ಶೀಘ್ರದಲ್ಲಿಯೇ ಕಳುಹಿಸಿಕೊಡಲಾಗುವುದು’ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ‘ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಭೂಮಿ ಗುರುತಿಸಿ, ನಕ್ಷೆ ಸಹಿತ ವರದಿ ಸಲ್ಲಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶೀಘ್ರವೇ ಅನುಮೋದನೆ ಪಡೆದು, ಶೀಘ್ರ ಶಂಕುಸ್ಥಾಪನೆ ನೆರವೇರಿಸುತ್ತೇವೆ’ ಎಂದು ಹೇಳಿದರು.

ಜಿಲ್ಲಾ ಶಸ್ತ್ರಚಿಕಿತ್ಸಕರ ಕೊಠಡಿಗೆ ಭೇಟಿ ನೀಡಿದ ಸುಧಾಕರ್ ಅವರು ಸಂಸದರು, ಶಾಸಕರು, ಅಧಿಕಾರಿಗಳೊಂದಿಗೆ, ಜಿಲ್ಲಾ ಆಸ್ಪತ್ರೆ ಆವರಣದ ಸಂಪೂರ್ಣ ನಕ್ಷೆ, ಪ್ರಸ್ತಾವಿತ ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ ಜಯದೇವ ಹೃದ್ರೋಗ ಉಪಕೇಂದ್ರಕ್ಕೆ ನಿಗದಿಪಡಿಸಿರುವ ನಿವೇಶನದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡರು.

ಶಾಸಕರಾದ ಎಸ್.ಎ. ರವೀಂದ್ರನಾಥ್, ಪ್ರೊ. ಲಿಂಗಣ್ಣ, ಜಿಲ್ಲಾ ಪಂಚಾಯಿತಿ, ಸಿಇಒ ಡಾ.ವಿಜಯ ಮಹಾಂತೇಶ್, ಡಿಎಚ್‍ಒ ಡಾ. ನಾಗರಾಜ್, ಜಿಲ್ಲಾ ಸರ್ಜನ್ ಡಾ. ಜಯಪ್ರಕಾಶ್, ಆರ್‌ಸಿಎಚ್ ಅಧಿಕಾರಿ ಡಾ.ಮೀನಾಕ್ಷಿ ಇದ್ದರು.

 ‘ಸಂಕ್ರಾಂತಿಗೆ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆಗೆ ಸಿದ್ಧಪಡಿಸಿ’

ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ 100 ಹಾಸಿಗೆ ಸಾಮರ್ಥ್ಯದ ತಾಯಿ-ಮಕ್ಕಳ ಆಸ್ಪತ್ರೆ ಕಟ್ಟಡ ಮುಂದಿನ ಸಂಕ್ರಾಂತಿ ಹಬ್ಬದ ವೇಳೆಗೆ ಉದ್ಘಾಟನೆಗೆ ಸಿದ್ಧವಾಗಿರಬೇಕು ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಾಕೀತು ಮಾಡಿದರು.

ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಿರ್ಮಿಸಲಾಗುತ್ತಿರುವ ತಾಯಿ ಮಕ್ಕಳ ಆಸ್ಪತ್ರೆ ಹಾಗೂ ಟ್ರಾಮಾ ಕೇರ್ ಸೇಂಟರ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು.

‘ತಾಯಿ ಮಕ್ಕಳ ಆರೈಕೆ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ 15 ತಿಂಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ಈಗಾಗಲೆ 12 ತಿಂಗಳು ಕಳೆದಿದ್ದು, ಇನ್ನೂ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ಹಂತಕ್ಕೆ ಬಂದಿಲ್ಲ’ ಎಂದು ಸಚಿವರು ಅಸಮಾಧಾನ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಗುತ್ತಿಗೆದಾರರು, ‘ಲಾಕ್‍ಡೌನ್‌ನಿಂದಾಗಿ ಕಾರ್ಮಿಕರ ಕೊರತೆ ಕಾರಣದಿಂದ ನಿರೀಕ್ಷಿತ ಪ್ರಮಾಣದ ಕಾಮಗಾರಿ ಆಗಲಿಲ್ಲ’ ಎಂದು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ‘ಲಾಕ್‍ಡೌನ್ ಸಂದರ್ಭ ಕಟ್ಟಡ ನಿರ್ಮಾಣ ಕಾಮಗಾರಿಗೆ, ಕಾರ್ಮಿಕರ ಹಾಗೂ ಸಾಮಗ್ರಿಗಳ ಸಾಗಾಣಿಕೆಗೆ ನಿರ್ಬಂಧವಿರಲಿಲ್ಲ. ಆಸ್ಪತ್ರೆ ಕಟ್ಟಡ ಅವಶ್ಯಕವಾಗಿರುವುದರಿಂದ ನೀವು ನೀಡುವ ಕಾರಣ ಸಮಂಜಸವಾಗಿಲ್ಲ. 6 ತಿಂಗಳೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಬೇಕು. ಗುಣಮಟ್ಟದಲ್ಲಿ ಲೋಪದೋಷಗಳು ಕಂಡುಬಂದರೆ ಸಹಿಸುವುದಿಲ್ಲ’ ಎಂದು ಸುಧಾಕರ್ ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು