ಶನಿವಾರ, ಮಾರ್ಚ್ 25, 2023
29 °C

48 ಸ್ವಚ್ಛತಾ ವಾಹನ ವಿತರಿಸಿದ ಸಚಿವ ಕೆ.ಎಸ್. ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ವತಿಯಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸ್ವಚ್ಛ ಸಂಕೀರ್ಣ ಘಟಕದ ನಿರ್ವಹಣೆ ವಹಿಸಿಕೊಂಡಿದೆ. ಕಸ ವಿಲೇವಾರಿ ಮಾಡುವುದು ಆಯಾ ಗ್ರಾಮ ಪಂಚಾಯಿತಿಗಳ ಜವಾಬ್ದಾರಿಯಾಗಿದ್ದು, ಹೊರಗುತ್ತಿಗೆ ಆಧಾರದ ಮೇಲೆ ಅದಕ್ಕೆ ಸಿಬ್ಬಂದಿ ನೇಮಕ, ತರಬೇತಿ, ವೇತನ ನೀಡಲಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು.

ಜಿಲ್ಲೆಯ ದಾವಣಗೆರೆ ತಾಲ್ಲೂಕಿನ 12 ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕಿನ 19 ಗ್ರಾಮ ಪಂಚಾಯಿತಿ ಹಾಗೂ ಚನ್ನಗಿರಿ ತಾಲ್ಲೂಕಿನ 17 ಗ್ರಾಮ ಪಂಚಾಯಿತಿಗಳಿಗೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸುಮಾರು ₹ 2.62 ಕೋಟಿ ವೆಚ್ಚದಲ್ಲಿ ಒಟ್ಟು 48 ಸ್ವಚ್ಛತಾ ವಾಹನಗಳನ್ನು ಜಿಲ್ಲಾ ಪಂಚಾಯಿತಿ ಆವರಣದಲ್ಲಿ ವಿತರಿಸಿ, ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು
ಮಾತನಾಡಿದರು.

ಘನ ತ್ಯಾಜ್ಯ ವಿಲೇವಾರಿ ನಿರ್ವಹಣೆ ದೃಷ್ಟಿಯಿಂದ ರಾಜ್ಯದಲ್ಲಿ ಕಸ ಸಂಗ್ರಹಣೆಗೆ ವಾಹನ ಖರೀದಿಸಲಾಗಿದೆ. ಅದಕ್ಕೆ ಮಹಿಳಾ ಚಾಲಕರೇ ಬೇಕೆಂದು ಅಪೇಕ್ಷೆ ವ್ಯಕ್ತವಾಗಿತ್ತು. ಅದಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮನೆ ಸ್ವಚ್ಛವಾಗಿ ಇರಿಸಿಕೊಳ್ಳುವ ಮಹಿಳೆಯರು ಗ್ರಾಮವನ್ನೂ ಸ್ವಚ್ಛವಾಗಿ ಇರಿಸಿಕೊಳ್ಳಬಲ್ಲರು. ಆದ್ದರಿಂದ ಹೆಣ್ಣುಮಕ್ಕಳಿಗಾಗಿ ಕೌಶಲ ಕರ್ನಾಟಕದ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ಮಹಿಳೆಯರನ್ನು ಆಯ್ಕೆ ಮಾಡಿ ಅವರಿಗೆ ಮಾನ್ಯತೆ ಪಡೆದ ಚಾಲನಾ ತರಬೇತಿ ಸಂಸ್ಥೆ ವತಿಯಿಂದ ತರಬೇತಿ, ಡಿಎಲ್ ಕೊಡಿಸಲಾಗುತ್ತದೆ. ಕಸದಿಂದ ಬಂದ ಆದಾಯವನ್ನು ಸಿಬ್ಬಂದಿ, ವಾಹನ ವೆಚ್ಚಕ್ಕೆ ಬಳಸಿಕೊಳ್ಳಲು ಅವಕಾಶ ನೀಡಲಾಗಿದೆ ಎಂದು
ತಿಳಿಸಿದರು.

ದಾವಣಗೆರೆ ತಾಲ್ಲೂಕಿನ 10 ಗ್ರಾ.ಪಂ, ಚನ್ನಗಿರಿ ತಾಲ್ಲೂಕಿನ 17 ಗ್ರಾ.ಪಂ, ಹರಿಹರ ತಾಲ್ಲೂಕಿನ 5 ಗ್ರಾ.ಪಂ ಹೊನ್ನಾಳಿ ತಾಲ್ಲೂಕಿನ 7 ಗ್ರಾ.ಪಂ, ನ್ಯಾಮತಿ ತಾಲ್ಲೂಕಿನ 3 ಮತ್ತು ಜಗಳೂರು ತಾಲ್ಲೂಕಿನ 1 ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು ₹ 17 ಲಕ್ಷ ವೆಚ್ಚದಲ್ಲಿ ಒಟ್ಟು 42 ಸ್ವಚ್ಛ ಸಂಕೀರ್ಣ ಘಟಕ ನಿರ್ಮಾಣಾವಾಗಿದ್ದು, ಉದ್ಘಾಟನೆಗೆ ಸಿದ್ಧವಾಗಿದೆ ಎಂದು ಮಾಹಿತಿ ನೀಡಿದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲೆಯಲ್ಲಿ ಉಚಿತ ಸಹಾಯ ವಾಣಿ 18004252203 ಪ್ರಾರಂಭಿಸಿದ್ದು, ಇದೇ ವೇಳೆ ಸಚಿವರು ಇದಕ್ಕೆ ಸಂಬಂಧಿಸಿದ ಪೋಸ್ಟರ್ ಬಿಡುಗಡೆ ಮಾಡಿದರು.

ಶಾಸಕ ಎಸ್.ಎ. ರವೀಂದ್ರನಾಥ್, ಜಗಳೂರು ಶಾಸಕ ಎಸ್.ವಿ. ರಾಮಚಂದ್ರ, ಮಾಯಕೊಂಡ ಶಾಸಕ ಪ್ರೊ.ಎನ್. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಿ. ಆನಂದ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು