ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಂಗ್ರೆಸ್‌ನಿಂದ ಪರಿಶಿಷ್ಟರ ಹಣ ದುರ್ಬಳಕೆ: ಆರೋಪ

Published 31 ಮಾರ್ಚ್ 2024, 15:01 IST
Last Updated 31 ಮಾರ್ಚ್ 2024, 15:01 IST
ಅಕ್ಷರ ಗಾತ್ರ

ದಾವಣಗೆರೆ: ‘ಎಸ್‌ಸಿಪಿ, ಟಿಎಸ್‌ಪಿ ಯೋಜನೆಯ ₹25,000 ಕೋಟಿಗೂ ಹೆಚ್ಚು ಹಣವನ್ನು ಕಾಂಗ್ರೆಸ್‌ ಸರ್ಕಾರ ದುರ್ಬಳಕೆ ಮಾಡಿಕೊಳ್ಳುವ ಮೂಲಕ ದಲಿತ ವಿರೋಧಿ ನೀತಿ ಅನುಸರಿಸುತ್ತಿದೆ’ ಎಂದು ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಹನುಮಂತನಾಯ್ಕ ಆರೋಪಿಸಿದರು.

‘ಕಾಂಗ್ರೆಸ್ ಸರ್ಕಾರ ಮತ ಬ್ಯಾಂಕ್‌ಗಾಗಿ ಮಾತ್ರ ಪರಿಶಿಷ್ಟ ಜಾತಿಯವರನ್ನು ಓಲೈಸುತ್ತಿದ್ದು, ಅವರಿಗೆ ವಿವರಿಸಲು ಆಗದಷ್ಟು ಅನ್ಯಾಯ ಮಾಡಿದೆ. ಪರಿಶಿಷ್ಟ ಜಾತಿಯವರನ್ನು ತುಳಿದು ರಾಜಕೀಯ ಮಾಡುತ್ತಿರುವ ಕಾಂಗ್ರೆಸ್‌ಗೆ ನೂರು ವರ್ಷಗಳ ಇತಿಹಾಸವಿದೆ. ಎರಡು ಬಾರಿ ಅಂಬೇಡ್ಕರ್ ಅವರನ್ನು ಸೋಲಿಸಿರುವುದು ಹಾಗೂ ಸೋಲಿಸಿದವರಿಗೆ ಪದ್ಮ ಪ್ರಶಸ್ತಿ ನೀಡಿರುವುದು ಇದಕ್ಕೆ ಸಾಕ್ಷಿ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಆಪಾದಿಸಿದರು.

‘ಕರ್ನಾಟಕದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖರ್ಗೆ ಅವರನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆ’ ಎಂದು ಆರೋಪಿಸಿದರು.

‘ಪರಿಶಿಷ್ಟ ಜಾತಿ ಮೀಸಲಾತಿಯನ್ನು ಶೇ 15ರಿಂದ ಶೇ 17ಕ್ಕೆ, ವಾಲ್ಮಕಿ ಸಮಾಜದ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸುವ ಮೂಲಕ ಪರಿಶಿಷ್ಟರನ್ನು ಮೇಲಕ್ಕೆತ್ತುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ. ಕರ್ನಾಟಕದಲ್ಲಿ ಅಂಬೇಡ್ಕರ್ ಅವರು ಭೇಟಿ ನೀಡಿದ 10 ಸ್ಥಳಗಳನ್ನು ₹20 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿರುವ ಬಿಜೆಪಿ ಯಾವಾಗಲೂ ಪರಿಶೀಷ್ಟ ಜಾತಿಯವರ ಬೆನ್ನಿಗೆ ನಿಂತಿದೆ ಎಂಬುದಕ್ಕೆ ಸಾಕ್ಷಿಯಾಗಿದೆ’ ಎಂದು ಮುಖಂಡ ಆಲೂರು ನಿಂಗರಾಜ್ ಹೇಳಿದರು.

ಮುಖಂಡರಾದ ಬಿ.ಟಿ. ಸಿದ್ದಪ್ಪ ಮಾತನಾಡಿ, ‘ಲೋಕಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಮುಖಂಡರು ಹೇಳುತ್ತಿದ್ದಾರೆ. ಆದರೆ 28 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಸದಸ್ಯ ಶಿವಾನಂದ್, ಮುಖಂಡರಾದ ಕೊಳೇನಹಳ್ಳಿ ಬಿ.ಎಂ. ಸತೀಶ್, ಶಾಮನೂರು ರಾಜು, ರವಿನಾಯ್ಕ, ಬಿ.ವಿಠ್ಠಲ್, ದಂಡಪಾಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT