ಶನಿವಾರ, ಜನವರಿ 23, 2021
19 °C
ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಶಾಸಕ, ಅಧಿಕಾರಿಗಳ ನಡಿಗೆ ಹಳ್ಳಿಗಳ ಕಡೆಗೆ: ಮಾಡಾಳ್ ವಿರೂಪಾಕ್ಷಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ಕ್ಷೇತ್ರದ ಎಲ್ಲ ಇಲಾಖೆಗಳ ಅಧಿಕಾರಿಗಳು ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡದೇ ಹಳ್ಳಿಗಳಿಗೆ ಹಾಗೂ ಕಾಮಗಾರಿಗಳ ನಿರ್ವಹಣೆ ಬಗ್ಗೆ ಗಮನಹರಿಸುವುದು ಅಗತ್ಯವಾಗಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ ಮುಂದಿನ ದಿನಗಳಲ್ಲಿ ಶಾಸಕ, ಅಧಿಕಾರಿಗಳ ನಡಿಗೆ, ಹಳ್ಳಿಗಳ ಕಡೆಗೆ ಕಾರ್ಯಕ್ರಮವನ್ನು ನಡೆಸುವ ಮೂಲಕ ಗ್ರಾಮೀಣ ಪ್ರದೇಶಗಳ ಜನರ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮೆಕ್ಕೆಜೋಳ ಬೆಳೆಗಾರರಿಗೆ ಪ್ರೋತ್ಸಾಹ ನೀಡುವ ಸಲುವಾಗಿ ರಾಜ್ಯ ಸರ್ಕಾರ ಲಾಕ್‌ಡೌನ್ ಸಂದರ್ಭದಲ್ಲಿ ಪ್ಯಾಕೇಜ್ ಘೋಷಿಸಿತ್ತು. ಅದರಂತೆ 14,568 ಫಲಾನುಭವಿಗಳ ಬ್ಯಾಂಕ್ ಖಾತೆಗೆ ₹ 7.20 ಕೋಟಿ ಹಣ ಜಮೆಯಾಗಿದೆ. ಹಾಗೆಯೇ ಪ್ರಧಾನ ಮಂತ್ರಿ ಕಿಸಾನ್ ಬಿಮಾ ಫಸಲ್ ಯೋಜನೆ ಅಡಿ 38,167 ಫಲಾನುಭವಿಗಳಿಗೆ ₹ 41.15 ಕೋಟಿ ಹಣ ಜಮೆಯಾಗಿದೆ. 12 ಸಾವಿರ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದ್ದು, ಭತ್ತದ ಗದ್ದೆಗಳ ನಾಟಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದರು.

ಉಬ್ರಾಣಿ ಹೋಬಳಿಯ ಅರಣ್ಯ ಪ್ರದೇಶ ವ್ಯಾಪ್ತಿಯ ಗಡಿ ಗ್ರಾಮಗಳಲ್ಲಿ ಮತ್ತೆ ಕಾಡಾನೆಗಳು ಕಾಣಿಸಿಕೊಂಡಿದ್ದು, ಕಾಡಾನೆಗಳು ಗ್ರಾಮದೊಳಗೆ ಬಾರದಂತೆ ನಿಯಂತ್ರಿಸಲು ಚನ್ನಗಿರಿ ಹಾಗೂ ಮಾವಿನಕಟ್ಟೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕಂದಕವನ್ನು ತೆಗೆಯುವ ಕಾಮಗಾರಿಗೆ ₹ 1 ಕೋಟಿ ಅನುದಾನ ಬಿಡುಗಡೆಯಾಗಿದೆ. ಅತ್ಯಂತ ಶೀಘ್ರದಲ್ಲಿ ಕಾಮಗಾರಿಯನ್ನು ಆರಂಭಿಸಬೇಕು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ
ಸೂಚಿಸಿದರು.

ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿಯಿಂದ 17 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ₹ 1.87 ಕೋಟಿ ಹಾಗೂ 50 ಕೊಠಡಿಗಳಿಗೆ ನಿರ್ಮಾಣಕ್ಕೆ ₹ 5.50 ಕೋಟಿ ಅನುದಾನ ಬಿಡುಗಡೆಯಾಗಿದೆ. ಸಂತೇಬೆನ್ನೂರು ಸರ್ಕಾರಿ ಪಬ್ಲಿಕ್ ಶಾಲೆಗೆ ₹ 2 ಕೋಟಿ ಅನುದಾನ ಬಿಡುಗಡೆಯಾಗಿದೆ. ಮಕ್ಕಳ ಸುರಕ್ಷತೆಯ ಬಗ್ಗೆ ಗಮನಹರಿಸಬೇಕು. ಶಾಲೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡುವ ಕಡೆಗೆ ಹೆಚ್ಚಿನ ಗಮನಹರಿಸಬೇಕು. ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳುವ ಹೊಣೆಗಾರಿಕೆ ಶಿಕ್ಷಕರದ್ದಾಗಿರಬೇಕು. ಹಾಗೆಯೇ ಯಾವುದೇ ಕಾರಣಕ್ಕೂ ಮುಂಬರುವ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

‘ಕ್ಷೇತ್ರದಲ್ಲಿನ ಸ್ಮಶಾನಗಳ ಅಭಿವೃದ್ಧಿಗಾಗಿ ₹ 40 ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಈಗಾಗಲೇ ಒಂದು ಸ್ಮಶಾನಕ್ಕೆ ₹ 50 ಲಕ್ಷದಂತೆ ₹ 5 ಕೋಟಿ ಅನುದಾನ ಬಿಡುಗಡೆಯಾಗಿದೆ. ಅರಣ್ಯ ಇಲಾಖೆಯವರು ಹೊಸದಾಗಿ ಕಾಡನ್ನು ಕಡಿಯಲು ಬಿಡಬೇಡಿ. ಆದರೆ 25ರಿಂದ 30 ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡಿಕೊಂಡು ಬಂದ ಬಗರ್‌ಹುಕುಂ ಸಾಗುವಳಿದಾರರನ್ನು ಒಕ್ಕಲೆಬ್ಬಿಸುವ ಕಾರ್ಯ ಮಾಡಬೇಡಿ’ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಹಳೆಯ ವಿದ್ಯುತ್‌ ತಂತಿಗಳನ್ನು ತೆಗೆದು ಹೊಸ ತಂತಿ ಹಾಗೂ ಪರಿವರ್ತಕಗಳನ್ನು ಹಾಕಲು ಬೆಸ್ಕಾಂಗೆ ₹ 120 ಕೋಟಿ ಅನುದಾನವನ್ನು ಮಂಜೂರು ಮಾಡಿಸಲಾಗಿದೆ. ರೈತರ ಪಂಪ್‌ಸೆಟ್‌ಗಳಿಗೆ ಹಗಲು 4 ಹಾಗೂ ರಾತ್ರಿ 2 ಗಂಟೆ ತ್ರಿಫೇಸ್ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಸಾಕಮ್ಮ ಗಂಗಾಧರ್ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ಎನ್. ಲೋಕೇಶ್, ಸದಸ್ಯರಾದ ಯಶೋದಮ್ಮ ಮರುಳಪ್ಪ, ಮಂಜುಳ ಟಿ.ವಿ. ರಾಜು, ತೇಜಸ್ವಿ ಪಟೇಲ್, ಬಿ. ಫಕ್ಕೀರಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ಉಪಾಧ್ಯಕ್ಷೆ ಚಂದ್ರಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ. ಕೆಂಚಪ್ಪ, ಇಒ ಎಂ.ಆರ್. ಪ್ರಕಾಶ್, ತಹಶೀಲ್ದಾರ್ ಪಟ್ಟರಾಜಗೌಡ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು