ಶುಕ್ರವಾರ, ಸೆಪ್ಟೆಂಬರ್ 17, 2021
24 °C

ನೂತನ ಮುಖ್ಯಮಂತ್ರಿ ಅವರನ್ನು ಅಭಿನಂದಿಸಿದ ಶಾಸಕ ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ಹೊನ್ನಾಳಿ- ನ್ಯಾಮತಿ ಅವಳಿ ತಾಲ್ಲೂಕಿನ ಮುಖಂಡರೊಂದಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗೃಹಕಚೇರಿ ಕೃಷ್ಣಾದಲ್ಲಿ  ಶುಕ್ರವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೆ ಸಚಿವ ಸ್ಥಾನ ನೀಡುವಂತೆ ಮುಖಂಡರೊಂದಿಗೆ ಬಂದು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿಲ್ಲ. ಬದಲಾಗಿ ಹೊನ್ನಾಳಿ– ನ್ಯಾಮತಿ ಅವಳಿ ತಾಲ್ಲೂಕುಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.

‘ಬಿ.ಎಸ್. ಯಡಿಯೂರಪ್ಪ ಅವರು ನಮ್ಮ ಅವಳಿ ತಾಲ್ಲೂಕಿನ ಬಗ್ಗೆ ವಿಶೇಷವಾದ ಪ್ರೀತಿ ಹೊಂದಿದ್ದ ಕಾರಣ ಸಾಕಷ್ಟು ಅನುದಾನ ಬಿಡುಗಡೆ ಮಾಡುವ ಮೂಲಕ ಅಭಿವೃದ್ಧಿಗೆ ಸಹಕಾರ ನೀಡಿದರು. ಅದೇ ರೀತಿ ನಿಮ್ಮ ಅವಧಿಯಲ್ಲೂ ಹೆಚ್ಚಿನ ಅನುದಾನ ನೀಡುವಂತೆ ಮನವಿ ಮಾಡಲಾಯಿತು. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಹೇಳಿದರು.

‘ನನಗೆ ಸಚಿವ ಸ್ಥಾನ ನೀಡುವುದು ಬಿಡುವುದು ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರ. ನನಗೆ ಸಚಿವ ಸ್ಥಾನ ಸಿಗದಿರುವುದಕ್ಕೆ ಕಾರ್ಯಕರ್ತರು ಯಾರೂ ಬೇಸರ ಮಾಡಕೊಳ್ಳಬಾರದು. ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಂಘಟನೆಗೆ ಮುಂದಾಗಬೇಕು’ ಎಂದು ಕರೆ ನೀಡಿದರು.

‘ನನಗೆ ನಮ್ಮ ಜನ್ಮಭೂಮಿ ಮತ್ತು ಕರ್ಮಭೂಮಿ ಎರಡೂ ನಮ್ಮ ಅವಳಿ ತಾಲ್ಲೂಕುಗಳು. ಅಧಿಕಾರ ನೀರ ಮೇಲಿನ ಗುಳ್ಳೆ ಇದ್ದಂತೆ. ಜನರು ಅವರ ಹೃದಯದಲ್ಲಿ ನನಗೆ ಸ್ಥಾನ ನೀಡಿದ್ದು, ನನ್ನ ಕೊನೆಯ ಉಸಿರು ಇರುವವರೆಗೂ ಚಿರಋಣಿಯಾಗಿರುತ್ತೇನೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು