ದಾವಣಗೆರೆ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಬದಲಿ ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ನೋಟಿಸ್ ನೀಡಿರುವ ಕ್ರಮವನ್ನು ವಿರೋಧಿಸಿ ಜಿಲ್ಲಾ ಶೋಷಿತ ಸಮುದಾಯಗಳ ಒಕ್ಕೂಟದ ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಕಾರರು ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ, ಬಿಜೆಪಿ ಹಾಗೂ ಜೆಡಿಎಸ್ ನಾಯಕರ ವಿರುದ್ಧ ಘೋಷಣೆ ಕೂಗಿದರು. ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಮೆರವಣಿಗೆಯಲ್ಲಿ ಸಾಗಿ ಬಹಿರಂಗ ಸಭೆ ನಡೆಸಿದರು.
ಕೋಮುವಾದಿ ಹಾಗೂ ಜಾತಿವಾದಿ ಶಕ್ತಿಗಳು ಅಧಿಕಾರದಾಹ ಹಾಗೂ ಕುರ್ಚಿ ಆಸೆಗಾಗಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಷಡ್ಯಂತ್ರ ರೂಪಿಸಿದ್ದಾರೆ. ಸಿದ್ದರಾಮಯ್ಯ ಅವರ ರಾಜಕೀಯ ವರ್ಚಸ್ಸಿಗೆ ಮಸಿಬಳಿಯುವ ಹುನ್ನಾರ ನಡೆಸಿದ್ದಾರೆ. ಈ ಕುತಂತ್ರಕ್ಕೆ ಕುಮ್ಮಕ್ಕು ನೀಡುತ್ತಿರುವ ಬಿಜೆಪಿ ರಾಷ್ಟ್ರೀಯ ನಾಯಕರು, ರಾಜ್ಯಪಾಲರ ಮೂಲಕ ಕಿರುಕುಳ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸಿದರೆ ಹಿಂದುಳಿದ ಮತ್ತು ಶೋಷಿತ ಸಮುದಾಯವನ್ನು ರಾಜಕೀಯವಾಗಿ ಮುಗಿಸಲು ಸುಲಭವಾಗುತ್ತದೆ ಎಂಬುದು ಕೋಮುವಾದಿ ಶಕ್ತಿಗಳ ಲೆಕ್ಕಾಚಾರ. ವಿನಾ ಕಾರಣ ಸಿದ್ದರಾಮಯ್ಯ ಅವರನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗುತ್ತಿದೆ. ತಮ್ಮ ಮೇಲಿನ ಆರೋಪಕ್ಕೆ ತನಿಖಾ ಆಯೋಗ ರಚನೆ ಮಾಡಿ ಪಾರದರ್ಶಕತೆ ತೋರಿದ ಮುಖ್ಯಮಂತ್ರಿ ನಡೆ ಮೆಚ್ಚುಗೆಗೆ ಪಾತ್ರವಾಗಿದೆ. ರಾಜ್ಯಪಾಲರು ಕೂಡಲೇ ನೋಟಿಸ್ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ, ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ಮಂಜಪ್ಪ, ನಿವೃತ್ತ ಡಿವೈಎಸ್ ಪಿ ರುದ್ರಮುನಿ, ಮೇಯರ್ ವಿನಾಯಕ ಪೈಲ್ವಾನ್, ಕಾಂಗ್ರೆಸ್ ಮುಖಂಡ ಹೊದಿಗೆರೆ ರಮೇಶ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.