ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ |' ಶಾಶ್ವತ ಯೋಜನೆಗಳನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ '

Published 5 ಜೂನ್ 2024, 7:04 IST
Last Updated 5 ಜೂನ್ 2024, 7:04 IST
ಅಕ್ಷರ ಗಾತ್ರ

ದಾವಣಗೆರೆ: ‘ಹಲವು ಶಾಶ್ವತ ಯೋಜನೆಗಳನ್ನು ನೀಡಿದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಕನ್ನಡಿಗರಿಗೆ ಪ್ರಾತಃಸ್ಮರಣೀಯರು’ ಎಂದು ಕೆ.ರಾಘವೇಂದ್ರ ನಾಯರಿ ಅಭಿಪ್ರಾಯಪಟ್ಟರು.

ಇಲ್ಲಿನ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 140ನೇ ಜಯಂತ್ಯುತ್ಸವದ ಸಮಾರಂಭದಲ್ಲಿ ‘ಕೃಷ್ಣರಾಜ ಒಡೆಯರ್ ಅವರು ಕನ್ನಡ ನಾಡಿಗೆ ನೀಡಿದ ಕೊಡುಗೆಗಳು’ ಕುರಿತು ಅವರು ಉಪನ್ಯಾಸ ನೀಡಿದರು.

‘ಕನ್ನಡ ಸಾಹಿತ್ಯ ಪರಿಷತ್ತು, ಕೆಆರ್‌ಎಸ್ ಅಣೆಕಟ್ಟು, ವಾಣಿ ವಿಲಾಸ ಸಾಗರ, ಶಿವನಸಮುದ್ರ ಜಲ ವಿದ್ಯುತ್ ಯೋಜನೆ, ಮೈಸೂರು ಬ್ಯಾಂಕ್, ಮೈಸೂರು ವಿಶ್ವವಿದ್ಯಾಲಯ, ಬೆಂಗಳೂರು ವಿಶ್ವವಿದ್ಯಾಲಯ, ಮೈಸೂರು ಮೆಡಿಕಲ್ ಕಾಲೇಜು, ನಿಮ್ಹಾನ್ಸ್ ಆಸ್ಪತ್ರೆ, ಮಿಂಟೊ ಆಸ್ಪತ್ರೆ ಮೊದಲಾದವುಗಳನ್ನು ಅಭಿವೃದ್ಧಿಪಡಿಸಿದ್ದು, ಒಡೆಯರ್ ಆಡಳಿತಾವಧಿಯಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ಧಿಯನ್ನು ಮೈಸೂರು ರಾಜ್ಯವು ಕಂಡುದರಿಂದ ದೇಶದಾದ್ಯಂತ ಪ್ರಸಿದ್ಧಿಯನ್ನು ಪಡೆದಿತ್ತು’ ಎಂದರು.

‘ಶಿಕ್ಷಣ, ಆರೋಗ್ಯ, ನೀರಾವರಿ, ಕೃಷಿ, ಮೂಲಸೌಕರ್ಯ, ಕೈಗಾರಿಕೆ, ಆಡಳಿತ ಸುಧಾರಣೆ, ಕಲೆ, ಸಾಹಿತ್ಯ, ಸಂಸ್ಕೃತಿ ಸೇರಿದಂತೆ ಸರ್ವತೋಮುಖ ಅಭಿವೃದ್ಧಿಯನ್ನು ಒಡೆಯರ್ ಮಾಡಿದ್ದರು’ ಎಂದು ಸ್ಮರಿಸಿದರು.

‘ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದರ್ಶಿತ್ವ ಚಿಂತನೆಯ ಫಲವಾಗಿ 1915ರಲ್ಲಿ ಸ್ಥಾಪನೆಗೊಂಡ ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಹತ್ತು ಹಲವು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಜನ ಸ್ನೇಹಿ ಆಡಳಿತವನ್ನು ನಡೆಸಿದ್ದರಿಂದ ಅವರ ಆಡಳಿತಾವಧಿಯು ಸುವರ್ಣ ಯುಗವೆಂದು ಕರೆಯಬಹುದು’ ಎಂದು ವಾಮದೇವಪ್ಪ ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ ಬಣ್ಣಿಸಿದರು.

ಪರಿಷತ್ತಿ‌ನ ಗೌರವ ಕಾರ್ಯದರ್ಶಿ ಬಿ.ದಿಳ್ಯಪ್ಪ ಸ್ವಾಗತಿಸಿದರು. ರೇವಣಸಿದ್ದಪ್ಪ ಅಂಗಡಿ ವಂದಿಸಿದರು. ರುದ್ರಾಕ್ಷಿ ಬಾಯಿ ಪ್ರಾರ್ಥಿಸಿದರು. ಕಾರ್ಮಿಕ ಮುಖಂಡ ಅವರಗೆರೆ ಎಚ್‌.ಜಿ.ಉಮೇಶ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕಕ್ಕರಗೊಳ್ಳ ಪರಮೇಶ್ವರಪ್ಪ, ಅವರಗೆರೆ ರುದ್ರಮುನಿ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಜಗದೀಶ್ ಕೂಲಂಬಿ, ಜಿಗಳಿ ಪ್ರಕಾಶ್, ಕೆ.ಎಸ್. ವೀರೇಶ್‌ಪ್ರಸಾದ್, ಸತ್ಯಭಾಮಾ ಮಂಜುನಾಥ್, ತಾಲೂಕು ಕಸಾಪ ಪದಾಧಿಕಾರಿಗಳಾದ ಬೇತೂರು ಷಡಾಕ್ಷರಪ್ಪ, ಕುರ್ಕಿ ಸಿದ್ದೇಶ್ ಹಾಗೂ ನಾಗೇಶ್ವರಿ ನಾಯರಿ, ಎಚ್.ಚಿದಾನಂದ, ಎ.ಜಿ. ವೀರೇಶ್, ಶ್ರೀನಿವಾಸ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT