ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘1,318 ಹೆಕ್ಟೇರ್ ಬೆಳೆ, 267 ಮನೆಗೆ ಹಾನಿ’

ಜಿಲ್ಲಾಧಿಕಾರಿ, ಶಾಸಕರ ನೇತೃತ್ವದಲ್ಲಿ ಮಳೆ ಹಾನಿ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ
Last Updated 5 ಆಗಸ್ಟ್ 2022, 3:42 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನಾದ್ಯಂತ ವಾರದಿಂದ ಧಾರಾಕಾರವಾಗಿ ಮಳೆ ಸುರಿದಿದ್ದು, 1,318 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾಗೂ 267 ಮನೆಗಳಿಗೆ ಹಾನಿಯಾಗಿದೆ ಎಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗ್ರಾಮೀಣ ರಸ್ತೆ, ಚರಂಡಿ, 9 ಶಾಲಾ ಕೊಠಡಿಗಳು ಹಾಗೂ 4 ಅಂಗನವಾಡಿ ಕೇಂದ್ರಗಳಿಗೆ ಹಾನಿಯಾಗಿದ್ದು,
₹ 3.65 ಕೋಟಿ ಪರಿಹಾರ ಬಿಡುಗಡೆಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ. ಶೀಘ್ರದಲ್ಲಿ ರೈತರಿಗೆ ಬೆಳೆ ಹಾನಿ ಹಾಗೂ ಬಿದ್ದ ಮನೆಗಳಿಗೆ ಅಗತ್ಯ ಪರಿಹಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಚನ್ನಗಿರಿ ಬೆಸ್ಕಾಂ ಉಪ ವಿಭಾಗದಲ್ಲಿ 151 ಹಾಗೂ ಸಂತೇಬೆನ್ನೂರು ವಿಭಾಗದಲ್ಲಿ 171 ವಿದ್ಯುತ್ ಕಂಬಗಳು ಬಿದ್ದಿವೆ. ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಜಂಟಿಯಾಗಿ ಮನೆ ಹಾನಿ ಬಗ್ಗೆ ಸಮೀಕ್ಷೆ ಮಾಡಬೇಕು. ಮಾನವೀಯತೆಯಿಂದ ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಯಲ್ಲಿ 77 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದ್ದು, ₹ 103 ಕೋಟಿ ಪರಿಹಾರ ಮೊತ್ತ ಬಿಡುಗಡೆ ಮಾಡಲು ಸರ್ಕಾರಕ್ಕೆ ವರದಿ ನೀಡಲಾಗಿದೆ. ಆಯಾ ಗ್ರಾಮಗಳಲ್ಲಿ ಮಳೆಯ ನೀರು ಸರಾಗವಾಗಿ ಹರಿದು ಹೋಗುವಂತೆ ಚರಂಡಿಗಳಲ್ಲಿನ ಹೂಳನ್ನು ಕೂಡಲೇ ತೆಗೆಯಿಸಬೇಕು. ಕೆರೆ ಕಟ್ಟೆಗಳು ತುಂಬಿದ್ದು, ತುಂಬಿರುವ ಕೆರೆಗಳಿಗೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಬೇಕು. ಮುಂದಿನ ದಿನಗಳಲ್ಲಿ ಭಾರಿ ಮಳೆಯಾಗುವ ಬಗ್ಗೆ ಸೂಚನೆ ಇದ್ದು, ಆಯಾ ಗ್ರಾಮಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಭಾಗಶಃ ಹಾನಿಗೊಳಗಾದ 146 ಮನೆಗಳ ಸಂತ್ರಸ್ತರಿಗೆ ಮನೆಗಳನ್ನು ನಿರ್ಮಿಸಿಕೊಳ್ಳಲು ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ತಿಳಿಸಿದರು.

ಕೃಷಿ ಇಲಾಖೆ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ಉಪ ವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ, ತಹಶೀಲ್ದಾರ್ ಡಾ.ಪಟ್ಟರಾಜಗೌಡ, ಪುರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT