ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತ ಪಂಚಮಸಾಲಿ 2ಎ ಮೀಸಲಾತಿಗಾಗಿ 30ರಂದು ಪ್ರತಿಜ್ಞಾ ಪಂಚಾಯತ್

ಲಿಂಗಾಯತ ಪಂಚಮಸಾಲಿ ಸಮಾಜದ ಬೃಹತ್ ಅಭಿಯಾನ
Last Updated 27 ಸೆಪ್ಟೆಂಬರ್ 2021, 15:39 IST
ಅಕ್ಷರ ಗಾತ್ರ

ದಾವಣಗೆರೆ: ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದಿಂದ ಸೆ.30ರಂದು ಸಂಜೆ 4.30ಕ್ಕೆ ನಗರದ ತ್ರಿಶೂಲ್ ಕಲಾಭವನದಲ್ಲಿ ಸಮಾಜಕ್ಕೆ 2ಎ ಮೀಸಲಾತಿ ಹಕ್ಕೊತ್ತಾಯಕ್ಕಾಗಿ ಪ್ರತಿಜ್ಞಾ ಪಂಚಾಯತ್ ಬೃಹತ್ ರಾಜ್ಯ ಅಭಿಯಾನ ನಡೆಯಲಿದೆ ಎಂದು ಮೀಸಲಾತಿ ಹೋರಾಟ ಸಮಿತಿಯ ಮಹಾ ಪ್ರಧಾನ ಕಾರ್ಯದರ್ಶಿ ಎಚ್.ಎಸ್‌. ಶಿವಶಂಕರ್ ತಿಳಿಸಿದರು.

‘ಅಭಿಯಾನದ ಜೊತೆಗೆ ಲಿಂಗೈಕ್ಯ ಜಗದ್ಗುರು ಮಹಾಂತ ಸ್ವಾಮೀಜಿ ಜಯಂತ್ಯುತ್ಸವ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಮಾಜಿ ಮೇಯರ್ ಬಿ.ಜಿ. ಅಜಯ್ ಕುಮಾರ್ ಅವರ ಪದಗ್ರಹಣ ಸಮಾರಂಭ ನಡೆಯಲಿದೆ’ ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ನೊಳಂಬ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಸಮಾಜದ ಅಧ್ಯಕ್ಷ ಎಸ್‌.ಆರ್.ಪಾಟೀಲ್ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಅವರಿಗೆ ಮನವಿ ಸಲ್ಲಿಸಿರುವುದರಿಂದ ನಮಗೆ ಇನ್ನಷ್ಟು ಬಲ ಬಂದಂತಾಗಿದೆ. ಲಿಂಗಾಯತ ಪಂಚಮಸಾಲಿ ಸಮಾಜವಷ್ಟೇ ಅಲ್ಲ; ಲಿಂಗಾಯತ ಸಮಾಜದ ಒಳಪಂಗಡಗಳಿಗೆ ಮೀಸಲಾತಿ ನೀಡಬೇಕು. ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಈ ಪಂಗಡಗಳನ್ನು ಸೇರಿಸಬೇಕು ಎಂಬುದು ನಮ್ಮ ಒತ್ತಾಯವಾಗಿದೆ’ ಎಂದು ಹೇಳಿದರು.

‘ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಸಮಾಜದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಂದಿಗುಡಿ ವೃಷಭಪುರಿ ಸಂಸ್ಥಾನದ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಬಾಲೇಹೊಸೂರಿನ ದಿಂಗಾಲೇಶ್ವರ ಸ್ವಾಮೀಜಿ ಪಾಲ್ಗೊಳ್ಳುವರು. ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಸಕ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ವಿನಯ ಕುಲಕರ್ಣಿ, ಕಿತ್ತೂರು ರಾಣಿ ಚನ್ನಮ್ಮ ಬಳಗದ ರಾಜ್ಯ ಘಟಕದ ಅಧ್ಯಕ್ಷರಾದ ವೀಣಾ ಕಾಶಪ್ಪನವರ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಸಮಾಜದ 23 ಶಾಸಕರು ‍ಪಾಲ್ಗೊಳ್ಳುವರು’ ಎಂದು ಮಾಹಿತಿ ನೀಡಿದರು.

‘ಸೆ. 30ರಂದು ಮಧ್ಯಾಹ್ನ 3ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದಿಂದ ರೇಣುಕ ಮಂದಿರದವರೆಗೆ ಬೈಕ್ ರ‍್ಯಾಲಿ ಮೂಲಕ ಬರಮಾಡಿಕೊಂಡು, ಅಲ್ಲಿಂದ ತ್ರಿಶೂಲ್ ಕಲಾ ಭವನದವರೆಗೆ ವಾದ್ಯಗಳೊಂದಿಗೆ ಬೃಹತ್ ಮೆರವಣಿಗೆ ನಡೆಸಲಾಗುವುದು’ ಎಂದರು.

ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿ. ಅಶೋಕ್ ಗೋ‍ಪನಾಳ್, ಮಾಜಿ ಮೇಯರ್‌ ಅಜಯ್ ಕುಮಾರ್, ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಎಸ್.ಓಂಕಾರಪ್ಪ, ಕೊಟ್ರೇಶ್, ಮಹಾಂತೇಶ್ ಒಣರೊಟ್ಟಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT