ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಾವಣಗೆರೆ | ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಕ್ಕೆ ವಿರೋಧ

ಎಐಟಿಯುಸಿ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Published 6 ಜೂನ್ 2024, 6:03 IST
Last Updated 6 ಜೂನ್ 2024, 6:03 IST
ಅಕ್ಷರ ಗಾತ್ರ

ದಾವಣಗೆರೆ: ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿ ಆರಂಭಿಸುವ ರಾಜ್ಯ ಸರ್ಕಾರ ಪ್ರಸ್ತಾವವನ್ನು ವಿರೋಧಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಫೆಡರೇಷನ್ (ಎಐಟಿಯುಸಿ) ತಾಲ್ಲೂಕು ಸಮಿತಿಯ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಇಲ್ಲಿನ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

‘6 ತಿಂಗಳಿನಿಂದ 6 ವಯೋಮಾನದ ಮಕ್ಕಳ ಆರೋಗ್ಯ, ಲಾಲನೆ, ಪಾಲನೆ, ಪೋಷಣೆ, ಕ್ರೀಡಾ ಕಲಿಕೆ ಚಟುವಟಿಕೆಯನ್ನು ಅಂಗನವಾಡಿ ಕೇಂದ್ರಗಳ ಮೂಲಕ ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದ್ದು, ಎಲ್‌ಕೆಜಿ ಯುಕೆಜಿ ತರಗತಿಗಳನ್ನು ಆರಂಭಿಸುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆಯು ಕ್ಷೀಣಿಸಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ ಬೀಳಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಮಕ್ಕಳಿಗೆ ಕೊಡಬೇಕಾದ ಸಮವಸ್ತ್ರ, ಪಠ್ಯಪುಸ್ತಕ ನಮಗೆ ನೀಡಿದರೆ ಯಾವ ಖಾಸಗಿ ಶಾಲೆಗಳಿಗೂ ಕಡಿಮೆ ಇಲ್ಲದಂತೆ ನಾವು ಕೆಲಸ ಮಾಡುತ್ತೇವೆ’ ಎಂದು ಫೆಡರೇಷನ್ ಜಿಲ್ಲಾ ಕಾರ್ಯದರ್ಶಿ ಎಸ್.ಎಸ್. ಮಲ್ಲಮ್ಮ ಹೇಳಿದರು.

‘ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಎಲ್‌ಕೆಜಿ, ಯುಕೆಜಿಯನ್ನು ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಬಿಟ್ಟುಕೊಡಬಾರದು. ಅಂಗನವಾಡಿ ಕೇಂದ್ರಗಳು, ಕಾರ್ಯಕರ್ತೆಯರು ಉಳಿಯಬೇಕಾದರೆ ಅಂಗನವಾಡಿಗಳಲ್ಲೇ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಬೇಕು. ಇಲ್ಲದಿದ್ದರೆ ನಿರುದ್ಯೋಗಿಗಳಾಗಬೇಕಾಗುತ್ತದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಬೇಕು’ ಎಂದು ಮುಖಂಡ ಆವರಗೆರೆ ವಾಸು ಒತ್ತಾಯಿಸಿದರು.

‘ರಾಜ್ಯ ಸರ್ಕಾರ 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ ₹15,000 ನೀಡಬೇಕು. ಪ್ರಸ್ತುತ ₹12,000 ನೀಡುತ್ತಿದ್ದು, ಅದನ್ನು 15ಸಾವಿರಕ್ಕೆ ಹೆಚ್ಚಿಸಬೇಕು. ಕೇಂದ್ರ ಸರ್ಕಾರ ಕನಿಷ್ಠ ವೇತನವಾಗಿ ₹18,000ವನ್ನು ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಬೇಕು’ ಎಂದು ಒತ್ತಾಯಿಸಿದರು. 

ಪ್ರತಿಭಟನೆಯ ಬಳಿಕ ಉಪವಿಭಾಗಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕಾರ್ಮಿಕ ಮುಖಂಡರಾದ ಎಚ್.ಜಿ. ಉಮೇಶ್, ಸರ್ವಮ್ಮ, ಗೀತಾ, ಕೆ.ಸಿ. ನಿರ್ಮಲಾ, ರೇಣುಕಾ, ಸುಧಾ, ಎಚ್.ಜಿ. ಮಂಜುಳಾ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT