ಗುರುವಾರ , ನವೆಂಬರ್ 21, 2019
24 °C
ಟಾಸ್ಕ್‌ಫೋರ್ಸ್‌ ಸಭೆ

ಖರೀದಿ ಕೇಂದ್ರ ತೆರೆಯಲು ಪ್ರಸ್ತಾವ: ಹೆಚ್ಚುವರಿ ಜಿಲ್ಲಾಧಿಕಾರಿ ನಜ್ಮಾ ಜಿ.

Published:
Updated:
Prajavani

ದಾವಣಗೆರೆ: ಜಿಲ್ಲೆಯ ಪ್ರಮುಖ ಕೃಷಿ ಉತ್ಪನ್ನಗಳಾದ ಮೆಕ್ಕೆಜೋಳ, ಭತ್ತ, ರಾಗಿಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲು ಅನುಮತಿ ಕೋರಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ತೀರ್ಮಾನಿಸಲಾಯಿತು.

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ನಜ್ಮಾ ಜಿ. ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.

ನಜ್ಮಾ ಜಿ. ಮಾತನಾಡಿ, ‘2019-20ನೇ ಸಾಲಿನ ಮುಂಗಾರು ಹಂಗಾಮಿಗೆ ಕೇಂದ್ರ ಸರ್ಕಾರ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ ಮಾಡಿದೆ. ಸಗಟು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳು ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದು, ಮೆಕ್ಕೆಜೋಳ, ಭತ್ತ ಮತ್ತು ರಾಗಿಯನ್ನು ಖರೀದಿಸಿ ರೈತರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಖರೀದಿ ಕೇಂದ್ರ ತೆರೆಯುವ ಅವಶ್ಯಕತೆ ಇದೆ. ಆದ್ದರಿಂದ ಪ್ರಸ್ತಾವ ಸಲ್ಲಿಸುವುದು ಸೂಕ್ತ. ಈ ಯೋಜನೆ ಅನುಷ್ಠಾನದಿಂದ ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳ ದರ ಸ್ಥಿರತೆ ಕಾಪಾಡಲು ಸಹಾಯಕವಾಗುತ್ತದೆ ಹಾಗೂ ಕೃಷಿ ಉತ್ಪನ್ನಗಳ ಮಾರುಕಟ್ಟೆ ದರಗಳ ಬಗ್ಗೆ ರೈತರಲ್ಲಿ ಅರಿವು ಮೂಡುತ್ತದೆ’ ಎಂದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಮಾತನಾಡಿ, ‘ಜಿಲ್ಲೆಯಲ್ಲಿ ಎಲ್ಲ ತಾಲ್ಲೂಕುಗಳಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ, ಜಗಳೂರು ತಾಲ್ಲೂಕು ಹೊರತುಪಡಿಸಿ ಉಳಿದ ತಾಲ್ಲೂಕುಗಳಲ್ಲಿ ಭತ್ತ ಖರೀದಿ ಕೇಂದ್ರ ಹಾಗೂ ಜಗಳೂರು ಮತ್ತು ದಾವಣಗೆರೆ ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರ ತೆರೆಯುವ ಅವಶ್ಯಕತೆ ಇದೆ’ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿ ಪ್ರಭು ಮಾತನಾಡಿ, ‘ಮಾರುಕಟ್ಟೆಯಲ್ಲಿ ಪ್ರಸ್ತುತ ಮೆಕ್ಕೆಜೋಳ ಸರಾಸರಿ ದರ ₹1,800 ರಿಂದ ₹1,900 ಇದೆ. ಸದ್ಯಕ್ಕೆ ಬೇರೆ ರಾಜ್ಯಗಳಿಂದ ಮೆಕ್ಕೆಜೋಳ ಬರುತ್ತಿಲ್ಲ. ಫೆಬ್ರುವರಿ ನಂತರ ಹೊರಗಡೆಯಿಂದ ಮೆಕ್ಕೆಜೋಳ ಬರಲಿದ್ದು, ನಮ್ಮ ಮೆಕ್ಕೆಜೋಳದಲ್ಲಿ ತೇವಾಂಶ ಹೆಚ್ಚು ಇರುವುದರಿಂದ ಹೊರಗಡೆ ಉತ್ತಮ ಮಾರುಕಟ್ಟೆ ಸಿಗುವುದಿಲ್ಲ. ಒಣಗಿಸಿದ ಮೆಕ್ಕೆಜೋಳಕ್ಕೆ ಬೇಡಿಕೆ ಮತ್ತು ಮಾರುಕಟ್ಟೆ ಲಭಿಸುತ್ತದೆ. ಅಲ್ಲದೇ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಗೆ ಉತ್ತಮ ದರವೂ ಸಿಗಲಿದೆ’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಇದಕ್ಕೆ ಪ್ರತಿಕ್ರಿಯಿಸಿ, ‘ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ಸ್ಥಿರತೆ ಒದಗಿಸುವ ನಿಟ್ಟಿನಲ್ಲಿ ಹಾಗೂ ಮಾರುಕಟ್ಟೆ ಕುರಿತು ಅವರಲ್ಲಿ ಅರಿವು ಮೂಡಿಸುವಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆ ಅನುಷ್ಠಾನ ನೆರವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರದ ಕನಿಷ್ಠ ಬೆಂಬಲ ಬೆಲೆ ಯೋಜನೆ ಅನುಷ್ಠಾನಕ್ಕೆ ಜಿಲ್ಲೆಯಿಂದ ಪ್ರಸ್ತಾವ ಸಲ್ಲಿಸಲಾಗುವುದು’ ಎಂದ ಅವರು, ಖರೀದಿ ಕೇಂದ್ರ ತೆರೆಯಲು ಎಲ್ಲ ಸಿದ್ಧತೆ ನಡೆಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಕೆಎಫ್‍ಸಿಎಸ್‍ಸಿಯ ಜಿಲ್ಲಾ ವ್ಯವಸ್ಥಾಪಕ ಮುನೀರ್ ಬಾಷಾ, ಆಹಾರ ಇಲಾಖೆ ವ್ಯವಸ್ಥಾಪಕಿ ಸುಕನ್ಯಾ ಎಲ್ಲ ತಾಲ್ಲೂಕುಗಳ ಎಪಿಎಂಸಿ ಕಾರ್ಯದರ್ಶಿಗಳು, ಕೃಷಿ ಇಲಾಖೆ ಅಧಿಕಾರಿಗಳು ಇದ್ದರು.

ಪ್ರತಿಕ್ರಿಯಿಸಿ (+)