ಶನಿವಾರ, ಅಕ್ಟೋಬರ್ 23, 2021
20 °C

ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕನಿಷ್ಠ ಬೆಂಬಲ ಬೆಲೆ ಯೋಜನೆಗೆ ಕಾನೂನು ಮಾನ್ಯತೆ ನೀಡಬೇಕು. ಮೆಕ್ಕೆಜೋಳಕ್ಕೆ ₹ 3500 ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡಬೇಕು. ಜಿಲ್ಲೆಯಲ್ಲಿ ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಹುಚ್ಚವ್ವನಹಳ್ಳಿ ಮಂಜುನಾಥ್ ಬಣ) ಸೋಮವಾರ ಪ್ರತಿಭಟನೆ ನಡೆಸಿತು.

ರೈತ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು, ರೈತರ ಬೇಡಿಕೆ ಈಡೇರಿಸಲು ಮೀನಾಮೇಷ ಎಣಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗುತ್ತಾ ಜಯದೇವ ಸರ್ಕಲ್‌ನಿಂದ ಜಿಲ್ಲಾಡಳಿತ ಭವನದ ವರೆಗೆ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ಮನವಿ ಸಲ್ಲಿಸಿದರು.

‘ಕೇಂದ್ರ ಸರ್ಕಾರವು ಈಗಾಗಲೇ ಮೆಕ್ಕೆಜೋಳಕ್ಕೆ ₹ 1,860 ಕನಿಷ್ಠ ಬೆಂಬಲ ಬೆಲೆಯನ್ನು ಘೋಷಣೆ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಬೀಜ, ಗೊಬ್ಬರ, ಔಷಧದ ಬೆಲೆ ಜಾಸ್ತಿಯಾಗಿರುವುದರಿಂದ ವ್ಯವಸಾಯದ ಖರ್ಚು ಹೆಚ್ಚಾಗುತ್ತಿದೆ. ಹೀಗಾಗಿ ಸರ್ಕಾರ ಈಗ ನಿಗದಿ ಮಾಡಿರುವ ಬೆಂಬಲ ಬೆಲೆಯಿಂದ ರೈತರಿಗೆ ಸಾಕಷ್ಟು ನಷ್ಟವಾಗಲಿದೆ’ ಎಂದು ಸಂಘದ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್ ತಿಳಿಸಿದರು.

ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ನೀಡಬೇಕೆಂದು ಒತ್ತಾಯಿಸಿ 10 ತಿಂಗಳಿಂದ ರೈತರು ಹೋರಾಟ ಮಾಡುತ್ತಿದ್ದಾರೆ. ಆದರೂ ಕೇಂದ್ರ ಸರ್ಕಾರ ಗಮನ ಹರಿಸುತ್ತಿಲ್ಲ. ಸರ್ಕಾರದ ಈ ನಿರ್ಲಕ್ಷ್ಯದ ಕಾರಣಕ್ಕಾಗಿಯೇ ಕನಿಷ್ಠ ಬೆಂಬಲ ಬೆಲೆಗಿಂತಲೂ ಕಡಿಮೆ ದರಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆಗಳಲ್ಲಿ ದಲ್ಲಾಳಿಗಳು ಕೃಷಿ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ. ರೈತರನ್ನು ಶೋಷಣೆ ಮಾಡುತ್ತಿವೆ. ಎಂಎಸ್‍ಪಿಗಿಂತಲೂ ಕಡಿಮೆ ದರಕ್ಕೆ ಖರೀದಿ ಮಾಡುವ ವರ್ತಕರ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶ ಇರುವಂತೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಜಿಲ್ಲೆಯಲ್ಲಿ ಮೆಕ್ಕೆಜೋಳ ಕೊಯ್ಲು ಆರಂಭವಾಗಿದ್ದು, ರೈತರು ಕೃಷಿ ಉತ್ಪನ್ನ ಮಾರುಕಟ್ಟೆಗೆ ಮೆಕ್ಕೆಜೋಳ ತರಲಾರಂಭಿಸಿದ್ದಾರೆ. ಹೀಗಾಗಿ, ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಹುಚ್ಚವ್ವನಹಳ್ಳಿ ಪ್ರಕಾಶ್, ಮುಖಂಡರಾದ ಗಂಗನಕಟ್ಟೆ ಷಣ್ಮುಖಪ್ಪ, ಗುಮ್ಮನೂರು ಬಸವರಾಜ್, ನಾಗರಾಜ ತುಂಬಿಗೆರೆ, ಕೆಂಚಮ್ಮನಹಳ್ಳಿ ಹನುಮಂತಪ್ಪ, ಆಲೂರು ಪರಶುರಾಮ್, ಶಿವಶಂಕರ್, ಕೃಷ್ಣಮೂರ್ತಿ, ನಾಗಪ್ಪ, ಚಿಕ್ಕಬೂದಾಳ್ ಭರತ್‍ಸಿಂಹ, ಕಾಡಜ್ಜಿ ಪ್ರಕಾಶ್, ನೀರ್ಥಡಿ ಭೀಮಣ್ಣ, ನೀರ್ಥಡಿ ತಿಪ್ಪೇಶ್, ಕಿತ್ತೂರು ಹನುಮಂತಪ್ಪ, ಕೋಲುಕುಂಟೆ ಹುಚ್ಚಂಗ್ಯಪ್ಪ, ಎಂ.ಎಚ್ ಸಿದ್ದಪ್ಪ ನಾಯಕ ಅವರೂ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.