ವಿದ್ಯಾವಂತರಿಗೆ ಉದ್ಯೋಗ ದೊರಕಿಸಿಕೊಡಿ

7
ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ

ವಿದ್ಯಾವಂತರಿಗೆ ಉದ್ಯೋಗ ದೊರಕಿಸಿಕೊಡಿ

Published:
Updated:
Deccan Herald

ದಾವಣಗೆರೆ: ಕೌಶಲ ಅಭಿವೃದ್ಧಿಗೆ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚಿಸಿ ಉದ್ಯೋಗ ಮೇಳ ಆಯೋಜಿಸಬೇಕು. ಆ ಮೂಲಕ ನಿರುದ್ಯೋಗಿ ವಿದ್ಯಾವಂತರಿಗೆ ಉದ್ಯೋಗ ದೊರಕಿಸಿಕೊಡಬೇಕು ಎಂದು ಪ್ರಾದೇಶಿಕ ಆಯುಕ್ತ ಶಿವಯೋಗಿ ಕಳಸದ ಸೂಚಿಸಿದರು.

ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ‘ಬೆಂಗಳೂರು ಭಾಗದ ಕಂಪನಿಗಳ ಅಧಿಕಾರಿಗಳನ್ನು ಜಿಲ್ಲಾ ಮಟ್ಟಕ್ಕೆ ಕರೆಸಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ದೊರೆಯುವಂತೆ ನೋಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಉದ್ಯೋಗಮೇಳ ಮಾಡಿದಾಗ ನೂರರಲ್ಲಿ ಕನಿಷ್ಠ 10 ಮಂದಿಗಾದರೂ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ಉದ್ಯೋಗ ವಿನಿಮಯ ಅಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಗಮನ ನೀಡಬೇಕು. ಸರೋಜಿನಿ ಮಹಿಷಿ ವರದಿ ಪ್ರಕಾರ ಸ್ಥಳೀಯ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಲಭ್ಯವಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಹಾಗೂ ಹೋಬಳಿ ಹಂತಕ್ಕೆ ಹೋಗಿ ಸಾರ್ವಜನಿಕರ ಸಂಪರ್ಕ ಸಭೆ ನಡೆಸಿ, ಕುಂದು ಕೊರತೆಗಳನ್ನು ನಿವಾರಿಸಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.

ರೈತರ ₹ 1 ಲಕ್ಷದವರೆಗಿನ ಸಾಲ ಮನ್ನಾ ಆಗಿದೆ. ಯಾವುದೇ ರೈತರು ಆತ್ಮಹತ್ಯೆ ಮಾಡಿಕೊಳ್ಳದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗ, ಅಲ್ಪಸಂಖ್ಯಾತರ ಇಲಾಖೆಗಳ ಹಾಸ್ಟೇಲ್‌ಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆದು ಆಯುಕ್ತರು, ನಗರ ಪ್ರದೇಶಗಳಲ್ಲಿ ನಿವೇಶನ ಸಿಗುವುದು ಕಷ್ಟ. ಹೀಗಾಗಿ ಇರುವ ನಿವೇಶನದಲ್ಲೇ ಬಹುಮಹಡಿಯ ಕಟ್ಟಡ ನಿರ್ಮಿಸಬೇಕು ಎಂದು ಸಲಹೆ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಎಲ್ಲಾ ಇಲಾಖೆಗಳ ಹಾಸ್ಟೆಲ್‌ಗಳನ್ನು ಒಂದೇ ಕಡೆ ತರಲು ‘ಹಾಸ್ಟೆಲ್ ಸಂಕೀರ್ಣ’ ನಿರ್ಮಿಸಲು ಉದ್ದೇಶಿಸಲಾಗಿದೆ ಎಂದರು.

ಇಲಾಖೆಯಲ್ಲಿ ಸರ್ಕಾರಿ ಸರ್ವೇಯರ್‌ಗಳ ಕೊರತೆಯಿದ್ದು, 43 ಹೆಚ್ಚುವರಿ ಸರ್ವೇಯರ್‌ಗಳನ್ನು ನೀಡಿದಾರೆ. ತರಬೇತಿ ಪಡೆಯುತ್ತಿದ್ದಾರೆ. ಶೀಘ್ರವೇ ಸೂಳೆಕೆರೆಯನ್ನು ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಲಾಗುವುದು ಎಂದು ಜಿಲ್ಲಾ ಭೂಮಾಪನ ಇಲಾಖಾ ಉಪ ನಿರ್ದೇಶಕರು ತಿಳಿಸಿದರು.

‘ನಿವೇಶನ ರಹಿತರಿಗೆ ಸರ್ಕಾರಿ ಜಾಗ ಇದ್ದರೆ ಕೂಡಲೇ ನಿವೇಶನ ನೀಡಿ. ಇಲ್ಲದಿದ್ದರೆ ಖಾಸಗಿಯವರಿಂದ ಖರೀದಿಸಿ ಕೊಡಿ’ ಎಂದು ಪ್ರಾದೇಶಿಕ ಆಯುಕ್ತರು ಹೇಳಿದರು.

ಜಗಳೂರು ಮತ್ತು ಹರಪನಹಳ್ಳಿ ತಾಲ್ಲೂಕಿನ ಕೆಲವು ಹಳ್ಳಿಗಳಲ್ಲಿ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಪೂರೈಸಲಾಗುತ್ತಿದೆ. ಟ್ಯಾಂಕರ್‌ಗಳಿಗೆ ಜಿಪಿಎಸ್‌ ಅಳವಡಿಸಲಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯ್ತಿ ಸಿಇಒ ಎಸ್‌. ಅಶ್ವತಿ, ಉಪಕಾರ್ಯದರ್ಶಿ ಷಡಕ್ಷರಪ್ಪ, ಯೋಜನಾಧಿಕಾರಿ ಬಸನಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಅಂಕಿ– ಅಂಶಗಳು

92 ಗ್ರಾಮಗಳಲ್ಲಿ ಸ್ಮಶಾನಕ್ಕೆ ಸರ್ಕಾರಿ ಜಾಗ ಇಲ್ಲ

₹ 1 ಕೋಟಿ ಸ್ಮಶಾ ಭೂಮಿ ಅಭಿವೃದ್ಧಿಗೆ ನೀಡಿರುವ ಅನುದಾನ

₹ 35 ಸಾವಿರ ಶೌಚಾಲಯ ನಿರ್ಮಾಣಕ್ಕೆ ನರೇಗಾದಡಿ ನೀಡುವ ಸಹಾಯಧನ

Tags: 

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !