ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಿಂದ ಖಾಸಗಿ ವಿದ್ಯಾರ್ಥಿಗಳಿಗೆ ದ್ವಿತೀಯ ಪಿಯು ಪರೀಕ್ಷೆ

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ
Last Updated 14 ಆಗಸ್ಟ್ 2021, 5:31 IST
ಅಕ್ಷರ ಗಾತ್ರ

ದಾವಣಗೆರೆ:ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶವನ್ನು ತಿರಸ್ಕರಿಸಿ, ಪುನಃ ಪರೀಕ್ಷೆ ಬರೆಯಲು ಆಸಕ್ತಿ ತೋರಿದ ವಿದ್ಯಾರ್ಥಿಗಳಿಗೆ ಹಾಗೂ ಖಾಸಗಿಯಾಗಿ ಪರೀಕ್ಷೆ ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಆಗಸ್ಟ್ 19ರಿಂದ ಸೆ 3ರವರೆಗೆ ಕೋವಿಡ್ ಮಾರ್ಗಸೂಚಿಯನ್ನು ಪಾಲಿಸಿಕೊಂಡು, ಅಚ್ಚುಕಟ್ಟಾಗಿ ನಡೆಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇ‌ಶ ಬೀಳಗಿ ಅಧಿಕಾರಿಗಳಿಗೆ ಸೂಚಿಸಿದರು.

‘ಜಿಲ್ಲೆಯ 5 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಟ್ಟು 368 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ. ಕೋವಿಡ್ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ, ಪರೀಕ್ಷಾ ಕೇಂದ್ರಗಳಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಮಾಡಬೇಕು ಹಾಗೂ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ನೀಡುವುದರ ಜೊತೆ ಸೋಂಕಿನ ಲಕ್ಷಣಗಳಿರುವ ವಿದ್ಯಾರ್ಥಿಗಳನ್ನು ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿ ಕೋವಿಡ್ ಮಾರ್ಗಸೂಚಿ ಅನುಸರಿಸಿ ಪರೀಕ್ಷೆ ನಡೆಸಬೇಕು’ ಎಂದು ಅವರು ಸಲಹೆ ನೀಡಿದರು.

‘ಈಗಾಗಲೇ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಪರೀಕ್ಷಾ ಕೇಂದ್ರಗಳಿಗೆ ಪರೀಕ್ಷೆ ಮುಗಿಯುವವರೆಗೆ ಪ್ರತಿದಿನ ಹಾಗೂ ಪರೀಕ್ಷಾ ಗೌಪ್ಯ ವಸ್ತುಗಳನ್ನು ಇಡಲಾಗಿರುವ ಖಜಾನೆಗೆ ಪೂರ್ಣಾವಧಿ ಪೊಲೀಸ್ ಬಂದೋಬಸ್ತ್ ಮಾಡಲಾಗುವುದು. ಅಲ್ಲದೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಪರೀಕ್ಷಾ ಕೇಂದ್ರಗಳಿಗೆ ಮೊಬೈಲ್ ಹಾಗೂ ಇತರೆ ವಿದ್ಯುನ್ಮಾನ ಉಪಕರಣ ತರುವುದನ್ನು ಕಡ್ಡಾಯವಾಗಿ ನಿಷೇಧಿಸಿದ್ದು, ವಿದ್ಯಾರ್ಥಿಗಳು ಕೋವಿಡ್ ನಿಯಮಾವಳಿಗಳನ್ನು ಪಾಲಿಸುವುದರ ಜೊತೆಗೆ, ತಪ್ಪದೇ ಪರೀಕ್ಷಾ ಗುರುತಿನ ಚೀಟಿಯನ್ನು ತರಬೇಕು. ಕೊಠಡಿಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಅಗತ್ಯವಿದ್ದಲ್ಲಿ ಮನೆಯಿಂದಲೇ ನೀರಿನ ಬಾಟಲಿಯನ್ನು ತರಬೇಕು’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್, ಡಿಎಚ್‍ಒ ನಾಗರಾಜು, ಡಿಡಿಪಿಯು ಶಿವರಾಜು ಎಂ., ತಹಶಿಲ್ದಾರ್ ಗಿರೀಶ್ ಅವರೂ ಸಭೆಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT