ಶುಕ್ರವಾರ, ಡಿಸೆಂಬರ್ 4, 2020
25 °C
ತಾಲ್ಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಬೈರತಿ ಬಸವರಾಜ್‌

ಶೀಘ್ರ ಭತ್ತ, ಮೆಕ್ಕೆಜೋಳ ಖರೀದಿ ಕೇಂದ್ರ: ಸಚಿವ ಬೈರತಿ ಬಸವರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚನ್ನಗಿರಿ: ‘ಜಿಲ್ಲೆಯಲ್ಲಿ ಭತ್ತ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಪ್ರಾರಂಭಕ್ಕಾಗಿ ಈಗಾಗಲೇ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿದ್ದೇನೆ’ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತದಿಂದ ಶುಕ್ರವಾರ ನಡೆದ ತಾಲ್ಲೂಕು ಮಟ್ಟದ ಜನಸ್ಪಂದನಾ ಹಾಗೂ ವಿವಿಧ ಕಾಮಗಾರಿಗಳ ಭೂಮಿಪೂಜೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಶೀಘ್ರದಲ್ಲಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸುವ ಮೂಲಕ ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಂಬಲ ಬೆಲೆಯನ್ನು ನೀಡಲು ಸರ್ಕಾರ ಬದ್ಧ. ರೈತರು ಎದೆಗುಂದಬಾರದು’ ಎಂದು ತಿಳಿಸಿದರು.

‌ಕೊರೊನಾ ಸಂದರ್ಭದಲ್ಲಿಯೂ ಚನ್ನಗಿರಿ ತಾಲ್ಲೂಕಿನ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಅನುದಾನವನ್ನು ನೀಡಿರುವುದು ಅಭಿನಂದನಾರ್ಹ ಎಂದರು.

‘ಕೊರೊನಾ ಕಾರಣ ವಿಧಿಸಿದ ಲಾಕ್‌‌ಡೌನ್ ಅವಧಿಯಿಂದ ಇದುವರೆಗೆ ಜಿಲ್ಲೆಗೆ 25 ಬಾರಿ ಭೇಟಿ ನೀಡಿ, ಜಿಲ್ಲೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ತಾಲ್ಲೂಕು ಅಭಿವೃದ್ಧಿಯ ಪಥದತ್ತ ದಾಪುಗಾಲು ಇಟ್ಟಿರುವುದು ಹೆಮ್ಮೆಯ ಸಂಗತಿ. ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ಬರಲಿದ್ದು, ಎಲ್ಲ ಚುನಾವಣೆಗಳಲ್ಲೂ ಬಿಜೆಪಿ ಉತ್ತಮ ಸಾಧನೆ ಮಾಡಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಈ ಬಾರಿ ದೀಪಾವಳಿ ಹಬ್ಬವನ್ನು ಪಟಾಕಿ ಸಿಡಿಸದೇ ದೀಪಗಳನ್ನು ಹಚ್ಚುವ ಮೂಲಕ ಕೊರೊನಾವನ್ನು ಹೊಡೆದೋಡಿಸುವ ಕಾರ್ಯ ಮಾಡೋಣ’ ಎಂದು ಹೇಳಿದರು.

ಸಂಸದ ಜಿ.ಎಂ. ಸಿದ್ದೇಶ್ವರ, ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಇಳಿಮುಖವಾಗುತ್ತಿರುವುದು ಸಮಾಧಾನದ ಸಂಗತಿ. ಕೊರೊನಾ ಸೋಂಕು ತಡೆಗಟ್ಟಲು ಈ ಬಾರಿ ದೀಪಾವಳಿ ಹಬ್ಬವನ್ನು ದೀಪ ಹಚ್ಚುವ ಮೂಲಕ ಆಚರಿಸೋಣ’ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಸಿಗಬಹುದಾದ ಸರ್ಕಾರಿ ಸೌಲಭ್ಯಗಳನ್ನು ಜನಸ್ಪಂದನ ಕಾರ್ಯಕ್ರಮದ ಮೂಲಕ ಜನರಿಗೆ ಮನೆ ಬಾಗಿಲಿಗೆ ತಲುಪಿಸಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಸಾಬೂನು ಮತ್ತು ಮಾರ್ಜಕ ನಿಗಮ ಮಂಡಳಿ ಅಧ್ಯಕ್ಷ, ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ‘ಇಂದು ವಿವಿದ ಇಲಾಖೆಗಳಿಂದ 1,211 ಫಲಾನುಭವಿಗಳಿಗೆ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಚಿಕ್ಕಮಾಡಾಳ್ ಗ್ರಾಮದಲ್ಲಿ ₹ 20 ಕೋಟಿ ವೆಚ್ಚದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ನಿರ್ಮಿಸಲು ಭೂಮಿಪೂಜೆ ನೆರವೇರಿಸಲಾಗಿದೆ. ‌₹ 3 ಕೋಟಿ ವೆಚ್ಚದಲ್ಲಿ ಆಯುಷ್ ಆಸ್ಪತ್ರೆ, ಶಿಕ್ಷಣ ಇಲಾಖೆಗೆ ₹ 4.30 ಕೋಟಿ, ತೋಟಗಾರಿಕೆ ಇಲಾಖೆ ₹ 20 ಲಕ್ಷ, ದೇವರಹಳ್ಳಿ ಗ್ರಾಮದಲ್ಲಿ ಕೋಲ್ಡ್ ಸ್ಟೋರೇಜ್ ನಿರ್ಮಾಣಕ್ಕೆ ₹ 7.5 ಕೋಟಿ ಅನುದಾನ ಬಿಡುಗಡೆಯಾಗಿದೆ’ ಎಂದು ಹೇಳಿದರು.

ಪಟ್ಟಣದಲ್ಲಿ ಒಳ ಚರಂಡಿ ನಿರ್ಮಾಣಕ್ಕೆ ₹ 87 ಕೋಟಿ ಅನುದಾನವನ್ನು ನಗರಾಭಿವೃದ್ಧಿ ಇಲಾಖೆ ಈಗಾಗಲೇ ಬಿಡುಗಡೆ ಮಾಡಲು ಅನುಮತಿಯನ್ನು ನೀಡಿದೆ. ಶೀಘ್ರದಲ್ಲಿ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಾಯಕೊಂಡ ಶಾಸಕ ಪ್ರೊ.ಎನ್. ಲಿಂಗಣ್ಣ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ದೀಪಾ ಜಗದೀಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಕವಿತಾ ಕಲ್ಲೇಶ್, ಸಾಕಮ್ಮ, ಲೋಕೇಶ್ವರ್, ಮಂಜುಳ ಟಿ.ವಿ. ರಾಜು, ಕೆಂಚಪ್ಪ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು