ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಬಿಜೆಪಿ ಅಭ್ಯರ್ಥಿ ಬದಲಿಸಲು ಪಟ್ಟು; ಸಮಾವೇಶದಿಂದ ರೇಣುಕಾಚಾರ್ಯ ಬಣ ದೂರ

ಸಮಾವೇಶದಿಂದ ದೂರ ಉಳಿಯಲು ನಿರ್ಧಾರ
Published 17 ಮಾರ್ಚ್ 2024, 14:55 IST
Last Updated 17 ಮಾರ್ಚ್ 2024, 14:55 IST
ಅಕ್ಷರ ಗಾತ್ರ

ದಾವಣಗೆರೆ: ‘ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಾಗಬೇಕು’ ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬಣ, ‘ಶಿವಮೊಗ್ಗದಲ್ಲಿ ಸೋಮವಾರ (ಮಾ.18) ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಬಿಜೆಪಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳುವುದಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಭಾನುವಾರ ಮತ್ತೊಂದು ಸುತ್ತಿನ ಸಭೆ ನಡೆಸಿದ ಬಳಿಕ ಮಾತನಾಡಿದ ಮಾಜಿ ಸಚಿವ ಎಸ್‌.ಎ. ರವೀಂದ್ರನಾಥ್, ‘ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮೆಲ್ಲರ ಬಯಕೆ. ಸಂಸದ ಜಿ.ಎಂ. ಸಿದ್ದೇಶ್ವರ ಅವರ ಕುಟುಂಬಕ್ಕೆ ಟಿಕೆಟ್ ಕೊಟ್ಟರೆ ಪಕ್ಷಕ್ಕೆ ಸೋಲಾಗಲಿದೆ. ಬೇರೆಯವರಿಗೆ ಟಿಕೆಟ್ ನೀಡಬೇಕು’ ಎಂದು ಒತ್ತಾಯಿಸಿದರು.

‘ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಸಂಸದ ಜಿ.ಎಂ. ಸಿದ್ದೇಶ್ವರ ಕಾರಣ. ನಾವು ಅವರಿಗೆ ಬೆಂಬಲ ನೀಡುವುದಿಲ್ಲ. ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಬಗ್ಗೆ ಮೂರು ದಿನಗಳ ಬಳಿಕ ಸಭೆ ಸೇರಿ ನಿರ್ಧರಿಸಲಾಗುವುದು’ ಎಂದು ಹೇಳಿದರು.

‘ರಾಜಕಾರಣದಲ್ಲಿ ಯಾರಿಗೆ ಯಾರು ಸೆಡ್ಡು ಹೊಡೆಯುತ್ತಾರೆ ಗೊತ್ತಿಲ್ಲ. ಆದರೆ ಅಭ್ಯರ್ಥಿ ಬದಲಾಗಬೇಕು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿಗೆ ನಾವು ಹೋಗುವುದಿಲ್ಲ. ಸಂಸದರು ಕಾರ್ಯಕರ್ತರ ಜೊತೆ ನಡೆದುಕೊಳ್ಳುವ ರೀತಿಯನ್ನು ಈಗಾಗಲೇ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದು ಹೇಳಿದರು.

ಮಾಜಿ ಸಚಿವ ಕರುಣಾಕರ ರೆಡ್ಡಿ ಮಾತನಾಡಿ, ‘ ದಾವಣಗೆರೆ ಕ್ಷೇತ್ರದ ಅಭ್ಯರ್ಥಿ ಬದಲಾಗಬೇಕು. ನಿನ್ನೆ ಹರಪನಹಳ್ಳಿಯಲ್ಲಿ ನಡೆದ ಬಿಜೆಪಿ ಪದಗ್ರಹಣ ಸಮಾರಂಭದಲ್ಲಿ ಪೊಲೀಸರನ್ನು ಕರೆಯಿಸಿ ನಿಷ್ಟಾವಂತ ಕಾರ್ಯಕರ್ತರನ್ನು ಹೊರಗೆ ಕಳುಹಿಸಿದ್ದಾರೆ. ನಾನು ಇಷ್ಟು ದಿವಸವಾದರೂ ಒಬ್ಬರು ಪೊಲೀಸರನ್ನು ಕರೆಸಿಲ್ಲ’ ಎಂದು ಆರೋಪಿಸಿದರು.

‘ವಿಧಾನಸಭಾ ಚುನಾವಣೆ ವೇಳೆ ನಮ್ಮ ವಿರುದ್ಧ ಕೆಲಸ ಮಾಡಿದವರಿಗೆ ಪಟ್ಟ ಕಟ್ಟುತ್ತಿದ್ದಾರೆ. ಸಂಸದರು ಏನು ಮಾಡಿದ್ದಾರೆ ಎಂದು ಜನರಿಗೆ ಗೊತ್ತಿದೆ. ಇದಕ್ಕೆ ನಮ್ಮ ಬಳಿ ಸಾಕ್ಷಿ ಇದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

‘ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿ ಆಗಬೇಕು ಎನ್ನುವುದು ನಮ್ಮೆಲ್ಲರ ಆಶಯ. ‌ಆದರೆ ದಾವಣಗೆರೆಯಲ್ಲಿ ಮಾತ್ರ ಜಿ.ಎಂ. ಸಿದ್ದೇಶ್ವರ ಅವರ ಕುಟುಂಬ ಹೊರತುಪಡಿಸಿ ಬೇರೆಯವರಿಗೆ ಟಿಕೇಟ್ ನೀಡಬೇಕು ಎನ್ನುವುದು ನಮ್ಮ ಒತ್ತಾಯ. ಸರ್ವಾನುಮತದಿಂದ ನಾವು ನಿರ್ಧಾರ ಮಾಡಿದ್ದೇವೆ. ಕಾಂಗ್ರೆಸ್‌ಗೆ ಲಾಭ ಮಾಡಲು ನಾವು ಹೊರಟಿಲ್ಲ’ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಎಂ.ಪಿ. ರೇಣುಕಾಚಾರ್ಯ, ಜಿ.ಕರುಣಾಕರ ರೆಡ್ಡಿ, ಬಿ.ಜಿ. ಅಜಯ್‌ಕುಮಾರ್, ಲೋಕಿಕೆರೆ ನಾಗರಾಜ್, ಮಾಡಾಳ್ ಮಲ್ಲಿಕಾರ್ಜುನ, ಮಾಜಿ ಶಾಸಕ ಬಸವರಾಜ ನಾಯ್ಕ, ಡಾ.ಟಿ.ಜಿ. ರವಿಕುಮಾರ್ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT