ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಯಾನಿಟರಿ ಪ್ಯಾಡ್‌: ವೈಜ್ಞಾನಿಕ ವಿಲೇವಾರಿ ಅಗತ್ಯ; ಶ್ರೀದೇವಿ

Published 1 ಮಾರ್ಚ್ 2024, 5:29 IST
Last Updated 1 ಮಾರ್ಚ್ 2024, 5:29 IST
ಅಕ್ಷರ ಗಾತ್ರ

ದಾವಣಗೆರೆ: ‘ಸ್ಯಾನಿಟರಿ ಪ್ಯಾಡ್‌ಗಳನ್ನು ಸಂಸ್ಕರಿಸಿ ವೈಜ್ಞಾನಿಕ ರೀತಿಯಲ್ಲಿ ವಿಲೇವಾರಿ ಮಾಡುವುದು ಅಗತ್ಯ. ಅದನ್ನು ಎಲ್ಲೆಂದರಲ್ಲಿ ಎಸೆಯುವುದರಿಂದ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತದೆ’ ಎಂದು ಮಕ್ಕಳ ಸಂಯೋಜಕಿ ಶ್ರೀದೇವಿ ಹೇಳಿದರು.

ಇಲ್ಲಿನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಗುರುವಾರ ಜಿಲ್ಲಾ ಪೊಲೀಸ್ ಇಲಾಖೆ, ಹಸಿರು ದಳ ಸಂಸ್ಥೆ ಸಹಯೋಗದಲ್ಲಿ ಜಿಲ್ಲೆಯ ಮಹಿಳಾ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗೆ ಹಮ್ಮಿಕೊಂಡಿದ್ದ ಘನತ್ಯಾಜ್ಯ ನಿರ್ವಹಣೆ ಮತ್ತು ಋತುಚಕ್ರ ನಿರ್ವಹಣೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

‘ಮಹಿಳೆಯರು ತಮ್ಮ ಮುಟ್ಟಿನ ಸಮಯದಲ್ಲಿ ಬಳಸುವ ಸ್ಯಾನಿಟರಿ ಪ್ಯಾಡ್‌ಗಳು ಹಾನಿಕರವಾಗಿದ್ದು, ತೆರೆದ ಜಾಗಗಳಲ್ಲಿ ಎಸೆಯಬಾರದು. ಇವು ಕೊಳೆಯದೇ ಉಳಿಯುವ ಕಾರಣ ಸೋಂಕುಗಳನ್ನು ಹರಡುತ್ತವೆ. ಇವುಗಳ ಬಳಕೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಹಸಿರುದಳ ಸಂಸ್ಥೆಯು ಶ್ರಮಿಸುತ್ತಿದೆ. ಮುಟ್ಟಿನ ನೈರ್ಮಲ್ಯ ಮತ್ತು ಮುಟ್ಟಿನ ಸಮಯದಲ್ಲಿ ಬಳಸುವ ಪ್ಯಾಡ್‌ಗಳ ಮರುಬಳಕೆಯ ಬಗ್ಗೆ ನಗರ ಮತ್ತು ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಗೆ ಸಂಸ್ಥೆಯಿಂದ ತರಬೇತಿ ನೀಡಲಾಗುತ್ತಿದೆ’ ಎಂದರು.

ಕಾರ್ಯಾಗಾರ ಉದ್ಘಾಟಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್‌, ‘ಮಹಿಳೆಯರು ನೈಸರ್ಗಿಕ ಕ್ರಿಯೆಗಳಲ್ಲಿ ಒಂದಾದ ಮುಟ್ಟಿನ ವಿಷಯದಲ್ಲಿ ಮುಕ್ತವಾಗಿ ಚರ್ಚಿಸುವುದು ಅಗತ್ಯ. ಅದರ ಬಗ್ಗೆ ಮಾಹಿತಿ ಪಡೆಯಬೇಕು. ಆದರೂ ಮಹಿಳೆಯರು ಇಂದಿಗೂ ಈ ಬಗ್ಗೆ ಮುಜುಗರ ಪಟ್ಟುಕೊಳ್ಳುತ್ತಾರೆ. ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಪೋಲಿಸರೂ ಮುಟ್ಟಿನ ನೈರ್ಮಲ್ಯ ಮತ್ತು ಋತುಚಕ್ರ ನಿರ್ವಹಣೆ ಬಗ್ಗೆ ಅರಿವು ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದೆ. ಇದರ ಸದುಪಯೋಗ ಪಡೆಯಬೇಕು‘ ಎಂದು ಸಲಹೆ ನೀಡಿದರು.

ಬೆಂಗಳೂರಿನ ಸ್ತ್ರೀರೋಗ ತಜ್ಞೆ ಡಾ. ಮೀನಾಕ್ಷಿ ವಿಡಿಯೊ ಸಂವಾದದ ಮೂಲಕ ಮರುಬಳಕೆಯ ಪ್ಯಾಡ್‌ಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಾಗಾರದಲ್ಲಿ ಹಸಿರು ದಳ ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕ ಗುರುರಾಜ್ ಎಚ್.ಎ., ತರಬೇತುದಾರರಾದ ನೂರ್ ಜಹಾನ್, ಹಸಿರುದಳ ಸಂಸ್ಥೆ ಸಮುದಾಯ ಸಂಘಟಕಿ ಚೈತ್ರಾ ಸೇರಿದಂತೆ ಮಹಿಳಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT