ಗುರುವಾರ , ಜುಲೈ 7, 2022
20 °C
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ಸಭೆ

ಫೆ.13ರಿಂದ ಸಂತ ಸೇವಾಲಾಲ್ ಜಯಂತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಫೆ.13ರಿಂದ 15ರವರೆಗೆ ಹೊನ್ನಾಳಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸಂತ ಸೇವಾಲಾಲ್ ಜಯಂತಿ ಆಚರಿಸಲು ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ‘ಪ್ರತಿವರ್ಷದಂತೆ ಈ ವರ್ಷವೂ  ಸೂರಗೊಂಡನಕೊಪ್ಪದಲ್ಲಿ ಸೇವಾಲಾಲ್ ಜಯಂತಿಯನ್ನು ಅದ್ದೂರಿಯಾಗಿ ಆಚರಿಸುವ ಸಂಬಂಧ ಇಲಾಖೆಯ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು. ಈ ಬಾರಿ ₹3 ಲಕ್ಷದಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ’ ಎಂದು ತಿಳಿಸಿದರು.

ಸಂತ ಸೇವಾಲಾಲ್ ಜಯಂತಿ ಆಚರಣೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ₹1ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲೂ ಸೇವಾಲಾಲ್ ಜಯಂತಿಗೆ ಹಾಗೂ ಜಂಜಾರ ಜನಾಂಗದ ಅಭಿವೃದ್ಧಿಗೆ ಅನುದಾನ ನೀಡಿದ್ದರು ಎಂದು ಸ್ಮರಿಸಿದರು.

ಸೇವಾಲಾಲ್ ಜಯಂತಿಗೆ ಬರುವ ಭಕ್ತರಿಗೆ ಜಿಲ್ಲಾಡಳಿತದಿಂದ ಸಾರಿಗೆ, ಕುಡಿಯುವ ನೀರು, ಶೌಚಾಲಯ, ಉತ್ತಮ ರಸ್ತೆ ಸೇರಿ ಯಾವುದೇ ಅವ್ಯವಸ್ಥೆಯಾಗದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕರ್ನಾಟಕ ರಾಜ್ಯ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ್ ಮಾತನಾಡಿ, ‘ಈ ವರ್ಷ ಆಚರಿಸಲಿರುವ 281ನೇ ಸಂತ ಸೇವಾಲಾಲ್ ಜಯಂತಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬರಲಿದ್ದು, ಕಾರ್ಯಕ್ರಮವು ತುಂಬಾ ವ್ಯವಸ್ಥಿತವಾಗಿ ಕೂಡಿರಬೇಕು’ ಎಂದು ತಿಳಿಸಿದರು.

‘ದೇಶದ ವಿವಿಧ ಭಾಗದ ಲಂಬಾಣಿ ಸಮುದಾಯದ ಭಕ್ತರ ಜೊತೆ ಇತರೆ ಸಮುದಾಯಗಳ ಭಕ್ತರು ಬರಲಿದ್ದಾರೆ. ಬರುವ ಭಕ್ತರಿಗೆ ಪ್ರಸಾದ, ವ್ಯವಸ್ಥೆ ಹಾಗೂ ಮೂಲಸೌಲಭ್ಯ ಉತ್ತಮವಾಗಿರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಯಶೋದಮ್ಮ ಮರುಳಪ್ಪ, ಸೇವಾಲಾಲ್ ಪ್ರತಿಷ್ಠಾನದ ಅಧ್ಯಕ್ಷ ರುದ್ರಪ್ಪ ಲಮಾಣಿ, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮಾ ಬಸವಂತಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉಪವಿಭಾಗಾಧಿಕಾರಿ ಮಮತಾ ಹೊಸಗೌಡರ್, ಹೊನ್ನಾಳಿ ತಹಶೀಲ್ದಾರ್ ತುಷಾರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು