ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ | ಮಾ.1ರಿಂದ 33 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ

Published 27 ಫೆಬ್ರುವರಿ 2024, 15:31 IST
Last Updated 27 ಫೆಬ್ರುವರಿ 2024, 15:31 IST
ಅಕ್ಷರ ಗಾತ್ರ

ದಾವಣಗೆರೆ: ಮಾರ್ಚ್ 1ರಿಂದ ದ್ವಿತೀಯ ಪಿ.ಯು.ಸಿ. ಪರೀಕ್ಷೆಗಳು ಆರಂಭವಾಗುತ್ತಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಕ್ಕೆ ಅವಕಾಶ ನೀಡದೆ ಪಾರದರ್ಶಕ, ನಿಷ್ಪಕ್ಷಪಾತ ಮತ್ತು ಸುಸೂತ್ರವಾಗಿ ಪರೀಕ್ಷೆ ನಡೆಸಲು ಎಲ್ಲಾ ಸಿದ್ದತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ಸೂಚಿಸಿದರು.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆ ಕುರಿತು ಮಂಗಳವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಮಾ.1ರಿಂದ 22ರವರೆಗೆ ಜಿಲ್ಲೆಯಲ್ಲಿ ಒಟ್ಟು 33 ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಯಾವುದೇ ಕೊರತೆ ಇಲ್ಲದೇ ಪರೀಕ್ಷೆ ಬರೆಯಲು ಆಸನದ ವ್ಯವಸ್ಥೆ, ನೀರು, ಗಾಳಿ, ಬೆಳಕಿನ ವ್ಯವಸ್ಥೆಯನ್ನು ಸರಿಯಾಗಿ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಆತಂಕವಿಲ್ಲದೆ ಪರೀಕ್ಷೆಯನ್ನು ಬರೆಯಲು ಎಲ್ಲಾ ಪೂರಕ ವಾತಾವರಣ ಕಲ್ಪಿಸಬೇಕೆಂದು ಸೂಚಿಸಿದರು.

‘ದಾವಣಗೆರೆ ತಾಲ್ಲೂಕಿನಲ್ಲಿ 18 ಕೇಂದ್ರಗಳು, ಹರಿಹರದಲ್ಲಿ 4, ಜಗಳೂರಿನಲ್ಲಿ 3, ಚನ್ನಗಿರಿಯ  5, ಹೊನ್ನಾಳಿಯ 3 ಕೇಂದ್ರಗಳು ಸೇರಿದಂತೆ ಒಟ್ಟು 33 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಕೇಂದ್ರಗಳಲ್ಲಿ 21,088 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸ ವಿದ್ಯಾರ್ಥಿಗಳು 19,644 ಹಾಗೂ 422 ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ 1022 ಖಾಸಗಿ ವಿದ್ಯಾರ್ಥಿಗಳು ಇದ್ದಾರೆ. ಒಟ್ಟಾರೆ ಪರೀಕ್ಷೆ ಬರೆಯುವವರಲ್ಲಿ 9,980 ಗಂಡು, 11,108 ಹೆಣ್ಣು ಮಕ್ಕಳು ಇದ್ದಾರೆ. ಪರೀಕ್ಷಾ ಕೇಂದ್ರದೊಳಗೆ ಕರ್ತವ್ಯ ನಿರತ ಸಿಬ್ಬಂದಿ ಹೊರತುಪಡಿಸಿ ಇತರೆ ಯಾರಿಗೂ ಪ್ರವೇಶ ಇರುವುದಿಲ್ಲ’ ಎಂದರು.

ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ

‘33 ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತಿದ್ದು, ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಅಗತ್ಯ ಕ್ರಮ ವಹಿಸಲಾಗುವುದು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸೈಯ್ಯದಾ ಅಫ್ರೀನ್ ಭಾನು ಎಸ್.ಬಳ್ಳಾರಿ ಮಾತನಾಡಿ ‘ಹರಿಹರ ಕ್ಷೇತ್ರ ಶಿಕ್ಷಣಾಧಿಕಾರಿ ಸಭೆಗೆ ಗೈರಾಗಿದ್ದು, ಅವರಿಗೆ ನೋಟಿಸ್ ನೀಡುವಂತೆ ಸೂಚಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಮಾತಾನಾಡಿ, ‘ಖಜಾನೆಗಳಿಂದ ಪ್ರಶ್ನೆ ಪತ್ರಿಕೆಯನ್ನು ಸ್ವೀಕರಿಸಿ ಅವುಗಳನ್ನು ಪರೀಕ್ಷಾ ಕೇಂದ್ರಗಳಿಗೆ ವಿತರಿಸುವ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರನ್ನು ನೇಮಿಸಲಾಗುವುದು’ ಎಂದರು.

‘ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಮೊಬೈಲ್ ಸೇರಿದಂತೆ ಯಾವುದೇ ವಿದ್ಯುನ್ಮಾನ ಉಪಕರಣಗಳನ್ನು ಕಡ್ಡಾಯವಾಗಿ ತರುವಂತಿಲ್ಲ. ಪರೀಕ್ಷಾ ಕಾರ್ಯದಲ್ಲಿ ಭಾಗವಹಿಸುವ ಸಿಬ್ಬಂದಿ ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸಬೇಕು’ ಎಂದರು.

ಜಿಲ್ಲಾ ವಿಶೇಷ ವಿಭಾಗದ ಪೊಲೀಸ್ ನಿರೀಕ್ಷಕರು ಇಮ್ರಾನ್ ಬೇಗ್, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ರಾಜಶೇಖರ್, ಡಯಟ್ ಉಪನಿರ್ದೇಶಕರಾದ ಗೀತಾ, ಖಜಾನೆ ಇಲಾಖೆಯ ಉಪನಿರ್ದೇಶಕಿ ಪ್ರಭಾವತಿ, ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪುಪ್ಪಾವತಿ, ದಾವಣಗೆರೆಯ ಎಲ್ಲಾ ತಾಲ್ಲೂಕಿನ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪ್ರಾಂಶುಪಾಲರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT