ಸೋಮವಾರ, ಜೂನ್ 27, 2022
28 °C
170 ಹೆಕ್ಟೇರ್‌ನಲ್ಲಿ ಬಿತ್ತನೆ ಬೀಜ, ಮುಂಗಾರು ಮಳೆಯ ನಿರೀಕ್ಷೆಯಲ್ಲಿ ರೈತರು

2.43 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆ ಗುರಿ: ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ

ಡಿ.ಕೆ.ಬಸವರಾಜು Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೃಷಿ ಚಟುವಟಿಕೆ ಗರಿಗೆದರಿದೆ. ಕೋವಿಡ್‌ನಿಂದಾಗಿ ಲಾಕ್‌ಡೌನ್ ಇದ್ದರೂ ಕೃಷಿ ಚಟುವಟಿಕೆಗಳಿಗೆ ಯಾವುದೇ ಅಡ್ಡಿ ಇಲ್ಲ. ರೈತರು ತಮ್ಮ ಜಮೀನನ್ನು ಮುಂಗಾರು ಬಿತ್ತನೆಗೆ ಸಜ್ಜುಗೊಳಿಸುತ್ತಿದ್ದಾರೆ.

ಜಿಲ್ಲೆಯಲ್ಲಿ ಮೇ ತಿಂಗಳಲ್ಲಿ ಮೂರು ಬಾರಿ ಮಳೆಯಾಗಿದೆ. ಅಲ್ಲಲ್ಲಿ ಅಲ್ಪ–ಸ್ವಲ್ಪ ಮಳೆಯಾಗುತ್ತಿದೆ. ದಟ್ಟವಾಗಿ ಮೋಡ ಕವಿಯುತ್ತಿದ್ದು, ಮಳೆ ಬರುವ ಮುನ್ಸೂಚನೆಯನ್ನು ನೀಡುತ್ತಿದೆ. ಜಿಲ್ಲೆಯಲ್ಲಿ ಮೇ ತಿಂಗಳ ವಾಡಿಕೆ ಮಳೆಯು 63 ಮಿ.ಮೀ ಆಗಿದ್ದು, 92 ಮಿ.ಮೀ ಮಳೆ ಬಿದ್ದಿದೆ. ವಾಡಿಕೆ ಮಳೆಗೆ ಹೋಲಿಸಿದರೆ ಶೇ 46ರಷ್ಟು ಹೆಚ್ಚು ಮಳೆಯಾಗಿದೆ. ಮಾರ್ಚ್‌ ತಿಂಗಳಿನಿಂದ ಮೇವರೆಗೆ ಶೇ 27ರಷ್ಟು ಹೆಚ್ಚುವರಿ ಮಳೆಯಾಗಿದೆ.

ಜಿಲ್ಲೆಯಲ್ಲಿ ಜನವರಿ 1ರಿಂದ ಮೇ ತಿಂಗಳವರೆಗೆ 180 ಮಿ.ಮೀ (ವಾಡಿಕೆ ಮಳೆ 105 ಮಿ.ಮೀ) ಮಳೆ ಬಿದ್ದಿದೆ. ವಾಡಿಕೆ ಮಳೆಗೆ ಹೋಲಿಸಿದರೆ ಶೇ 71ರಷ್ಟು ಹೆಚ್ಚುವರಿ ಮಳೆಯಾಗಿದೆ. ಮುಂಗಾರು ಬಿತ್ತನೆಗೆ ಇದರಿಂದ ಅನುಕೂಲವಾಗಿದೆ.

ಜಿಲ್ಲೆಯಲ್ಲಿ ಮಳೆ ಬೀಳುತ್ತಿರುವುದರಿಂದ ಚನ್ನಗಿರಿ, ಜಗಳೂರು ಭಾಗದಲ್ಲಿ ಹತ್ತಿ, ಶೇಂಗಾ, ಹೊನ್ನಾಳಿ ಹಾಗೂ ನ್ಯಾಮತಿ ಭಾಗದಲ್ಲಿ ಶೇಂಗಾ ಬಿತ್ತನೆ ಆರಂಭವಾಗಿದೆ. ಮುಂಗಾರು ಮಳೆ ಶೀಘ್ರದಲ್ಲೇ ರಾಜ್ಯವನ್ನು ಪ್ರವೇಶಿಸಲಿದ್ದು, ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂಬ ನಂಬಿಕೆಯಿಂದ ಜಿಲ್ಲೆಯ ರೈತರು ಬಿತ್ತನೆ ಶುರು ಮಾಡಿದ್ದಾರೆ.

ಜಿಲ್ಲೆಯಲ್ಲಿ 2,43,698 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಗುರಿ ಇದ್ದು, 170 ಹೆಕ್ಟೇರ್‌ಗಳಲ್ಲಿ ಬಿತ್ತನೆ ಕಾರ್ಯ ಪೂರ್ಣಗೊಂಡಿದ್ದು, ಅವುಗಳಲ್ಲಿ 150 ಹೆಕ್ಟೇರ್‌ನಲ್ಲಿ ಹತ್ತಿ 20 ಹೆಕ್ಟೇರ್‌ನಲ್ಲಿ ಶೇಂಗಾ ಬಿತ್ತನೆಯಾಗಿದೆ.

‘ಜಿಲ್ಲೆಯಲ್ಲಿ ಮುಂಗಾರು ಹಂಗಾಮಿಗೆ 40,521 ಕ್ವಿಂಟಲ್ ಬಿತ್ತನೆ ಬೀಜಗಳ ಬೇಡಿಕೆ ಇದ್ದು, 46,923 ಕ್ವಿಂಟಲ್‌ ದಾಸ್ತಾನು ಇದೆ. ಆಯಾ ತಾಲ್ಲೂಕುಗಳಲ್ಲಿ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ. ಜೂನ್ ತಿಂಗಳಲ್ಲಿ 29,180 ಮೆಟ್ರಿಕ್ ಟನ್‌ ರಸಗೊಬ್ಬರಕ್ಕೆ ಬೇಡಿಕೆ ಇದ್ದು, 46,519 ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನು ಇದೆ’ ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ ಚಿಂತಾಲ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು