ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಮಾರ್ಗಸೂಚಿ ಅನ್ವಯ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಜ್ಜು

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಕೌಂಟರ್ ತೆರೆಯಲು ಜಿಲ್ಲಾಧಿಕಾರಿ ಸೂಚನೆ
Last Updated 12 ಜುಲೈ 2021, 15:58 IST
ಅಕ್ಷರ ಗಾತ್ರ

ದಾವಣಗೆರೆ: ಕೋವಿಡ್ ಮಾರ್ಗಸೂಚಿ ಅನ್ವಯ ಜುಲೈ 19 ಹಾಗೂ 22ರಂದು ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಹಾಗೂ ಅಧಿಕಾರಿಗಳ ಜೊತೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ‘ಕೋವಿಡ್ ಮಾರ್ಗಸೂಚಿಯಲ್ಲಿ ಲೋಪವಾಗದಂತೆ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು. ಕಳೆದ ವರ್ಷ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಿದಂತೆ ಅದೇ ಶಿಸ್ತಿನಿಂದ ಈ ವರ್ಷವೂ ಪರೀಕ್ಷೆ ನಡೆಸಬೇಕು. ಪ್ರತೀ ಪರೀಕ್ಷಾ ಕೇಂದ್ರಗಳಿಗೂ ಆರೋಗ್ಯ ತಪಾಸಣೆ ಕೌಂಟರ್ ತೆರೆಯಬೇಕು. ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಕೋವಿಡ್ ಲಸಿಕೆ ತೆಗೆದುಕೊಂಡು ಪರೀಕ್ಷೆಗೆ ಸಜ್ಜಾಗಬೇಕು’ ಎಂದು ಸೂಚಿಸಿದರು.

‘ಗ್ರಾಮೀಣ ಭಾಗದಲ್ಲಿಪರೀಕ್ಷಾ ಕೇಂದ್ರಗಳಿಗೆ ಸ್ಯಾನಿಟೈಸ್ ಮಾಡಲು ಅಲ್ಲಿನ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮಾಸ್ಕ್ ಕಡಿಮೆ ಇದ್ದರೆ ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಕ್ಕೂ ಆರೋಗ್ಯ ಸಹಾಯಕರು, ಲಸಿಕೆ ತೆಗೆದುಕೊಂಡಿರುವ ಸ್ವಯಂ ಸೇವಕರು ಹಾಗೂ ಇಬ್ಬರು ದೈಹಿಕ ಶಿಕ್ಷಣ ಶಿಕ್ಷಕರನ್ನು ನಿಯೋಜಿಸಬೇಕು’ ಎಂದು ಸೂಚಿಸಿದರು.

ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್:

ಪರೀಕ್ಷಾ ಕೇಂದ್ರದಗಳ 200 ಮೀಟರ್ ಸುತ್ತಲೂ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆ ಹಾಗೂ ಕಂಪ್ಯೂಟರ್‌ ಕೇಂದ್ರಗಳನ್ನು ತೆರೆಯದಂತೆ ನಿಷೇಧಾಜ್ಞೆ ಹೊರಡಿಸಲಾಗುವುದು. ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋ ಬಸ್ತ್ ಒದಗಿಸಬೇಕು ಎಂದು ಡಿವೈಎಸ್‌ಪಿ ಬಸವರಾಜ್ ಅವರಿಗೆ ಸೂಚಿಸಿದರು.

ಕೋವಿಡ್ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ:

‘ಕೋವಿಡ್ ದೃಢಪಟ್ಟ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಕೋವಿಡ್‌ ಕೇರ್ ಸೆಂಟರ್‌ಗಳನ್ನು ಬಳಸಿಕೊಳ್ಳಬೇಕು. ಪಾಸಿಟಿವ್ ಪ್ರಕರಣಗಳು ಕಡಿಮೆ ವರದಿಯಾಗುತ್ತಿರುವುದರಿಂದ ರೋಗಿಗಳು ಕಡಿಮೆ ಇರುತ್ತಾರೆ. ಅವರನ್ನು ಆಸ್ಪತ್ರೆಗೆ ವರ್ಗಾಹಿಸಿ, ಅದನ್ನು ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಿದ್ಧಪಡಿಸಿ ಇಟ್ಟುಕೊಳ್ಳಬೇಕು. ಅಲ್ಲದೇ ವಿದ್ಯಾರ್ಥಿಗಳಿಗೆ ಆರೋಗ್ಯ ಕಿಟ್ ಅನ್ನು ಒದಗಿಸಬೇಕು’ ಎಂದು ಸೂಚಿಸಿದರು.

ಆಂಬುಲೆನ್ಸ್‌ ವ್ಯವಸ್ಥೆ: ‘ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟ ವಿದ್ಯಾರ್ಥಿಗಳಿಗಾಗಿಯೇ ಪ್ರತಿ ತಾಲ್ಲೂಕಿನಲ್ಲೂ ಒಂದು ಹೆಚ್ಚುವರಿ ಆಂಬುಲೆನ್ಸ್ ಅನ್ನು ಮೀಸಲಿಡಬೇಕು. ಬೇರೆ ಯಾವುದೇ ಕಾರಣಕ್ಕೂ ಅದನ್ನು ಬಳಸಬಾರದು’ ಎಂದು ಹೇಳಿದರು.

ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ ಮಾತನಾಡಿ, ‘ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 14 ಮತ್ತು 15ರಂದು ಅಣಕು ಪರೀಕ್ಷೆ ಇದ್ದು, ಇದು ಕಡ್ಡಾಯವಲ್ಲ. ಸ್ವಇಚ್ಛೆಯಿಂದ ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಲಾಗುವುದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ, ಡಿವೈಎಸ್‌ಪಿ ಬಸವರಾಜ್,ಡಯಟ್ ಪ್ರಾಂಶುಪಾಲ ಎಚ್.ಕೆ.ಲಿಂಗರಾಜ್, ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಸಹ ನಿರ್ದೇಶಕ ಎಚ್. ಮಂಜುನಾಥ್, ಜಿಲ್ಲಾ ಖಜಾನೆ ಉಪನಿರ್ದೇಶಕಿ ಎಸ್‌. ಪ್ರಭಾವತಿ, ಪ್ರಾಚಾರ್ಯ ಎಚ್.ಕೆ. ಲಿಂಗರಾಜು, ಉಪನಿರ್ದೇಶಕರ ಕಚೇರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಬಿ.ಎಸ್‌. ಜಗದೀಶ್ವರಸಭೆಯಲ್ಲಿ ಇದ್ದರು.

ಅಂಕಿ ಅಂಶ

21,720:ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು

2,260:ಕೊಠಡಿಗಳ ಸಂಖ್ಯೆ

40:ಹೆಚ್ಚುವರಿ ಕೊಠಡಿಗಳು

2,647:ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ

125:ಬ್ಲಾಕ್ ಅಧೀಕ್ಷಕರು

120:ಮೊಬೈಲ್ ಸ್ವಾಧೀನಾಧಿಕಾರಿಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT