ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಷಯವಾರು ಶಿಕ್ಷಕರ ನೇಮಕ ಅಗತ್ಯ: ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ.ಸಿದ್ದಲಿಂಗಯ್ಯ

Last Updated 20 ಮಾರ್ಚ್ 2021, 5:42 IST
ಅಕ್ಷರ ಗಾತ್ರ

ದಾವಣಗೆರೆ: ಪ್ರಾಥಮಿಕ ಶಿಕ್ಷಣದಲ್ಲಿ ಮೂಲಭೂತ ವಿಷಯಗಳನ್ನು ಕಲಿಸುವುದರಲ್ಲಿ ಶಿಕ್ಷಕರು ಪರಿಪೂರ್ಣರಾಗಿಲ್ಲ. ಪ್ರತಿ ಪ್ರಾಥಮಿಕ ಶಾಲೆಗಳಿಗೆ ವಿಷಯವಾರು ಶಿಕ್ಷಕರನ್ನು ನೇಮಕ ಮಾಡುವ ಅಗತ್ಯವಿದೆ ಎಂದು ಯುಬಿಡಿಟಿ ತಾಂತ್ರಿಕ ಮಹಾವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಬಿ. ಸಿದ್ದಲಿಂಗಯ್ಯ ಸಲಹೆ ನೀಡಿದರು.

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ದಾವಣಗೆರೆ ವಿಜ್ಞಾನ ಕೇಂದ್ರ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹಾಗೂ ಬಾಪೂಜಿ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯಗಳ ಸಂಯುಕ್ತಾಶ್ರಯದಲ್ಲಿ ನಗರದ ಬಿಐಇಟಿ ಕಾಲೇಜಿನಲ್ಲಿ ಶುಕ್ರವಾರ ನಡೆದ ಗಣಿತ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಇವತ್ತಿನ ಶಿಕ್ಷಕರು ಅಪ್‌ಡೇಟ್ ಆಗಬೇಕು. ಇದು ಆಗದಿದ್ದರೆ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಲು ಸಮರ್ಥರಾಗುವುದಿಲ್ಲ. ಇದಕ್ಕಾಗಿ ಶಿಕ್ಷಕರು ನಿರಂತರ ಅಧ್ಯಯನದಲ್ಲಿ ತೊಡಗಬೇಕು.ಗಣಿತ ಕಷ್ಟ ಅಲ್ಲ. ವಿಷಯವನ್ನು ಆಳವಾಗಿ ಅಧ್ಯಯನ ಮಾಡುವುದರಿಂದ ವಿದ್ಯಾರ್ಥಿಗಳನ್ನು ಬಲವರ್ಧನೆಗೊಳಿಸಲು ಸಾಧ್ಯ’ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್. ಪರಮೇಶ್ವರಪ್ಪ, ‘ಕೋವಿಡ್ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶ ಸವಾಲಿನ ಕೆಲಸವಾಗಿದ್ದು, 5 ತಿಂಗಳಲ್ಲಿ ಪಠ್ಯವನ್ನು ಮುಗಿಸಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಬೇಕಿದೆ. ವಿದ್ಯಾರ್ಥಿಗಳು ಫೇಲಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಶಿಕ್ಷಕರ ಮೇಲಿದೆ’ ಎಂದರು.

ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಪ್ರಿಯಾಂಕಾ, ಬಿಐಇಟಿ ನಿರ್ದೇಶಕ ಪ್ರೊ.ವೈ. ವೃಷಭೇಂದ್ರಪ್ಪ, ಬಿಐಇಟಿ ಪ್ರಾಚಾರ್ಯ ಡಾ.ಕೆ.ಎಸ್. ಬಸವರಾಜಪ್ಪ, ಬಿಇಎ ಹೈಯರ್ ಪ್ರೈಮರಿ ಶಾಲೆಯ ಪ್ರಾಂಶುಪಾಲ ಜೆ. ಪದ್ಮನಾಭ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ಕಾರ್ಯದರ್ಶಿ ಎಂ.ಗುರುಸಿದ್ಧಸ್ವಾಮಿ ಇದ್ದರು. ಸಹಾಯಕ ಪ್ರಾಧ್ಯಾಪಕಿ ಅಶ್ವಿನಿ ಎಂ.ರಾವ್ ಸ್ವಾಗತಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT