ಮಂಗಳವಾರ, ಏಪ್ರಿಲ್ 20, 2021
31 °C
ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ

ಶಿಕ್ಷಕರ ಸಮಸ್ಯೆ: ಸಿಎಂ. ಸಚಿವರೊಂದಿಗೆ ಚರ್ಚೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ವೃಂದ ಮತ್ತು ನೇಮಕಾತಿ ನಿಯಮಕ್ಕೆ ತಿದ್ದುಪಡಿ ಸೇರಿ ಶಿಕ್ಷಕರ ಸಮಸ್ಯೆಗಳ ನಿವಾರಣೆ ಸಂಬಂಧ ಶಿಕ್ಷಣ ಸಚಿವರೊಂದಿಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದಿಂದ ಇಲ್ಲಿನ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಶೈಕ್ಷಣಿಕ ಕಾರ್ಯಾಗಾರ ಹಾಗೂ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ, ಶಿಕ್ಷಕರ ಮನವಿಗೆ ಪ್ರತಿಕ್ರಿಯಿಸಿದರು.

‘1.60 ಲಕ್ಷಕ್ಕೂ ಹೆಚ್ಚು ಪ್ರಾಥಮಿಕ ಶಾಲಾ ಶಿಕ್ಷಕರ ಪೈಕಿ 80 ಸಾವಿರಕ್ಕೂ ಹೆಚ್ಚು ಮಂದಿ ಪದವೀಧರರೇ ಇದ್ದಾರೆ. ಇವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿಯೇ ಉಳಿದಿದ್ದು, ಸೇವಾ ಆಧಾರದ ಮೇಲೆ ಬಡ್ತಿ ನೀಡುವುದು ಸದ್ಯಕ್ಕೆ ನಿಂತಿದೆ. ಸದ್ಯಕ್ಕೆ ವರ್ಗಾವಣೆಗೆ ಸರ್ಕಾರವು ಆದ್ಯತೆ ನೀಡಿದ್ದು, ಈ ವಿಚಾರವಾಗಿ ನ್ಯಾಯಾಲಯದಲ್ಲಿ ಪ್ರಕರಣ ನಡೆಯುತ್ತಿದೆ. ಈ ಕಾರಣದಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡಲಾಗುತ್ತಿಲ್ಲ’ ಎಂದು ಹೇಳಿದರು.

‘ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ನೀಡುವ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ವಾಸ್ತವದ ಬಗ್ಗೆ ಮನವರಿಕೆ ಮಾಡುವೆ. ಅಧಿವೇಶನದಲ್ಲೂ ಈ ವಿಚಾರದ ಬಗ್ಗೆ ಧ್ವನಿ ಎತ್ತಿ ನ್ಯಾಯ ದೊರಕಿಸುವ ಪ್ರಯತ್ನ ಮಾಡುವೆ’ ಎಂದರು.

ಶಾಸಕ ರೇಣುಕಾಚಾರ್ಯ ಅವರೊಂದಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಸಿಎಂ ಗಮನಕ್ಕೆ ತರುವ ಜತೆಗೆ ಸದನದಲ್ಲಿ ಪ್ರಸ್ತಾಪಿಸಿ ಪರಿಹಾರಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಎಸ್.ವಿ.ರಾಮಚಂದ್ರ ಭರವಸೆ ನೀಡಿದರು.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಂಭುಲಿಂಗನಗೌಡ ಪಾಟೀಲ ಮಾತನಾಡಿ, ‘ನೇಮಕಾತಿ ಹೊಂದಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ ಪದದ ಬದಲಾಗಿ ವಿಲೀನ ಎಂದು ಪರಿಗಣಿಸಬೇಕು. ಸೇವಾನಿರತ ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆಯಿಂದ ವಿನಾಯಿತಿ ನೀಡಬೇಕು’ ಎಂದು ಆಗ್ರಹಿಸಿದರು.

‘ಸಂಕಲ್ಪ’ ಪಂಚವಾರ್ಷಿಕ ಕ್ರಿಯಾಯೋಜನೆಯನ್ನು ಬಿಡುಗಡೆ ಗೊಳಿಸಲಾಯಿತು. ನೂತನ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು. ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕೆ.ವಿ.ಶಾಂತಕುಮಾರಿ, ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಪಾಲಾಕ್ಷಿ, ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಅಧ್ಯಕ್ಷ ಎನ್.ಇ.ನಟರಾಜ್, ಡಯಟ್ ಪ್ರಾಚಾರ್ಯ ಎಚ್.ಕೆ.ಲಿಂಗರಾಜ್, ಬಿಇಒ ನಿರಂಜನಮೂರ್ತಿ, ರಾಜ್ಯ ಹಿರಿಯ ಉಪಾಧ್ಯಕ್ಷ ಟಿ.ಶಿವಾನಂದ್, ರಾಜ್ಯ ಸಂಘಟನಾ ಕಾರ್ಯದರ್ಶಿ ಮಹಾಂತೇಶ ಓಬಜ್ಜಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಡಿ.ರಾಮಪ್ಪ, ಗೌರವಾಧ್ಯಕ್ಷ ಎಂ.ಸಿದ್ದೇಶಿ, ಶಿವಶರಣ ಬಸವ ಪಾಟೀಲ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು