ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಮಂತ್ರಿ ಜನ್ ವಿಕಾಸ್ ಕಾರ್ಯಕ್ರಮದಡಿ ಜಿಲ್ಲೆ ಆಯ್ಕೆ

ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಜಾರ್ಜ್ ಕುರಿಯನ್ ಮಾಹಿತಿ
Last Updated 6 ಫೆಬ್ರುವರಿ 2020, 10:45 IST
ಅಕ್ಷರ ಗಾತ್ರ

ದಾವಣಗೆರೆ: ಅಲ್ಪಸಂಖ್ಯಾತ ಕೇಂದ್ರೀಕೃತ ಪ್ರದೇಶಗಳ ಸಾಮಾಜಿಕ ಆರ್ಥಿಕ ಸ್ಥಿತಿ ಸುಧಾರಣೆಗಾಗಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ, ಅಭಿವೃದ್ಧಿಪಡಿಸುವ ಉದ್ದೇಶದಿಂದ ಜಾರಿಗೆ ಬಂದಿರುವ ಪ್ರಧಾನಮಂತ್ರಿ ಜನ್ ವಿಕಾಸ್ ಕಾರ್ಯಕ್ರಮದಡಿ (ಪಿಎಂಜೆವಿಕೆ) ಈ ಜಿಲ್ಲೆ ಆಯ್ಕೆಯಾಗಿದೆ ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ಜಾರ್ಜ್ ಕುರಿಯನ್ ತಿಳಿಸಿದರು.

ಜಿಲ್ಲಾಡಳಿತದ ಕಚೇರಿಯಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಿಎಂಜೆವಿಕೆ ಅಲ್ಪಸಂಖ್ಯಾತರ ಶೈಕ್ಷಣಿಕ, ಆರೋಗ್ಯ ಮತ್ತು ಕೌಶಲಾಭಿವೃದ್ಧಿಯಂತಹ ಮೂಲ ಸೌಕರ್ಯಗಳನ್ನು ಒದಗಿಸುವ ಹಾಗೂ ಮೂಲ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಿದೆ. ರಾಷ್ಟ್ರದಾದ್ಯಂತ 308 ಜಿಲ್ಲೆಗಳನ್ನು ಈ ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲು ಆಯ್ಕೆ ಮಾಡಲಾಗಿದೆ. ಅದರಲ್ಲಿ ದಾವಣಗೆರೆಯೂ ಒಂದು ಎಂದು ತಿಳಿಸಿದರು.

ಪ್ರಧಾನಮಂತ್ರಿ ಜನ ವಿಕಾಸ ಕಾರ್ಯಕ್ರಮದಡಿ ವಸತಿಯುತ ಕಾಲೇಜು, ಐಟಿಐ ಕಾಲೇಜು, ಬಾಲಕ ಮತ್ತು ಬಾಲಕಿಯರ ವಸತಿ ನಿಲಯಗಳು, ಉದ್ಯೋಗನಿರತ ಮಹಿಳೆಯರ ವಸತಿನಿಲಯಗಳು, ಸಮುದಾಯ ಭವನಗಳು, ಮಾರುಕಟ್ಟೆ ಸ್ಥಳಗಳು ಸೇರಿದಂತೆ ಇತರೆ ಸಾಮಾಜಿಕ ಆರ್ಥಿಕ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗುವುದು. ಅಲ್ಪಸಂಖ್ಯಾತರ ಸಾಮಾಜಿಕ ಆರ್ಥಿಕ ಸ್ಥಿತಿ ಸುಧಾರಣೆ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಅಲ್ಪಸಂಖ್ಯಾತ ಕೇಂದ್ರೀಕೃತ ಪ್ರದೇಶಗಳಲ್ಲಿ ಜಾರಿಗೊಳಿಸಲಾಗುವುದು. ಮಹಾನಗರಪಾಲಿಕೆ ಮತ್ತು ಹರಿಹರ ನಗರಸಭೆಗಳು ಈ ಕಾರ್ಯಕ್ರಮದಡಿ ಆಯ್ಕೆಗೊಂಡಿದ್ದು, ಈ ಕಾರ್ಯಕ್ರಮ ಅನುಷ್ಟಾನಕ್ಕೆ ಕೇಂದ್ರ ಮತ್ತು ರಾಜ್ಯ ಕ್ರಮವಾಗಿ 60:40 ಅನುಪಾತದಲ್ಲಿ ಅನುದಾನ ಒದಗಿಸಲಿವೆ ಎಂದರು.

ಜಿಲ್ಲೆಯಲ್ಲಿ ಪಿಎಂಜೆವಿಕೆ ಕಾರ್ಯಕ್ರಮದಡಿ ದಾವಣಗೆರೆ ತಾಲ್ಲೂಕಿನ ವಡೇರಹಳ್ಳಿಯಲ್ಲಿ ರೆಸಿಡೆನ್ಶಿಯಲ್ ಪಿಯು ಕಾಲೇಜು ಆರಂಭಿಸಲು 8 ಎಕರೆ ಜಾಗ ಮೀಸಲಿಡಲಾಗಿದೆ. ಕಟ್ಟಡ ನಿರ್ಮಾಣ ಕಾಮಗಾರಿಗೆ ಕೆಎಚ್‌ಬಿಯವರಿಗೆ ಏಜೆನ್ಸಿ ನೀಡಲಾಗಿದೆ. ಜನ ವಿಕಾಸ ಯೋಜನೆಯಡಿ ಹರಿಹರ ಮತ್ತು ದಾವಣಗೆರೆ ನಗರದ 24 ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಪ್ರಾರಂಭಿಸಲು ಎಲೆಕ್ಟ್ರಾನಿಕ್ ಸಾಮಗ್ರಿಗಳನ್ನು ನೀಡಲಾಗುತ್ತಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗಂಗಪ್ಪ ಮಾಹಿತಿ ನೀಡಿದರು.

ಮಂಡಕ್ಕಿಭಟ್ಟಿಯ ಪ್ರದೇಶದಲ್ಲಿ ಮೂಲ ಸೌಕರ್ಯ ಒದಗಿಸುವ ಮತ್ತು ಅಭಿವೃದ್ಧಿ ಕುರಿತು ಯೋಜನೆಯೊಂದನ್ನು ರೂಪಿಸಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವಿಜಯ್‌ಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪರಮೇಶ್ವರಪ್ಪ, ಪಾಲಿಕೆ ಆಯುಕ್ತ ವಿಶ್ವನಾಥ ಮುದಜ್ಜಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ ಮಾಹಿತಿ ನೀಡಿದರು.

ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯರಾದ ಬುನಿಯನ್ ಸುಮಿತ್ರಾ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೀಶ್, ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಮುದಗಲ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT